ಅಗತ್ಯ ಮುನ್ನಚ್ಚರಿಕೆ ಕೈಗೊಳ್ಳುವಂತೆ ಶಾಸಕ ಸೂಚನೆ

| Published : Aug 03 2024, 12:31 AM IST

ಸಾರಾಂಶ

ಕಾರ್ಕಳ ಮತ್ತು ಹೆಬ್ರಿ ತಾಲೂಕುಗಳನ್ನು ಭೂ ಕುಸಿತ ಉಂಟಾಗಬಹುದಾದ ತಾಲೂಕುಗಳು ಎಂದು ರಾಜ್ಯ ಸರ್ಕಾರವು ಘೋಷಣೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ತಹಸೀಲ್ದಾರರು ಹಾಗೂ ಕಾರ್ಯನಿರ್ವಹಣಾಧಿಕಾರಿಗಳು, ಕ್ಷೇತ್ರ ಮಟ್ಟದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳ ತುರ್ತು ಸಭೆ ನಡೆಯಿತು.

ಕನ್ನಡಪ್ರಭ ವಾರ್ತೆ ಕಾರ್ಕಳ

ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾರ್ಕಳ ಮತ್ತು ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿನ ಪ್ರಾಕೃತಿಕ ವಿಕೋಪ ನಿರ್ವಹಣೆ ಕುರಿತಂತೆ ಕಾರ್ಕಳ ಶಾಸಕ ವಿ ಸುನಿಲ್‌ ಕುಮಾರ್‌ ಉಭಯ ತಾಲೂಕಿನ ತಹಸೀಲ್ದಾರರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಸ್ತುತ ಅತೀ ಹೆಚ್ಚು ಮಳೆಯಾಗುತ್ತಿದ್ದು, ಭೂ ಕುಸಿತ, ಗುಡ್ಡ ಕುಸಿತ ಮತ್ತು ಅಪಾಯಕಾರಿ ಸ್ಥಳಗಳನ್ನು ಗುರುತಿಸಿ, ಆ ಪರಿಸರದಲ್ಲಿ ವಾಸವಾಗಿರುವ ಕುಟುಂಬಗಳಿಗೆ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು.

ಕಾರ್ಕಳ ಮತ್ತು ಹೆಬ್ರಿ ತಾಲೂಕುಗಳನ್ನು ಭೂ ಕುಸಿತ ಉಂಟಾಗಬಹುದಾದ ತಾಲೂಕುಗಳು ಎಂದು ರಾಜ್ಯ ಸರ್ಕಾರವು ಘೋಷಣೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ತಹಸೀಲ್ದಾರರು ಹಾಗೂ ಕಾರ್ಯನಿರ್ವಹಣಾಧಿಕಾರಿಗಳು, ಕ್ಷೇತ್ರ ಮಟ್ಟದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳ ತುರ್ತು ಸಭೆ ನಡೆಸಿ ಭೂ ಕುಸಿತ ಹಾಗೂ ಗುಡ್ಡ ಕುಸಿತ ಸಂಭವಿಸಬಹುದಾದಂತಹ ಅಪಾಯಕಾರಿ ಸ್ಥಳಗಳನ್ನು ಗುರುತಿಸುವಂತೆ ಸೂಚಿಸಲಾಯಿತು. ಕಾರ್ಕಳ ಕ್ಷೇತ್ರದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಅಗಲೀಕರಣ ಕಾಮಗಾರಿಯು ಪ್ರಗತಿಯಲ್ಲಿದ್ದು ಹೆದ್ದಾರಿ ಬದಿಯ ಅಪಾಯಕಾರಿ ಸ್ಥಳಗಳಲ್ಲಿರುವ ಅಂಗಡಿ-ಮುಂಗಟ್ಟುಗಳ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳುವಂತೆ ತಹಸೀಲ್ದಾರರಿಗೆ ತಿಳಿಸಲಾಯಿತು.

ಮೆಸ್ಕಾಂ ಕಾರ್ಕಳ ವಿಭಾಗ ವ್ಯಾಪ್ತಿಯ ಕಾರ್ಕಳ, ನಿಟ್ಟೆ ಹಾಗೂ ಹೆಬ್ರಿ ಉಪವಿಭಾಗ ವ್ಯಾಪ್ತಿಗಳಲ್ಲಿ ಸುಮಾರು 735ಕ್ಕೂ ಹೆಚ್ಚು ವಿದ್ಯುತ್‌ ಕಂಬಗಳು ತುಂಡಾಗಿ ಹಾನಿಯಾಗಿದ್ದು, ಹಾನಿಯಾದ ವಿದ್ಯುತ್ ಕಂಬಗಳನ್ನು ಕೂಡಲೇ ದುರಸ್ಥಿಪಡಿಸಿ ವಿದ್ಯುತ್‌ ಸಂಪರ್ಕಗಳನ್ನು ಮರುಸ್ಥಾಪಿಸಲಾಗಿದ್ದು, ಮುಂದಿನ ದಿನಗಳಲ್ಲಿ ಅಡಚಣೆ ರಹಿತ ವಿದ್ಯುತ್‌ ಪೂರೈಕೆಗಾಗಿ ಅಗತ್ಯವಿರುವ ಎಲ್ಲ ಪರಿಕರಗಳು ಹಾಗೂ ಸಿಬ್ಬಂದಿಗಳೊಂದಿಗೆ ಸನ್ನದ್ಧರಾಗಿರುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.

ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ ಕ್ಷೇತ್ರ ವ್ಯಾಪ್ತಿಯ ರಸ್ತೆಗಳಿಗೆ ಹಾನಿಯಾಗಿದ್ದು, ರಸ್ತೆಯ ಎರಡೂ ಬದಿಗಳಲ್ಲಿ ನೀರು ಸರಾಗವಾಗಿ ಹರಿದುಹೋಗಲು ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸಿ ರಸ್ತೆಗಳ ಮೇಲೆ ಮಳೆನೀರು ಹರಿಯದಂತೆ ಕ್ರಮ ವಹಿಸಲು ಹಾಗೂ ಪ್ರವಾಹ ಪರಿಸ್ಥಿತಿಯಿಂದಾಗಿ ಸೇತುವೆಗಳಿಗೆ ಹಾನಿಯಾಗಿದ್ದಲ್ಲಿ ಕೂಡಲೇ ಸ್ಥಳ ಪರಿಶೀಲನೆ ನಡೆಸಿ ಸೂಕ್ತ ಕ್ರಮವಹಿಸುವಂತೆ ಲೋಕೋಪಯೋಗಿ ಹಾಗೂ ಪಂಚಾಯತ್‌ರಾಜ್‌ ಇಂಜಿನಿಯರಿಂಗ್‌ ಇಲಾಖಾ ಅಧಿಕಾರಿಗಳಿಗೆ ಸೂಚಿಸಲಾಯಿತು. ಹೆದ್ದಾರಿ ಹಾಗೂ ಇನ್ನಿತರ ಪ್ರದೇಶಗಳಲ್ಲಿರುವ ಅಪಾಯಕಾರಿ ಮರಗಳನ್ನು ಕೂಡಲೇ ತೆರವುಗೊಳಿಸಲು ಕ್ರಮ ವಹಿಸುವಂತೆ ಅರಣ್ಯಾಧಿಕಾರಿಗಳಿಗೆ ತಿಳಿಸಿದರು.

ಮುಖ್ಯವಾಗಿ ಕ್ಷೇತ್ರ ವ್ಯಾಪ್ತಿಯಲ್ಲಿ ಭೂ ಕುಸಿತ ಸಂಭವಿಸಬಹುದಾದ ಸ್ಥಳಗಳನ್ನು ಗುರುತಿಸಿ, ಪ್ರಾಕೃತಿಕ ವಿಕೋಪದಂತಹ ತುರ್ತು ಸಂದರ್ಭಗಳಲ್ಲಿ ಪರಿಹಾರ ಹಾಗೂ ಅಗತ್ಯ ರಕ್ಷಣಾ ಕಾರ್ಯಗಳಿಗೆ ಎಲ್ಲಾ ಇಲಾಖಾಧಿಕಾರಿಗಳು ಸರ್ವ ಸನ್ನದ್ಧವಾಗಿರುವಂತೆ ತಿಳಿಸಿದರು.