ಸಾರಾಂಶ
ಕುಶಾಲನಗರ ಪಟ್ಟಣ ಸೇರಿದಂತೆ ಸುತ್ತಮುತ್ತ ವ್ಯಾಪ್ತಿಯ ಗ್ರಾಮಗಳಿಗೆ ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಅಭಾವ ತಲೆದೋರದಂತೆ ಸ್ಥಳೀಯ ಆಡಳಿತಗಳಿಗೆ ಸೂಕ್ತ ಸಲಹೆ ಸೂಚನೆ ನೀಡಲಾಗಿದೆ ಎಂದು ಶಾಸಕರು ಹೇಳಿದರು.
ಕನ್ನಡಪ್ರಭ ವಾರ್ತೆ ಕುಶಾಲನಗರ
ಕುಶಾಲನಗರ ಪಟ್ಟಣ ಸೇರಿದಂತೆ ಸುತ್ತಮುತ್ತ ವ್ಯಾಪ್ತಿಯ ಗ್ರಾಮಗಳಿಗೆ ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಅಭಾವ ತಲೆದೋರದಂತೆ ಸ್ಥಳೀಯ ಆಡಳಿತಗಳಿಗೆ ಸೂಕ್ತ ಸಲಹೆ ಸೂಚನೆ ನೀಡಲಾಗಿದೆ ಎಂದು ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂತರ್ ಗೌಡ ತಿಳಿಸಿದ್ದಾರೆ.ಅವರು ಮಂಗಳವಾರ ಕುಶಾಲನಗರದ ಶಾಸಕರ ಕಚೇರಿಯಲ್ಲಿ ಜನರ ಅಹವಾಲುಗಳನ್ನು ಸ್ವೀಕರಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಅಗತ್ಯ ಇರುವಲ್ಲಿ ಟ್ಯಾಂಕರ್ ಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡುವಂತೆ ಸಂಬಂಧಿಸಿದ ಪುರಸಭೆ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಕಾವೇರಿ ಮತ್ತು ಹಾರಂಗಿ ಸಂಗಮ ಬಳಿ ಈಗಾಗಲೇ ಸರ್ಕಾರದ ಮೂಲಕ 40 ಕೋಟಿ ರು. ಯೋಜನೆಯನ್ನು ರೂಪಿಸಲಾಗಿದ್ದು ಕಾಮಗಾರಿ ನಡೆಯುತ್ತಿದೆ.ಈ ಯೋಜನೆ ಮೂಲಕ ಕುಶಾಲನಗರ ಮತ್ತು ಸುತ್ತಮುತ್ತ ಗ್ರಾಮಗಳ ಜನತೆಗೆ 24*7 ಕಾಲ ನಿರಂತರ ನೀರು ಒದಗಿಸುವ ಕಾರ್ಯ ನಡೆಯಲಿದೆ ಎಂದು ಹೇಳಿದರು.
ಮುಂದಿನ ವರ್ಷ ಈ ಯೋಜನೆ ಪೂರ್ಣಗೊಂಡು ಲೋಕಾರ್ಪಣೆ ಗೊಳ್ಳಲಿದೆ ಎಂದು ಅವರು ಮಾಹಿತಿ ನೀಡಿದರು.ಕುಶಾಲನಗರ ಪಟ್ಟಣ ಸೇರಿದಂತೆ ಸುತ್ತಮುತ್ತ ಗ್ರಾಮಗಳ ನಾಗರಿಕರು ತಮ್ಮ ಸಮಸ್ಯೆಗಳ ಬಗ್ಗೆ ಶಾಸಕರೊಂದಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭ ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಪ್ರಮೋದ್ ಮುತ್ತಪ್ಪ, ನಗರ ಕಾಂಗ್ರೆಸ್ ಅಧ್ಯಕ್ಷರಾದ ಜೋಸೆಫ್ ವಿಕ್ಟರ್ ಸೋನ್ಸ್, ಶಾಸಕರ ಆಪ್ತ ಸಹಾಯಕರಾದ ಕಿರಣ್, ರಂಜು ಹೆಬ್ಬಾಲೆ ಮತ್ತಿತರರು ಇದ್ದರು.