ಎನ್‌ಡಿಎ ಅಭ್ಯರ್ಥಿಯಾಗಿರುವ ಕೆ.ಎಂ. ಸುರೇಶ್ ಅವರು ಶಿಕ್ಷಕರ ಪರವಾಗಿ ಕಾಳಜಿ ಹೊಂದಿದ್ದು ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಆಯ್ಕೆ ಮಾಡುವಂತೆ ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿ ಗಣೇಶ್ ಶಿಕ್ಷಕರಿಗೆ ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ತುಮಕೂರು

ಎನ್‌ಡಿಎ ಅಭ್ಯರ್ಥಿಯಾಗಿರುವ ಕೆ.ಎಂ. ಸುರೇಶ್ ಅವರು ಶಿಕ್ಷಕರ ಪರವಾಗಿ ಕಾಳಜಿ ಹೊಂದಿದ್ದು ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಆಯ್ಕೆ ಮಾಡುವಂತೆ ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿ ಗಣೇಶ್ ಶಿಕ್ಷಕರಿಗೆ ಮನವಿ ಮಾಡಿದರು.

ಆಗ್ನೇಯ ಪದವಿಧರರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಅವರ ಪರವಾಗಿ ಶಾಸಕರು ಬುಧವಾರ ನಗರದ ವಿವಿಧ ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಕಚೇರಿಗಳಿಗೆ ತೆರಳಿ ಪದವಿಧರ ಮತದಾರರನ್ನು ಭೇಟಿ ಮಾಡಿ ಮತಯಾಚಿಸಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಅಭ್ಯರ್ಥಿಯಾಗಿ ಸಜ್ಜನ ವ್ಯಕ್ತಿ ಸುರೇಶ್ ಅವರು ಆಗ್ನೇಯ ಪದವಿಧರರ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದಾರೆ. ಶಿಕ್ಷಣ ಸಂಸ್ಥೆ ಹೊಂದಿರುವ ಇವರಿಗೆ ಶಿಕ್ಷಕರ ಸಮಸ್ಯೆಗಳ ಅರಿವಿದೆ. ಈ ಕ್ಷೇತ್ರದಿಂದ ಆಯ್ಕೆಯಾದ ಬಿಜೆಪಿ ಸದಸ್ಯರು ಪರಿಷತ್ತಿನಲ್ಲಿ ಶಿಕ್ಷಕರ ಪರವಾಗಿ ಧ್ವನಿ ಎತ್ತಲಿದ್ದಾರೆ ಎಂದರು.

ಶಿಕ್ಷಕರ ಪರವಾದ ಅನೇಕ ನೀತಿಗಳು ರೂಪುಗೊಳ್ಳಲು ಕಾಳಜಿ ವಹಿಸಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಆಗಿನ ಮುಖ್ಯಮಂತ್ರಿ ಯಡಿಯೂರಪ್ಪನವರು ಶಿಕ್ಷಕರಿಗೆ ಹಾಗೂ ಸರ್ಕಾರಿ ನೌಕರರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ ನೆರವಾಗಿದ್ದರು ಎಂದು ಹೇಳಿದರು.

ಆರ್ಯಭಾರತಿ ಪಾಲಿಟೆಕ್ನಿಕ್, ಸಪ್ತಗಿರಿ ಪದವಿ ಪೂರ್ವ ಕಾಲೇಜು, ಕೇಂಬ್ರಿಡ್ಜ್ ವಿದ್ಯಾಂಸ್ಥೆ ಮತ್ತಿತರ ಶಿಕ್ಷಣ ಸಂಸ್ಥೆಗಳು, ವಿವಿಧ ಸರ್ಕಾರಿ ಕಚೇರಿಗಳಿಗೆ ತೆರಳಿ ಶಾಸಕರು ಎನ್‌ಡಿಎ ಅಭ್ಯರ್ಥಿ ಪರವಾಗಿ ಮತಯಾಚನೆ ಮಾಡಿದರು.

ಆರ್ಯಭಾರತಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಸತ್ಯನಾರಾಯಣ, ನಗರ ಪಾಲಿಕೆ ಮಾಜಿ ಸದಸ್ಯ ಸಿ.ಎನ್.ರಮೇಶ್, ತುಮಕೂರು ವಿವಿ ಮಾಜಿ ಸಿಂಡಿಕೇಟ್ ಸದಸ್ಯ ಟಿ.ಎಸ್.ಸುನಿಲ್‌ಪ್ರಸಾದ್, ಮುಖಂಡರಾದ ರವಿಕುಮಾರ್, ಯತೀಶ್‌ಗೌಡ, ರಮೇಶ್ ನಾಯಕ್ ಮೊದಲಾದವರು ಪ್ರಚಾರದಲ್ಲಿ ಭಾಗವಹಿಸಿದ್ದರು.