ಸಾರಾಂಶ
ಅರಸೀಕೆರೆ: ಹಾಸನಾಂಬೆ ದೇವಿ ಮಹೋತ್ಸವವು ಅಕ್ಟೋಬರ್ 9ರಿಂದ 24ರವರೆಗೆ ವಿಜೃಂಭಣೆಯಿಂದ ನಡೆಯಲಿದೆ. ಈ ಮಹೋತ್ಸವದಲ್ಲಿ ಎಲ್ಲರೂ ಭಾಗಿಯಾಗಿ ಯಶಸ್ವಿಗೊಳಿಸಬೇಕೆಂದು ಶಾಸಕ ಹಾಗೂ ರಾಜ್ಯ ಗೃಹಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡರು ಕರೆ ನೀಡಿದರು. ಮಾರುತಿ ನಗರ ಬಡಾವಣೆಯಲ್ಲಿರುವ ಗೃಹ ಕಚೇರಿಯಲ್ಲಿ ಉಪವಿಭಾಗಾಧಿಕಾರಿ ಮಾರುತಿ ಆಹ್ವಾನ ಪತ್ರಿಕೆಯನ್ನು ಶಾಸಕರಿಗೆ ನೀಡಿ ಸ್ವಾಗತ ಕೋರಿದ ಸಂದರ್ಭದಲ್ಲಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ ಅನೇಕ ಸಭೆಗಳನ್ನು ನಡೆಸಲಾಗಿದೆ. ಹಾಸನಾಂಬೆ ಸನ್ನಿಧಿಗೆ ಲಕ್ಷಾಂತರ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಮೂಲಭೂತ ಸೌಲಭ್ಯಗಳು ಮತ್ತು ಎಲ್ಲಾ ವ್ಯವಸ್ಥಿತ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಹಾಸನದ ಹಿರಿಯ ಅಧಿಕಾರಿಗಳು ಸಮರೋಪಾದಿಯಲ್ಲಿ ಸಿದ್ಧತೆ ನಡೆಸುತ್ತಿದ್ದಾರೆ. ಎಲ್ಲರೂ ಸೇರಿ ಈ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸೋಣ ಎಂದು ಹೇಳಿದರು. ಹಾಸನ ಉಪವಿಭಾಗಾಧಿಕಾರಿ ಮಾರುತಿ ಮಾತನಾಡಿ, ಜಿಲ್ಲಾಡಳಿತದ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಅನೇಕ ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಇಂದು ಶಾಸಕರಾದ ಕೆ.ಎಂ. ಶಿವಲಿಂಗೇಗೌಡರಿಗೆ ಆಹ್ವಾನ ಪತ್ರಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದರು. ಗ್ರಾಮ ಲೆಕ್ಕಾಧಿಕಾರಿ ಶಿವಾನಂದ ನಾಯಕ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.