ಮಳೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಶಾಸಕ ಮಾನೆ ಸೂಚನೆ

| Published : Jul 20 2024, 12:50 AM IST

ಮಳೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಶಾಸಕ ಮಾನೆ ಸೂಚನೆ
Share this Article
  • FB
  • TW
  • Linkdin
  • Email

ಸಾರಾಂಶ

ತಾಲೂಕು ಹಾಗೂ ಪಕ್ಕದ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಶಾಸಕ ಶ್ರೀನಿವಾಸ ಮಾನೆ ಶುಕ್ರವಾರ ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಹಾಗೂ ಹಾನಗಲ್ಲ ತಹಸೀಲ್ದಾರ್ ಅವರೊಂದಿಗೆ ತುರ್ತು ಸಭೆ ನಡೆಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸೂಚಿಸಿದರು.

ಹಾನಗಲ್ಲ: ತಾಲೂಕು ಹಾಗೂ ಪಕ್ಕದ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಶಾಸಕ ಶ್ರೀನಿವಾಸ ಮಾನೆ ಶುಕ್ರವಾರ ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಹಾಗೂ ಹಾನಗಲ್ಲ ತಹಸೀಲ್ದಾರ್ ಅವರೊಂದಿಗೆ ತುರ್ತು ಸಭೆ ನಡೆಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸೂಚಿಸಿದರು.ಹಾನಗಲ್ ತಾಲೂಕು ಮಾತ್ರವಲ್ಲದೇ ಪಕ್ಕದ ಶಿರಸಿ, ಸೊರಬ ಸೇರಿದಂತೆ ಮಲೆನಾಡು ಪ್ರದೇಶದಲ್ಲಿ ಎಡಬಿಡದೇ ಮಳೆ ಸುರಿಯುತ್ತಿದೆ. ಕೆಲವೇ ಗಂಟೆಗಳಲ್ಲಿ ಮಳಗಿ ಧರ್ಮಾಜಲಾಶಯವೂ ಭರ್ತಿಯಾಗಿ ಕೋಡಿ ಬೀಳಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮತ್ತು ತಾಲೂಕಾಡಳಿತ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ವರದಾ ಮತ್ತು ಧರ್ಮಾ ನದಿಗಳು ಮೈದುಂಬಿ ಹರಿಯುತ್ತಿರುವುದರಿಂದ ನದಿ ಪಾತ್ರದ ಗ್ರಾಮಗಳಲ್ಲಿ ಕಟ್ಟೆಚ್ಚರ ವಹಿಸಬೇಕು. ಅಗತ್ಯ ಸುರಕ್ಷತಾ ಕ್ರಮಗಳ ಬಗ್ಗೆ ಗಮನ ಹರಿಸುವಂತೆ ಶ್ರೀನಿವಾಸ ಮಾನೆ ಸೂಚಿಸಿದರು.ತಕ್ಷಣವೇ ತಾಲೂಕಿನ ಎಲ್ಲ ಪಿಡಿಒ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳೊಂದಿಗೆ ಝೂಮ್ ಮೀಟಿಂಗ್ ನಡೆಸಿ. ಶಿಥಿಲ ಮನೆಗಳಲ್ಲಿ ವಾಸಿಸುತ್ತಿರುವ ಕುಟುಂಬಗಳನ್ನು ಸುರಕ್ಷತಾದೃಷ್ಟಿಯಿಂದ ಬೇರೆಡೆ ಸ್ಥಳಾಂತರಕ್ಕೆ ಗಮನ ನೀಡಬೇಕು. ಅಪಾಯಕಾರಿ ಹಂತದಲ್ಲಿರುವ ಗ್ರಾಮಗಳ ಪಟ್ಟಿ ಮಾಡಿ, ಡಂಗುರ ಸಾರಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಸಂಭವನೀಯ ಹಾನಿಗೀಡಾಗುವ ಗ್ರಾಮಗಳನ್ನು ಗುರುತಿಸಿ, ಅಂಥ ಕಡೆಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಲು ಸಿದ್ಧತೆ ಮಾಡಿಕೊಳ್ಳಿ ಎಂದು ಶಾಸಕ ಮಾನೆ ಸೂಚಿಸಿದರು.ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ವಿಶೇಷ ತಂಡ ರಚಿಸಿಕೊಂಡು ಕೆಲಸ ಮಾಡಲು ಸನ್ನದ್ಧರಾಗಬೇಕು. ವರದಾ ಮತ್ತು ಧರ್ಮಾ ನದಿಗಳ ಸಂಗಮದಿಂದ ಹಿನ್ನೀರು ನುಗ್ಗುವ ಹಿನ್ನೆಲೆಯಲ್ಲಿಯೂ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಶ್ರೀನಿವಾಸ ಮಾನೆ ಸೂಚಿಸಿದರು.ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ತಹಸೀಲ್ದಾರ್ ಎಸ್. ರೇಣುಕಮ್ಮ ಈ ಸಂದರ್ಭದಲ್ಲಿದ್ದರು.