ಸಾರಾಂಶ
ಹನೂರು ತಾಲೂಕಿನ ಮಲೆ ಮಾದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆಯುತ್ತಿರುವ 512 ಕೊಠಡಿ ಕಾಮಗಾರಿಗಳನ್ನು ಶಾಸಕ ಎಂಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕನ್ನಡಪ್ರಭ ವಾರ್ತೆ ಹನೂರು
ಏ.24ರಂದು ಮಲೆಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ನಡೆಯಲಿರುವ ಹಿನ್ನೆಲೆಯಲ್ಲಿ ಶಾಸಕ ಎಂ ಆರ್ ಮಂಜುನಾಥ್ ಭೇಟಿ ನೀಡಿ ವಿವಿಧ ಸಿದ್ಧತೆಗಳ ಬಗ್ಗೆ ಮತ್ತು ಕಾಮಗಾರಿಗಳ ಬಗ್ಗೆ ಪರಿಶೀಲನೆ ನಡೆಸಿದರು.ತಾಲೂಕಿನ ಮಲೆ ಮಾದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆಯುತ್ತಿರುವ 512 ಕೊಠಡಿ ಕಾಮಗಾರಿಗಳ ಪರಿಶೀಲನೆ ನಡೆಸಿ ಕೂಡಲೇ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸೂಚನೆ ನೀಡಿದರು. ನಂತರ ಕ್ಷೇತ್ರದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವಂತೆ ದೊಡ್ಡಕೆರೆ ಮುಂಭಾಗದ ರಸ್ತೆ ಒಳಚರಂಡಿ ಸ್ವಚ್ಛಗೊಳಿಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು..
ಹುಂಡಿ ಎಣಿಕೆ ಕಾರ್ಯ ಸ್ಥಳಕ್ಕೆ ಭೇಟಿ:ಮಲೆಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಹುಂಡಿ ಎಣಿಕೆ ಕಾರ್ಯಕ್ರಮವನ್ನು ಸಹ ವೀಕ್ಷಣೆ ಮಾಡಿ ಪ್ರಾಧಿಕಾರದ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು.
ಏ.24ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ರಾಜ್ಯ ಸಚಿವರ ಮತ್ತು ಹಿರಿಯ ಅಧಿಕಾರಿಗಳ ಪ್ರಮುಖದಲ್ಲಿ ನಡೆಯಲಿರುವ ಸಚಿವ ಸಂಪುಟ ಪೂರ್ವ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿ ಆಗಬೇಕಾಗಿರುವ ಕಾಮಗಾರಿ ಮತ್ತು ಸಿದ್ಧತೆಗಳನ್ನು ತುರ್ತಾಗಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು. ಮುಖ್ಯಮಂತ್ರಿಗಳು ಮತ್ತು ಸಚಿವರ ಹಾಗೂ ಶಾಸಕರು ಹಿರಿಯ ಅಧಿಕಾರಿಗಳು ಸಚಿವ ಸಂಪುಟ ಹಿನ್ನೆಲೆಯಲ್ಲಿ ಬರುವುದರಿಂದ ಮಲೆ ಮಾದೇಶ್ವರ ಬೆಟ್ಟದಲ್ಲಿ ಸಕಲ ಸಿದ್ಧತೆಗಳನ್ನು ತುರ್ತಾಗಿ ಪೂರ್ಣಗೊಳಿಸುವಂತೆ ತಿಳಿಸಿದರು.ಇದೇ ಸಂದರ್ಭದಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು ಲೋಕೋಪಯೋಗಿ ಇಲಾಖೆಯ ಎಇಇ ಚಿನ್ನಣ್ಣ ಹಾಗೂ ಅಧಿಕಾರಿಗಳು ಮತ್ತು ಮುಖಂಡರು ಉಪಸ್ಥಿತರಿದ್ದರು.