ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಜನರ ಮನಸ್ಸನ್ನು ಗೆಲ್ಲುವ ರೀತಿಯಲ್ಲಿ ಕೆಲಸ ಮಾಡಬೇಕು
ಕುಷ್ಟಗಿ: ಮುಂಬರುವ ಚುನಾವಣೆ ಗಮನದಲ್ಲಿಟ್ಟುಕೊಂಡು ಬಿಜೆಪಿ ಕಾರ್ಯಕರ್ತರು ಗ್ರಾಮ ಮಟ್ಟದಲ್ಲಿ ಪಕ್ಷ ಸಂಘಟಿಸಲು ಮುಂದಾಗಬೇಕು ಎಂದು ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು.
ತಾಲೂಕಿನ ಹಿರೇಬನ್ನಿಗೋಳ ಗ್ರಾಮದ ಅಟಲ್ ಜೀ ಸಭಾ ಭವನದಲ್ಲಿ ಭಾರತೀಯ ಜನತಾ ಪಕ್ಷದಿಂದ ಪಂ.ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ–2026 ಅಂಗವಾಗಿ ಮಂಡಲ ಮಟ್ಟದ ಪ್ರಶಿಕ್ಷಣ ವರ್ಗ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಜನರ ಮನಸ್ಸನ್ನು ಗೆಲ್ಲುವ ರೀತಿಯಲ್ಲಿ ಕೆಲಸ ಮಾಡಬೇಕು, ಅಂದಾಗ ಮಾತ್ರ ಪಕ್ಷಕ್ಕೆ ಯಶಸ್ಸು ಲಭಿಸಲಿದೆ. ಜನರೊಂದಿಗೆ ನಿಕಟ ಸಂಪರ್ಕ ಹೊಂದುವ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು ಎಂದರು.
ಮುಂದಿನ ದಿನಗಳಲ್ಲಿ ಬರುವಂತಹ ಜಿಪಂ ಹಾಗೂ ತಾಪಂ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕರ್ತರು ಸಂಘಟಿತವಾಗಿ ಸಿದ್ಧತೆ ಕೈಗೊಳ್ಳಬೇಕು ಎಂದು ತಿಳಿಸಿದರು.ಪ್ರಶಿಕ್ಷಣ ವರ್ಗದ ಉದ್ದೇಶ ಕುರಿತು ಪಕ್ಷದ ತತ್ವ,ಸಿದ್ಧಾಂತ ಹಾಗೂ ಸಂಘಟನಾ ಬಲವನ್ನು ವೃದ್ಧಿಸುವಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವದ ಪಾತ್ರವಹಿಸುತ್ತವೆ ಎಂದು ಹೇಳಿದ ಅವರು, ಗ್ರಾಮ ಮಟ್ಟದಿಂದಲೇ ಪಕ್ಷ ಬಲಪಡಿಸಲು ಯುವಕರು ಹಾಗೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರೇರೇಪಿಸಬೇಕು ಎಂದು ಸಲಹೆ ನೀಡಿದರು.
ಪಕ್ಷದ ಹಿರಿಯ ಮುಖಂಡರು ಕಾರ್ಯಕರ್ತರಿಗೆ ಸಂಘಟನೆ, ಚುನಾವಣಾ ತಂತ್ರಗಳು, ಜನಸಂಪರ್ಕದ ವಿಧಾನ ಹಾಗೂ ಸರ್ಕಾರದ ಯೋಜನೆ ಜನರಿಗೆ ತಲುಪಿಸುವ ಬಗ್ಗೆ ಮಾರ್ಗದರ್ಶನ ನೀಡಿದರು. ಕಾರ್ಯಕರ್ತರು ಶಿಸ್ತಿನಿಂದ ಹಾಗೂ ಸಮರ್ಪಣಾಭಾವದಿಂದ ಕಾರ್ಯನಿರ್ವಹಿಸಿದರೆ ಮುಂದಿನ ಚುನಾವಣೆಯಲ್ಲಿ ಉತ್ತಮ ಫಲಿತಾಂಶ ಸಾಧಿಸಲು ಸಾಧ್ಯವೆಂದು ವಿಶ್ವಾಸ ವ್ಯಕ್ತಪಡಿಸಿದರು.ಮಾಜಿ ಜಿಪಂ ಸದಸ್ಯ ಕೆ. ಮಹೇಶ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು ಕಾರ್ಯಕ್ರಮದ ಉದ್ದೇಶ ವಿವರಿಸಿದರು.
ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ. ಬಸವರಾಜ ಕ್ಯಾವಟರ್ ಮಾತನಾಡಿದರು.ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ತಾಲೂಕಾಧ್ಯಕ್ಷ ಮಹಾಂತೇಶ ಬಾದಾಮಿ, ರಾಜ್ಯ ಉಪಾಧ್ಯಕ್ಷ ವಿಜಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಹೆಸರೂರು ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.