ಸಾರಾಂಶ
ಶಾಸಕ ಪೊನ್ನಣ್ಣ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.
ಕನ್ನಡಪ್ರಭ ವಾರ್ತೆ ಮಡಿಕೇರಿ
ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ, ಕರ್ನಾಟಕ ರಾಜ್ಯ ಸರ್ಕಾರದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿಯಾಗಿ, ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆರೋಗ್ಯ ಇಲಾಖೆಗೆ ಸಂಬಂಧಿಸಿದ ಹಲವು ಮಹತ್ವದ ವಿಷಯಗಳ ಕುರಿತು ಮಾತುಕತೆ ನಡೆಸಿದರು.ಕ್ಷೇತ್ರಾದ್ಯಂತ ಜನರ ಅವಶ್ಯಕತೆಗಳು ಹಾಗೂ ಆರೋಗ್ಯ ಸಮಸ್ಯೆಗಳ ಬಗ್ಗೆ ಸವಿವರವಾಗಿ ಆರೋಗ್ಯ ಸಚಿವರಿಗೆ ವಿವರಿಸಿದ ಶಾಸಕರು, ತನ್ನ ಕ್ಷೇತ್ರಗಳಲ್ಲಿನ ಆಸ್ಪತ್ರೆಗಳ ಮೇಲ್ದರ್ಜೆಗೇರಿಸುವ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸುವಂತೆ ಮನವಿ ಮಾಡಿದರು.
ಸಮುದಾಯ ಆರೋಗ್ಯ ಕೇಂದ್ರಗಳ ಬಗ್ಗೆ ಹಾಗೂ ವೈದ್ಯರ ಕೊರತೆಯ ಬಗ್ಗೆ ಸಚಿವರ ಗಮನ ಸೆಳೆದಾಗ, ಕೂಡಲೇ ಖಾಲಿ ಇರುವ ಸ್ಥಾನಗಳನ್ನು ತುಂಬಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಕ್ಷೇತ್ರಕ್ಕೆ ಸಂಬಂಧಿಸಿದ ಇನ್ನೂ ಹಲವು ಬೇಡಿಕೆಗಳನ್ನು ಹಂತಹಂತವಾಗಿ ಪರಿಶೀಲಿಸಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಇದೇ ಸಂದರ್ಭದಲ್ಲಿ ಸಚಿವರು ಭರವಸೆ ನೀಡಿದರು.ಸಭೆಯಲ್ಲಿ ಆರೋಗ್ಯ ಇಲಾಖೆಯ ಆಯುಕ್ತರು, ಸರ್ಕಾರದ ಅಭಿಯಾನ ನಿರ್ದೇಶಕರು, ಮಡಿಕೇರಿ ಡಿಎಚ್‌ಒ ಡಾ.ಸತೀಶ್ ಮತ್ತಿತರರಿದ್ದರು.