ಸಾರಾಂಶ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ
ಮತಕ್ಷೇತ್ರದ ಪ್ರತಿ ಗ್ರಾಮ ಹಾಗೂ ಪಟ್ಟಣಗಳಲ್ಲಿ ಬೇಸಿಗೆ ವೇಳೆ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುಂಜಾಗ್ರತೆ ಕ್ರಮ ಕೈಗೊಂಡು, ಜಾಗೃತಿಯಿಂದ ಕಾರ್ಯನಿರ್ವಹಿಸಬೇಕು ಎಂದು ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಪಿಡಿಒಗಳಿಗೆ ಸೂಚಿಸಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಟಾಸ್ಕ್ ಪೋರ್ಸ್ ಸಭೆಯಲ್ಲಿ ಮಾತನಾಡಿದ ಅವರು, ಪ್ರಸಕ್ತ ವರ್ಷ ಭೀಕರ ಬರಗಾಲದಿಂದ ಕ್ಷೇತ್ರದ ರೈತರು, ಜನರು ಸಂಕಷ್ಟದಲ್ಲಿದ್ದಾರೆ. ಜನ - ಜಾನುವಾರುಗಳಿಗೆ ನೀರಿನ ಕೊರತೆ ಎದುರಾಗಬಹುದು. ಸದ್ಯ ಡಿಸೆಂಬರ್ ಮತ್ತು ಜನವರಿ ವರೆಗೆ ನೀರಿನ ತೊಂದರೆಯಾಗುವುದಿಲ್ಲ. ಆದರೆ, ನಂತರದ ದಿನಗಳಲ್ಲಿ ಜನ - ಜಾನುವಾರಗಳಿಗೆ ಕುಡಿಯುವ ನೀರಿನ ತೊಂದರೆ ಎದುರಾಗುವ ಸಾಧ್ಯತೆ ಇದೆ. ಅದರಲ್ಲೂ ಗ್ರಾಮೀಣ ಭಾಗಗಳಲ್ಲಿ ಹೆಚ್ಚು ಸಮಸ್ಯೆ ಉಂಟಾಗಬಹುದು. ಗ್ರಾಮ ಪಂಚಾಯತ ಅಧಿಕಾರಿಗಳು ಜನರಿಗೆ ಶುದ್ಧ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುತುವರ್ಜಿ ವಹಿಸಬೇಕು. ನಿಷ್ಕಾಳಜಿ ತೋರಿದರೆ ತಪ್ಪಿತಸ್ಥರ ವಿರುದ್ಧ ಯಾವುದೇ ಮುಲ್ಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಸಭೆಯಲ್ಲಿ ತಹಸೀಲ್ದಾರ್ ಪ್ರಕಾಶ ಸಿಂದಗಿ ಮಾತನಾಡಿ, ತಾಲೂಕಿನ ಹಲವು ಗ್ರಾಮಗಳಲ್ಲಿ ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ಆಗಬಹುದು. ಅಂತಹ ಗ್ರಾಮಗಳಿಗೆ ಪರಿಹಾರ ಕಂಡುಕೊಳ್ಳಲು ಬೇಕಾದ ವರದಿ ಸಲ್ಲಿಸುವಂತೆ ಪಿಡಿಒಗಳಿಗೆ ತಿಳಿಸಿದರು. ತಾಪಂ ಇಒ ಭಾರತಿ ಚೆಲುವಯ್ಯ ಮಾತನಾಡಿ, ಹುಣಶ್ಯಾಳ, ಕೋರವಾರ, ಕೆರೂಟಗಿ ಹಿಟ್ಟನಹಳ್ಳಿ, ಮಣೂರ ಗ್ರಾಪಂ ವ್ಯಾಪ್ತಿಯಲ್ಲಿ ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದ ಹಾಗೆ ಕ್ರಮ ಕೈಗೊಳ್ಳಿ. ನೈಜವಾಗಿ ನೀರಿನ ಸಮಸ್ಯೆ ಇರುವಲ್ಲಿ ನಮ್ಮ ಹಾಗೂ ಶಾಸಕರ ಗಮನಕ್ಕೆ ತನ್ನಿ. ನೀರಿಗಾಗಿ ಪರ್ಯಾಯ ವ್ಯವಸ್ಥೆ ಇಲ್ಲವೇ ಕೊಳವೆಬಾವಿ ಕೊರೆಯಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಎಇಇ ಮಂಜುನಾಥ ಸ್ವಾಮಿಗೆ ತಾಲೂಕಿನ ಯಾವ ಗ್ರಾಮಗಳಲ್ಲಿ ನೀರಿನ ಅತಿ ಅವಶ್ಯಕತೆ ಇದ್ದಲ್ಲಿ ಅನುದಾನ ಬಳಸಿಕೊಂಡು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ. ಹಾಗೂ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಪೈಪ್‌ಲೈನ್‌ಗೆ ವಿದ್ಯುತ್ ಸಂಪರ್ಕ ನೀಡಬೇಕು ಎಂದು ಹೆಸ್ಕಾಂ ಎಇಇ ಗಂಗಾಧರ ಲೋಣಿ ಅವರಿಗೆ ತಿಳಿಸಿದರು.
ಕಂದಾಯ ಹಾಗೂ ಪಶುಸಂಗೋಪನ ಇಲಾಖೆಯ ಅಧಿಕಾರಿಗಳಿಗೆ ಕೂಡಲೇ ಮೇವು ಬ್ಯಾಂಕ್ ಹಾಗೂ ಗೋಶಾಲೆ ತೆರೆಯಲು ಕ್ರಮ ಕೈಗೊಳ್ಳಲು ಸೂಚಿಸಿದರು. ಮುಳಸಾವಳಗಿ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಪಡಗಾನೂರ ಗ್ರಾಮದ 15ನೇ ಹಣಕಾಸಿನ ಅನುದಾನ ಸುಮಾರು ವರ್ಷಗಳಿಂದ ಬರುತ್ತಿಲ್ಲ. ಈ ಕುರಿತು ಹಲವಾರು ಬಾರಿ ಅಧಿಕಾರಿಗಳಿಗೆ ತಿಳಿಸಿದ್ದೇವೆ ಎಂದು ಶಾಸಕರಿಗೆ ಮನವಿ ಮಾಡಿದರು. ನಂತರ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ 4 ತಾಲೂಕುಗಳ ಅಧಿಕಾರಿಗಳು ಭಾಗವಹಿಸಿ ಕೆರೆಗಳ ಹಾಗೂ ಗ್ರಾಮಗಳಲ್ಲಿ ನೀರಿನ ಸಮಸ್ಯೆಗಳ ಕುರಿತು ಶಾಸಕರು ಗಮನಕ್ಕೆ ತಂದರು.ಸಭೆಗೆ ಗೈರಾದ ಇಲಾಖೆಗಳ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಶಾಸಕರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಸಭೆಯಲ್ಲಿ ಟಾಸ್ಕ್ ಪೋರ್ಸ ತಾಲೂಕು ನೋಡಲ್ ಅಧಿಕಾರಿಗಳು ಹಾಗೂ ಜಿಲ್ಲಾ ಪ್ರವಾಸೋದ್ಯಮ ಉಪನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ತಹಸೀಲ್ದಾರ್ ಪ್ರಕಾಶ ಸಿಂದಗಿ, ತಾಳಿಕೋಟಿ ತಹಸೀಲ್ದಾರ್ ಕೀರ್ತಿ ಚಾಲಕ, ಬಸವನಬಾಗೇವಾಡಿ ತಹಸೀಲ್ದಾರ್ ಸೋಮನ ಕಟ್ಟಿ, ನಿಡಗುಂದಿ ತಹಸೀಲ್ದಾರ್ ಎ.ಡಿ. ಅಮರವಾಡಗಿ, ಕಾರ್ಯನಿರ್ವಾಹಕ ಅಧಿಕಾರಿ ಭಾರತಿ ಚೆಲುವಯ್ಯ, ಬಸನಗೌಡ ಬಿರಾದಾರ, ಯುವರಾಜ,ವೀರೇಶ್ ಹಿರೇಮಠ, ಪ.ಪಂ ಮುಖ್ಯಾಧಿಕಾರಿ ಎಲ್.ಡಿ. ಮುಲ್ಲಾ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಪಿಡಿಒಗಳು ಇದ್ದರು.
ಕೋಟ್...ಬರಗಾಲದಿಂದ ಕ್ಷೇತ್ರದ ರೈತರು, ಜನರು ಸಂಕಷ್ಟದಲ್ಲಿದ್ದಾರೆ. ಜನ - ಜಾನುವಾರುಗಳಿಗೆ ನೀರಿನ ಕೊರತೆ ಎದುರಾಗಬಹುದು. ಸದ್ಯ ಡಿಸೆಂಬರ್ ಮತ್ತು ಜನವರಿ ವರೆಗೆ ನೀರಿನ ತೊಂದರೆಯಾಗುವುದಿಲ್ಲ. ಆದರೆ, ನಂತರದ ದಿನಗಳಲ್ಲಿ ಜನ - ಜಾನುವಾರಗಳಿಗೆ ಕುಡಿಯುವ ನೀರಿನ ತೊಂದರೆ ಎದುರಾಗುವ ಸಾಧ್ಯತೆ ಇದೆ. ಅದರಲ್ಲೂ ಗ್ರಾಮೀಣ ಭಾಗಗಳಲ್ಲಿ ಹೆಚ್ಚು ಸಮಸ್ಯೆ ಉಂಟಾಗಬಹುದು. ಗ್ರಾಮ ಪಂಚಾಯತ ಅಧಿಕಾರಿಗಳು ಜನರಿಗೆ ಶುದ್ಧ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುತುವರ್ಜಿ ವಹಿಸಬೇಕು. ನಿಷ್ಕಾಳಜಿ ತೋರಿದರೆ ತಪ್ಪಿತಸ್ಥರ ವಿರುದ್ಧ ಯಾವುದೇ ಮುಲ್ಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು.
ರಾಜುಗೌಡ ಪಾಟೀಲ ಕುದುರಿಸಾಲವಾಡಗಿ. ಶಾಸಕ