ಸಾರಾಂಶ
ನಾರಾಯಣಪುರ ಎಡದಂಡೆ ಕಾಲುವೆಯ ಅಚ್ಚುಕಟ್ಟು ಪ್ರದೇಶಗಳಿಗೆ ನೀರು ಹರಿಸುವ ಸಂಬಂಧ ನೀರಾವರಿ ಸಲಹಾ ಸಮಿತಿಯ ಸಭೆಯನ್ನು ಕರೆಯಬೇಕು ಎಂದು ಪತ್ರ ಬರೆದು ಕೃಷ್ಣಾ ಭಾಗ್ಯ ಜಲ ನಿಗಮ ವ್ಯವಸ್ಥಾಪಕ ನಿರ್ದೇಶಕರು ಮತ್ತು ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರಿಗೆ ಶಾಸಕ ರಾಜಾ ವೇಣುಗೋಪಾಲ ನಾಯಕ ಕೋರಿಕೆ ಸಲ್ಲಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಸುರಪುರ
ನಾರಾಯಣಪುರ ಎಡದಂಡೆ ಕಾಲುವೆಯ ಅಚ್ಚುಕಟ್ಟು ಪ್ರದೇಶಗಳಿಗೆ ನೀರು ಹರಿಸುವ ಸಂಬಂಧ ನೀರಾವರಿ ಸಲಹಾ ಸಮಿತಿಯ ಸಭೆಯನ್ನು ಕರೆಯಬೇಕು ಎಂದು ಪತ್ರ ಬರೆದು ಕೃಷ್ಣಾ ಭಾಗ್ಯ ಜಲ ನಿಗಮ ವ್ಯವಸ್ಥಾಪಕ ನಿರ್ದೇಶಕರು ಮತ್ತು ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರಿಗೆ ಶಾಸಕ ರಾಜಾ ವೇಣುಗೋಪಾಲ ನಾಯಕ ಕೋರಿಕೆ ಸಲ್ಲಿಸಿದ್ದಾರೆ.ಮಹಾರಾಷ್ಟ್ರ ರಾಜ್ಯದ ಕೃಷ್ಣ ಕೊಳ್ಳದ ಪ್ರದೇಶದಲ್ಲಿ ವಾಡಿಕೆಗಿಂತ ಅತಿ ಹೆಚ್ಚು ಮಳೆಯಾಗಿದೆ. ಇದರಿಂದ ಆಲಮಟ್ಟಿ ಜಲಾಶಯಕ್ಕೆ ದಿನಕ್ಕೆ 90 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ಒಳ ಹರಿವಿದೆ. ನೀರು ಹರಿದು ಬರುತ್ತಿರುವುದು ಹರ್ಷದಾಯಕ ಸಂಗತಿಯಾಗಿದೆ. ಇದೇ ರೀತಿ ನೀರಿನ ಹರಿಯುವಿಕೆ ಮುಂದುವರಿದಲ್ಲಿ ಜಲಾಶಯ ಶೀಘ್ರವೇ ಭರ್ತಿಯಾಗುತ್ತದೆ ಎಂದು ತಿಳಿಸಿದ್ದಾರೆ.
ನೀರಿನ ಹರಿವಿನ ಪ್ರಮಾಣ ಹೀಗೆ ಇದ್ದರೆ ಏಕಕಾಲದಲ್ಲಿ ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳು ಭರ್ತಿಯಾಗುವ ಹಂತಕ್ಕೆ ತಲುಪಬಹುದೆಂಬ ವಿಶ್ವಾಸವಿದೆ. ನಾರಾಯಣಪುರ ಎಡದಂಡೆ ಕಾಲುವೆ ಅಚ್ಚುಕಟ್ಟು ಪ್ರದೇಶಗಳಿಗೆ ನೀರು ಹರಿಸುವುದು ಅತೀ ಅವಶ್ಯಕವಾಗಿದೆ. ಈ ಭಾಗದ ರೈತಾಪಿ ವರ್ಗದ ಕೃಷಿ ಚುಟುವಟಿಕೆಗಳಿಗಾಗಿ ಕೆಬಿಜೆನ್ನೆಲ್ ವ್ಯವಸ್ಥಾಪಕ ನಿರ್ದೇಶಕರು ಶೀಘ್ರವೇ ದಿನಾಂಕ ನಿಗದಿ ಪಡಿಸಿ ನೀರಾವರಿ ಸಲಹಾ ಸಮಿತಿಯ ಸಭೆಯನ್ನು ಕರೆದು, ನೀರು ಹರಿಸಿ ಈ ಭಾಗದ ರೈತರ ಹಿತ ಕಾಯಬೇಕು ಎಂದು ಮನವಿ ಮಾಡಿದ್ದಾರೆ.