ಸಚಿವ ಶಿವರಾಜ ತಂಗಡಗಿ ವಿರುದ್ಧ ಕ್ರಮಕ್ಕೆ ಆಗ್ರಹ

| Published : Mar 28 2024, 12:52 AM IST

ಸಾರಾಂಶ

ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ಪದಾಧಿಕಾರಿಗಳು ಬುಧವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಚಿತ್ರದುರ್ಗ: ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ಪದಾಧಿಕಾರಿಗಳು ಬುಧವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಬಳಿಕ ಮಾತನಾಡಿದ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಕಾಲುವೆಹಳ್ಳಿ ಆರ್.ಪಾಲಯ್ಯ, ಮೋದಿ ಅವರ ಹೆಸರು ಕೂಗವ ಯುವಕರಿಗೆ ಕಪಾಳಕ್ಕೆ ಹೊಡೆಯಿರಿ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ಇದು ಯುವ ಜನಾಂಗದ ಮೇಲೆ ಹಲ್ಲೆ ಮಾಡಲು ಪ್ರೇರೆಪಿಸಿದಂತಾಗುತ್ತದೆ. ಹಾಗಾಗಿ ಅವರ ಮೇಲೆ ದೂರು ದಾಖಲಿಸುವಂತೆ ಜಿಲ್ಲಾ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೇವೆ ಎಂದರು.

ದೇಶದ ಭವಿಷ್ಯದ ಹರಿಕಾರರಾದ ಯುವಕರಿಗೆ ಹೊಡೆಯಿರಿ ಎಂದು ಪ್ರಚೋದಿಸಿರುವುದರಿಂದ ಯುವಕರು ಮತ ಚಲಾಯಿಸಲು ಮತಗಟ್ಟೆಗಳಿಗೆ ಬರಲು ಹೆದರುವ ಸಾಧ್ಯತೆಗಳಿವೆ. ರಾಜ್ಯದ ಯುವಕರಿಗೆ ರಕ್ಷಣೆ ನೀಡಬೇಕು ಮತ್ತು ಪ್ರಧಾನ ಮಂತ್ರಿಗಳ ಬಗ್ಗೆ ಕೇವಲವಾಗಿ ಮಾತನಾಡಿರುವ ಹಾಗೂ ಯುವಕರಿಗೆ ಭಯದ ದಿಗಿಲು ಹುಟ್ಟಿಸಿರುವ ಕಾರಣ ಸಚಿವ ಶಿವರಾಜ ತಂಗಡಗಿ ಅವರ ಮೇಲೆ ದೂರು ದಾಖಲು ಮಾಡಬೇಕೆಂದು ಆಗ್ರಹಿಸಿದರು.

ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ವಿ.ಎಸ್. ಹಳ್ಳಿ, ಗ್ರಾಮಾಂತರ ಪ್ರಧಾನ ಕಾರ್ಯದರ್ಶಿ ಕಲ್ಲೇಶ್, ಆದರ್ಶ, ಧನು, ಚಂದ್ರು, ಸಂಜಯ್ ಮನವಿ ಸಲ್ಲಿಸುವ ವೇಳೆ ಉಪಸ್ಥಿತರಿದ್ದರು.