ಕನ್ನಡಪ್ರಭ ವಾರ್ತೆ ಹಾಸನ

ತಾಲೂಕಿನ ಕಸಬಾ ಹೋಬಳಿಯ ಸಿಂಗಪಟ್ಟಣ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ₹೩ ಕೋಟಿ ರುಪಾಯಿಗಳಿಗೂ ಅಧಿಕ ಹಣ ದುರುಪಯೋಗವಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಂಘದ ಆವರಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಸಂಘದ ಕಾರ್ಯದರ್ಶಿ ಹಾಗೂ ಆಡಳಿತ ಮಂಡಳಿಯ ವಿರುದ್ಧ ಹಾಲು ಉತ್ಪಾದಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಹಣಕಾಸಿನ ವ್ಯವಹಾರಗಳ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಕ್ಷೇತ್ರದ ಶಾಸಕ ಎಚ್. ಪಿ. ಸ್ವರೂಪ್ ಅವರನ್ನು ಆಗ್ರಹಿಸಿದರು.

ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್ ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರು, ಹಾಲು ಉತ್ಪಾದಕರು ಹಾಗೂ ಸಂಘದ ಸದಸ್ಯರೊಂದಿಗೆ ಸಭೆ ನಡೆಸಿದರು. ರೈತರ ಅಹವಾಲುಗಳನ್ನು ಆಲಿಸಿದ ಅವರು, ಯಾವುದೇ ರೀತಿಯ ಅವ್ಯವಹಾರ ನಡೆದಿದ್ದರೆ ಅದನ್ನು ಮುಚ್ಚಿಹಾಕುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಸಭೆಯಲ್ಲಿ ಮಾತನಾಡಿದ ಶಾಸಕರು, “ಸಿಂಗಪಟ್ಟಣ ಹಾಲು ಉತ್ಪಾದಕರ ಸಹಕಾರ ಸಂಘವು ನೂರಾರು ರೈತರ ಬದುಕಿನ ಆಧಾರವಾಗಿದೆ. ಹೈನುಗಾರಿಕೆಯನ್ನು ನಂಬಿಕೊಂಡಿರುವ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಹಣ ದುರುಪಯೋಗದ ಆರೋಪದ ಬಗ್ಗೆ ಸಂಪೂರ್ಣ ತನಿಖೆ ನಡೆಸಿ ಸತ್ಯಾಸತ್ಯತೆ ಹೊರತರುವ ಕೆಲಸ ಆಗಲಿದೆ” ಎಂದು ಭರವಸೆ ನೀಡಿದರು.

ಅಧಿಕಾರಿಗಳಿಂದ ಸ್ಥಳ ಪರಿಶೀಲನೆ ಈ ಸಂಬಂಧ ಗುರುವಾರವೇ ಜಿಲ್ಲಾ ಹಾಲು ಒಕ್ಕೂಟದ ವ್ಯವಸ್ಥಾಪಕರು, ಸೂಪರ್‌ವೈಸರ್‌ಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸಿಂಗಪಟ್ಟಣಕ್ಕೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಲಿದ್ದಾರೆ. ಹಣಕಾಸಿನ ವ್ಯವಹಾರಗಳು, ಲೆಕ್ಕಪತ್ರಗಳು ಮತ್ತು ಆಡಳಿತಾತ್ಮಕ ಕ್ರಮಗಳ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.


ಸಂಘದ ಕಾರ್ಯದರ್ಶಿ ಕಳೆದ ೨೧ ವರ್ಷಗಳಿಂದ ಅದೇ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಈ ಅವಧಿಯ ಆಡಳಿತ ಮತ್ತು ಹಣಕಾಸಿನ ವ್ಯವಹಾರಗಳ ಕುರಿತು ಗ್ರಾಮಸ್ಥರು ಹಲವು ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. ಕೆಲವು ಲೋಪದೋಷಗಳು ಕಂಡುಬಂದಿರುವುದಾಗಿ ಪ್ರಾಥಮಿಕ ಹಂತದಲ್ಲಿ ತಿಳಿದುಬಂದಿದ್ದು, ತನಿಖೆಯ ನಂತರ ಸತ್ಯಾಂಶ ಬಹಿರಂಗವಾಗಲಿದೆ ಎಂದು ಹೇಳಿದರು. ರೈತರ ಹಿತಾಸಕ್ತಿ ಮೊದಲ ಆದ್ಯತೆ. ಡೈರಿ ಸಂಸ್ಥೆ ಹಾಳಾಗುವುದು ಯಾರಿಗೂ ಒಳ್ಳೆಯದಲ್ಲ. ಈ ಭಾಗದಲ್ಲಿ ಮಳೆ ಮತ್ತು ಕೃಷಿ ಪರಿಸ್ಥಿತಿ ಅಷ್ಟಾಗಿ ಅನುಕೂಲಕರವಾಗಿಲ್ಲ. ಅನೇಕ ಕುಟುಂಬಗಳು ಹೈನುಗಾರಿಕೆಯನ್ನು ನಂಬಿಕೊಂಡಿವೆ. ಆದ್ದರಿಂದ ಸಂಸ್ಥೆಯನ್ನು ಉಳಿಸಿಕೊಂಡು ರೈತರ ಹಿತ ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು” ಎಂದು ಶಾಸಕ ವಿಶ್ವಾಸ ವ್ಯಕ್ತಪಡಿಸಿದರು.