ಸಾರಾಂಶ
ಕನ್ನಡಪ್ರಭ ವಾರ್ತೆ ಹಾಸನ
ಸಂಜೀವಿನಿ ಸಹಕಾರಿ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ಅಧ್ಯಕ್ಷರಾಗಿ ಹಾಸನ ಕ್ಷೇತ್ರದ ಶಾಸಕ ಸ್ವರೂಪ್ ಪ್ರಕಾಶ್ ಅವರು ಎರಡನೇ ಬಾರಿಗೆ ಅವಿರೋಧವಾಗಿ ಮರು ಆಯ್ಕೆಯಾಗಿದ್ದಾರೆ.ಮರು ಆಯ್ಕೆ ನಂತರ ಮಾತನಾಡಿದ ಶಾಸಕ ಸ್ವರೂಪ್ ಪ್ರಕಾಶ್ ಅವರು, ಸಂಜೀವಿನಿ ಸಹಕಾರಿ ಆಸ್ಪತ್ರೆ ಇಂದು ರಾಜ್ಯದ ಮಟ್ಟದಲ್ಲಿ ಎರಡನೇ ಸ್ಥಾನ ಪಡೆದುಕೊಂಡು ಹಾಸನದ ಹೆಮ್ಮೆಯ ಸಂಸ್ಥೆಯಾಗಿದೆ. 1988ರಲ್ಲಿ ಸ್ಥಾಪಿತವಾದ ಈ ಸಂಸ್ಥೆಗೆ ದಿವಂಗತ ಡಾ. ಗುರುರಾಜ್ ಹೆಬ್ಬಾರ್, ಡಾ. ಮುನಿವೆಂಕಟೇಗೌಡ ಮತ್ತು ಮಾಜಿ ಶಾಸಕ ಎಚ್.ಎಸ್. ಪ್ರಕಾಶ್ ಅವರಂತಹ ಹಿರಿಯರ ಮಾರ್ಗದರ್ಶನದಿಂದ ದೃಢ ನೆಲೆ ಸಿಕ್ಕಿದೆ ಎಂದು ಸ್ಮರಿಸಿದರು.ಕಳೆದ ಅವಧಿಯ 8 ನಿರ್ದೇಶಕರು ಮತ್ತೆ ಮುಂದುವರಿದಿದ್ದಾರೆ ಹಾಗೂ 5 ಹೊಸ ನಿರ್ದೇಶಕರು ತಂಡದಲ್ಲಿ ಸೇರಿದ್ದಾರೆ. ಎಲ್ಲರ ಸಹಕಾರದಿಂದ ಮತ್ತೊಮ್ಮೆ ಅಧ್ಯಕ್ಷನಾಗಿ ಆಯ್ಕೆಯಾಗಿರುವುದು ನನ್ನ ಭಾಗ್ಯ. ಈ ವಿಶ್ವಾಸಕ್ಕೆ ತಕ್ಕಂತೆ ಆಸ್ಪತ್ರೆಯ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಹೇಳಿದರು. ಹೊಸ ಯೋಜನೆಗಳ ಕುರಿತು ವಿವರಿಸಿದ ಸ್ವರೂಪ್ ಪ್ರಕಾಶ್ ಅವರು, ಕೆ.ಆರ್.ಪುರಂ ಪ್ರದೇಶದಲ್ಲಿ ನಿವೇಶನ ಖರೀದಿಸಿದ್ದು, ಅಲ್ಲಿ ಹೃದಯರೋಗಿಗಳಿಗೆ ವಿಶೇಷ ಆಸ್ಪತ್ರೆ ನಿರ್ಮಿಸುವ ಯೋಜನೆ ರೂಪಿಸಲಾಗಿದೆ. ಜೊತೆಗೆ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಸ್ಥಾಪನೆಗೂ ಸಿದ್ಧತೆ ನಡೆದಿದೆ. ಮುಂದಿನ ದಿನಗಳಲ್ಲಿ ಸಂಜೀವಿನಿ ಆಸ್ಪತ್ರೆಯನ್ನು ಅಂತಾರಾಷ್ಟ್ರೀಯ ಮಟ್ಟದ ಆರೋಗ್ಯ ಕೇಂದ್ರವನ್ನಾಗಿ ಮಾಡುವ ಉದ್ದೇಶವಿದೆ ಎಂದು ತಿಳಿಸಿದ್ದಾರೆ.ಅಧ್ಯಕ್ಷರ ಆಯ್ಕೆ ಸಂದರ್ಭದಲ್ಲಿ ಆಸ್ಪತ್ರೆಯ ಅಧಿಕಾರಿಗಳು, ವೈದ್ಯರು, ಷೇರುದಾರರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಉಪಸ್ಥಿತರಿದ್ದರು.
;Resize=(128,128))
;Resize=(128,128))