ಡೆಂಘೀ ನಿಯಂತ್ರಣಕ್ಕೆ ಶಾಸಕ ವಿಜಯಾನಂದ ಕಾಶಪ್ಪನವರ ಸೂಚನೆ

| Published : Nov 06 2024, 11:59 PM IST

ಸಾರಾಂಶ

ಡೆಂಘೀ ನಿಯಂತ್ರಣಕ್ಕೆ ತನ್ನಿ, ಸ್ವಚ್ಛತೆ ಕುರಿತು ಜಾಗೃತಿ ಮೂಡಿಸಿ. ಅಲ್ಲದೇ ಜ್ವರದ ಕುರಿತು ತಾಲೂಕಿನಾದ್ಯಂತ ಜಾಗೃತಿ ಮೂಡಿಸಿ ಉತ್ತಮ ಚಿಕಿತ್ಸೆ ನೀಡಿ

ಇಳಕಲ್ಲ: ತಾಲೂಕಿನಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅಧಿಕಾರಿಗಳು ಮತ್ತು ವೈದ್ಯರು ಏನು ಮಾಡುತ್ತಿದ್ದೀರಿ ಸರಿಯಾಗಿ ಚಿಕಿತ್ಸೆ ನೀಡುತ್ತಿಲ್ಲ ಎಂದು ಸಾರ್ವಜನಿಕರು ದೂರುತ್ತಿದ್ದಾರೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಅಧಿಕಾರಿಗಳಿಗೆ ಪ್ರಶ್ನಿಸಿದರು.

ನಗರದಲ್ಲಿ ಡೆಂಘೀ ಜ್ವರದ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಅವಳಿ ತಾಲೂಕುಗಳ ತಾಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನೆ ಸಭೆಯು ಶಾಸಕ ವಿಜಯಾನಂದ ಕಾಶಪ್ಪನವರ ನೇತೃತ್ವದಲ್ಲಿ ತಹಸೀಲ್ದಾರ್‌ ಕಾರ್ಯಾಲಯದಲ್ಲಿ ನಡೆಯಿತು. ನಗರದ ಖಾಸಗಿ ಆಸ್ಪತ್ರೆಗಳಲ್ಲಿ ಡೆಂಘೀ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿಲ್ಲ ಏಕೆ ಎಂದು ಪ್ರಶ್ನಿಸಿದ ಅವರು, ಸರ್ಕಾರಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಆದಷ್ಟು ಬೇಗನೆ ಡೆಂಘೀ ನಿಯಂತ್ರಣಕ್ಕೆ ತನ್ನಿ, ಸ್ವಚ್ಛತೆ ಕುರಿತು ಜಾಗೃತಿ ಮೂಡಿಸಿ. ಅಲ್ಲದೇ ಜ್ವರದ ಕುರಿತು ತಾಲೂಕಿನಾದ್ಯಂತ ಜಾಗೃತಿ ಮೂಡಿಸಿ ಉತ್ತಮ ಚಿಕಿತ್ಸೆ ನೀಡಿ ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಸಭೆಯಲ್ಲಿ ತಹಸೀಲ್ದಾರ್‌ ಸತೀಶ್ ಕೂಡಲಗಿ, ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಮುರಳಿಧರ ದೇಶಪಾಂಡೆ, ನಗರಸಭೆ ಪೌರಾಯುಕ್ತ ಶ್ರೀನಿವಾಸ ಜಾಧವ್, ಮುಖ್ಯ ಡಾ.ಚೇತನಾ ಶ್ಯಾವಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.