ಕನ್ನಡಪ್ರಭ ವಾರ್ತೆ ಇಂಡಿ

ವಿಧಾನಸಭಾ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಸೋಮವಾರ ನಗರದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಕುಂದುಕೊರತೆ ಆಲಿಸಿ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದ ಅಧಿಕಾರಿಗಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಸಾರ್ವಜನಿಕರಿಂದ ಬಂದಿದ್ದ ವಿವಿಧ ಸಮಸ್ಯೆಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಅವರು, ಜನರ ಸಮಸ್ಯೆಗಳನ್ನು ವಿಳಂಬವಿಲ್ಲದೆ ಬಗೆಹರಿಸುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ವಿವಿಧ ಗ್ರಾಮಗಳು ಹಾಗೂ ಪಟ್ಟಣಗಳಿಂದ ಆಗಮಿಸಿದ್ದ ಸಾರ್ವಜನಿಕರು ಕುಡಿಯುವ ನೀರು, ರಸ್ತೆ, ವಿದ್ಯುತ್, ಪಿಂಚಣಿ, ಕಂದಾಯ, ಆರೋಗ್ಯ, ಶಿಕ್ಷಣ ಸೇರಿ ಹಲವು ಮೂಲ ಸೌಲಭ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತಂದರು.

ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಶಾಸಕರು, ಪ್ರತಿಯೊಂದು ಸಮಸ್ಯೆ ಗಮನವಿಟ್ಟು ಆಲಿಸಿ, ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ದೂರವಾಣಿ ಮೂಲಕ ಸಂಪರ್ಕಿಸಿ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದು, ಅವುಗಳನ್ನು ಆದ್ಯತೆಯ ಮೇರೆಗೆ ತ್ವರಿತವಾಗಿ ಬಗೆಹರಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.


ಜನರ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸುವುದು ಜನಪ್ರತಿನಿಧಿಯಾಗಿ ನನ್ನ ಮೊದಲ ಆದ್ಯತೆಯಾಗಿದೆ. ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಬಾರದು. ಅಧಿಕಾರಿಗಳು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಿ, ಪ್ರತಿಯೊಂದು ಅರ್ಹ ಸಮಸ್ಯೆಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂದು ತಿಳಿಸಿದರು.

ಅಹವಾಲು ಸಲ್ಲಿಸಿದ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ನೇರವಾಗಿ ಆಲಿಸಿ ಅಧಿಕಾರಿಗಳೊಂದಿಗೆ ತಕ್ಷಣ ಸಂಪರ್ಕ ಸಾಧಿಸಿ ಕ್ರಮ ಕೈಗೊಂಡ ಶಾಸಕರ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಜನಸಂಪರ್ಕ ಸಭೆಯಲ್ಲಿ ಅನೇಕ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಂಡುಬಂದಿದ್ದು, ಉಳಿದ ಪ್ರಕರಣ ಶೀಘ್ರದಲ್ಲೇ ಇತ್ಯರ್ಥಪಡಿಸುವ ಭರವಸೆಯನ್ನು ಅಧಿಕಾರಿಗಳು ನೀಡಿದರು.ಈ ಸಂದರ್ಭದಲ್ಲಿ ಸಾರ್ವಜನಿಕರು, ಕೆಲ ಇಲಾಖೆಯ ಅಧಿಕಾರಿಗಳು,ಕಾರ್ಯಕರ್ತರು ಇದ್ದರು.