ಸಾರಾಂಶ
ಕನ್ನಡಪ್ರಭ ವಾರ್ತೆ ಬಾಗೂರುಹೋಬಳಿಯ ಬಿ ಹೊನ್ನೇನಹಳ್ಳಿ ಗ್ರಾಮದಲ್ಲಿ 1.70 ಕೋಟಿ ವೆಚ್ಚದಲ್ಲಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ ಎಂದು ಶಾಸಕ ಸಿ ಎನ್ ಬಾಲಕೃಷ್ಣ ತಿಳಿಸಿದರು.ಹೋಬಳಿಯ ಬಿ. ಹೊನ್ನೇನಹಳ್ಳಿ ಗ್ರಾಮದಲ್ಲಿ ನೂತನ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಈ ಹಿಂದೆ ಎಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ ಸಂದರ್ಭದಲ್ಲಿ ಸುಮಾರು 500 ಕೋಟಿ ಅನುದಾನವನ್ನು ತರುವ ಮೂಲಕ ತಾಲೂಕಿನ ಅನೇಕ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿತ್ತು. ಬಿಜೆಪಿ ಸರ್ಕಾರದ ಅವಧಿಯಲ್ಲಿ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಅನುದಾನ ದೊರೆತಿತ್ತು. ಆದರೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಅನುದಾನ ದೊರೆತಿಲ್ಲ. ಕಳೆದ ಎರಡು ವರ್ಷಗಳಿಂದ ತಾಲೂಕಿನಲ್ಲಿ ಮಳೆಯಿಂದ ಹಾಳಾಗಿರುವ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಸಮಸ್ಯೆಯಾಗುತ್ತಿದ್ದು, ಈ ಬಗ್ಗೆ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರಿಗೆ ಹೆಚ್ಚಿನ ಅನುದಾನ ನೀಡುವಂತೆ ಮನವಿ ಮಾಡಲಾಗಿದೆ ಎಂದರು.ಬಿ ಹೊನ್ನೇನಹಳ್ಳಿ ಗ್ರಾಮದಲ್ಲಿ ಈಗಾಗಲೇ ಕೆಲವರ ರಸ್ತೆಗಳನ್ನು ಅಭಿವೃದ್ಧಿಗೊಳಿಸಲಾಗಿದ್ದು ಗ್ರಾಮಸ್ಥರ ಒತ್ತಾಯದಂತೆ ಈ ರಸ್ತೆಗೂ ಅನುದಾನ ನೀಡಲಾಗಿದೆ ಎಂದರು. ಈ ಸಂದರ್ಭದಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷ ಬಿ ಎಚ್ ಶಿವಣ್ಣ, ಗ್ರಾಪಂ ಉಪಾಧ್ಯಕ್ಷೆ ವರಲಕ್ಷ್ಮಿ ಕಾಂತರಾಜ್, ಗ್ರಾಪಂ ಸದಸ್ಯ ಅಣ್ಣೇಗೌಡ, ಮುಖಂಡರಾದ ಓಬಳಾಪುರ ಬಸವರಾಜ್, ಮರಿ ದೇವೇಗೌಡ, ಮನು, ಕಾಂತರಾಜ್,ವಿ. ಮಂಜುನಾಥ್ ಗುತ್ತಿಗೆದಾರ ನಲ್ಲೂರು ಸಂತೋಷ್, ಸೇರಿದಂತೆ ಇತರರು ಹಾಜರಿದ್ದರು.