ಉಪಚುನಾವಣೆಗೆ ಪಕ್ಷ ಸಜ್ಜುಗೊಳಿಸಿ: ಸುರೇಶ್

| Published : Jul 18 2024, 01:32 AM IST

ಉಪಚುನಾವಣೆಗೆ ಪಕ್ಷ ಸಜ್ಜುಗೊಳಿಸಿ: ಸುರೇಶ್
Share this Article
  • FB
  • TW
  • Linkdin
  • Email

ಸಾರಾಂಶ

ಚನ್ನಪಟ್ಟಣ ಉಪಚುನಾವಣೆ ದಿನಾಂಕ ಯಾವಾಗ ಬೇಕಾದರೂ ಘೋಷಣೆ ಆಗಬಹುದು. ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವ ನಿಟ್ಟಿನಲ್ಲಿ ತಳಮಟ್ಟದಿಂದ ಪಕ್ಷ ಸಂಘಟನೆ ಮಾಡಬೇಕು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಬಿಡದಿಯಲ್ಲಿ ನಡೆದ ಚನ್ನಪಟ್ಟಣ ನಗರ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಕರೆ ನೀಡಿದರು.

ಚನ್ನಪಟ್ಟಣ: ಚನ್ನಪಟ್ಟಣ ಉಪಚುನಾವಣೆ ದಿನಾಂಕ ಯಾವಾಗ ಬೇಕಾದರೂ ಘೋಷಣೆ ಆಗಬಹುದು. ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವ ನಿಟ್ಟಿನಲ್ಲಿ ತಳಮಟ್ಟದಿಂದ ಪಕ್ಷ ಸಂಘಟನೆ ಮಾಡುವಂತೆ ಮಾಜಿ ಸಂಸದ ಡಿ.ಕೆ.ಸುರೇಶ್ ಕರೆ ನೀಡಿದರು.

ಬಿಡದಿಯಲ್ಲಿ ಹಮ್ಮಿಕೊಂಡಿದ್ದ ಚನ್ನಪಟ್ಟಣ ನಗರ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದ ಅಭ್ಯರ್ಥಿ ಯಾರಾಗುತ್ತಾರೆಂಬ ಚಿಂತೆ ಬಿಡಿ. ಅಭ್ಯರ್ಥಿ ಯಾರಾಗಬೇಕೆಂಬುದನ್ನು ಪಕ್ಷದ ವರಿಷ್ಠರು ನಿರ್ಧರಿಸಲಿದ್ದು, ಅಲ್ಲಿಯವರೆಗೆ ಕಾಯದೇ ಪಕ್ಷ ಸಂಘಟನೆ ಕಾರ್ಯವನ್ನು ಚುರುಕುಗೊಳಿಸಿ ಎಂದು ಸೂಚಿಸಿದರು.

ಉಪ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಬೂತ್ ಮಟ್ಟದಲ್ಲಿ ಪಕ್ಷ ಸಂಘಟಿಸಿ ಮೈತ್ರಿ ಪಕ್ಷದಿಂದ ಯಾರೇ ಸ್ಪರ್ಧಿಸಿದರೂ ಅವರಿಗೆ ಸ್ಪರ್ಧೆ ಒಡ್ಡುವ ರೀತಿಯಲ್ಲಿ ಪಕ್ಷವನ್ನು ಸಜ್ಜುಗೊಳಿಸಿ. ನೀವು ನಿಮ್ಮ ವಾರ್ಡ್‌ಗಳಲ್ಲಿ ಯಾವ ರೀತಿ ಸಂಘಟನೆ ಮಾಡುತ್ತೀರಾ, ಪಕ್ಷವನ್ನು ಯಾವ ರೀತಿ ಬಲಪಡಿಸುತ್ತೀರಾ ಎಂಬುದಷ್ಟೇ ಮುಖ್ಯ ಎಂದರು.

ಲೋಕಸಭಾ ಚುನಾವಣೆಯಲ್ಲಿ ಚನ್ನಪಟ್ಟಣದಲ್ಲಿ ನಮ್ಮ ನಿರೀಕ್ಷೆಗೂ ಮೀರಿ ಮತ ಬಂದಿದೆ. ಹಾಗಂತ ಮೈಮರೆತರೆ ಆಗುವುದಿಲ್ಲ. ವಿಧಾನಸಭೆ ಚುನಾವಣೆಯಲ್ಲಿ ಇನ್ನು ಹೆಚ್ಚಿನ ಮತಗಳನ್ನು ಗಳಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸಿ, ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸುವ ನಿಟ್ಟಿನಲ್ಲಿ ಈಗಿನಿಂದಲೇ ಪಕ್ಷವನ್ನು ಸಜ್ಜು ಮಾಡಿ ಎಂದು ಹೇಳಿದರು.

ಏನಾದರೂ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿದ್ದರೆ ಅದನ್ನು ಮರೆಯಿರಿ. ಎಲ್ಲರನ್ನು ಒಟ್ಟಿಗೆ ಕರೆದುಕೊಂಡು ಹೋಗುವ ಹಾಗೂ ಮೈತ್ರಿ ಪಕ್ಷದಲ್ಲಿ ಬೇಸರಗೊಂಡು ಪಕ್ಷ ಸೇರ್ಪಡೆಗೆ ಸಿದ್ಧವಿರುವ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಬಲಗೊಳಿಸಿ ಎಂದು ಹೇಳಿದರು.

ಸಭೆಯಲ್ಲಿ ಬಿಎಂಐಸಿಪಿಎಪಿಎ ಅಧ್ಯಕ್ಷ ರಘುನಂದನ್ ರಾಮಣ್ಣ, ಕೆಪಿಸಿಸಿ ಕಾರ್ಯದರ್ಶಿ ದುಂತೂರು ವಿಶ್ವಾನಾಥ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಗಂಗಾಧರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಸ್.ಆರ್.ಪ್ರಮೋದ್, ಸುನೀಲ್, ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷ ನಿಜಾಂ ಪೌಜ್‌ಧಾರ್, ಮುಖಂಡರಾದ ಮಲವೇಗೌಡ, ರಮೇಶ್, ವಿವೇಕ್, ಕೋಟೆ ಸ್ವಾಮಿ, ಫರೀದ್, ವಾಸಿಲ್, ಶಬ್ಬಿರುಲ್ಲಾಬೇಗ್ ಇತರರಿದ್ದರು.