ಕನ್ನಡಪ್ರಭ ವಾರ್ತೆ ಬೆಳಗಾವಿಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋಧಿ ಧೋರಣೆ ಖಂಡಿಸಿ, ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ನಡೆಯುತ್ತಿರುವ ‘ಹುಬ್ಬಳ್ಳಿ ಚಲೋ’ ಪಾದಯಾತ್ರೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ಶುಕ್ರವಾರ ಪ್ರತಿಭಟನಾಕಾರರು ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಹಾಗೂ ಶಿವರಾಜಸಿಂಗ್ ಚೌಹಾಣ್ ಅವರ ಅಣಕು ಶವಯಾತ್ರೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋಧಿ ಧೋರಣೆ ಖಂಡಿಸಿ, ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ನಡೆಯುತ್ತಿರುವ ‘ಹುಬ್ಬಳ್ಳಿ ಚಲೋ’ ಪಾದಯಾತ್ರೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ಶುಕ್ರವಾರ ಪ್ರತಿಭಟನಾಕಾರರು ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಹಾಗೂ ಶಿವರಾಜಸಿಂಗ್ ಚೌಹಾಣ್ ಅವರ ಅಣಕು ಶವಯಾತ್ರೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ರೈತ ಮುಖಂಡ ಹಾಗೂ ಸಂಘದ ರಾಜ್ಯಾಧ್ಯಕ್ಷ ಚೂನಪ್ಪ ಪೂಜಾರಿ ಅವರ ನೇತೃತ್ವದಲ್ಲಿ ಹತ್ತರಗಿ ಟೋಲ್ನಿಂದ ಆರಂಭಗೊಂಡ ಪಾದಯಾತ್ರೆ ಬೆಳಗಾವಿ ತಾಲೂಕಿನ ಕೊಳಿಕೊಪ್ಪ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಸಾಗಿತು. ನೂರಾರು ರೈತರು ಪಾಲ್ಗೊಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. ಕಬ್ಬು ಬೆಳೆಗಾರರ ಬೇಡಿಕೆಗಳನ್ನು ತಕ್ಷಣ ಈಡೇರಿಸುವಂತೆ ಒತ್ತಾಯಿಸಿದರು.
ಕಬ್ಬಿಗೆ ಟನ್ಗೆ ₹5,500 ದರ ನಿಗದಿಗೆ ಆಗ್ರಹ:ಕಬ್ಬಿಗೆ ಪ್ರತಿ ಟನ್ಗೆ ₹5,500 ದರ ನಿಗದಿಪಡಿಸಬೇಕು, ಸಕ್ಕರೆಗೆ ಕನಿಷ್ಠ ಬೆಂಬಲ ಬೆಲೆಯನ್ನು ₹60ಕ್ಕೆ ಹೆಚ್ಚಿಸಬೇಕು ಹಾಗೂ ರೈತರ ಉತ್ಪಾದನಾ ವೆಚ್ಚಕ್ಕೆ ಅನುಗುಣವಾಗಿ ಬೆಂಬಲ ಬೆಲೆ ನಿಗದಿಪಡಿಸಬೇಕು ಎಂಬುದು ರೈತರ ಪ್ರಮುಖ ಬೇಡಿಕೆಗಳಾಗಿವೆ. ತಮಿಳುನಾಡು ಮಾದರಿಯಲ್ಲಿ ಕಬ್ಬಿಗೆ ಪ್ರತಿ ಟನ್ಗೆ ₹1,000 ರಾಜ್ಯ ಬೆಂಬಲ ಬೆಲೆ ಘೋಷಿಸಬೇಕು ಎಂದೂ ರೈತರು ಆಗ್ರಹಿಸಿದ್ದಾರೆ.
ಹೆದ್ದಾರಿಯಲ್ಲಿ ಮುಂದುವರಿದ ಪಾದಯಾತ್ರೆ:ಬೆಳಗಾವಿ–ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಒಂದು ಬದಿಯಲ್ಲಿ ಪ್ರತಿದಿನ ಸುಮಾರು 30 ಕಿ.ಮೀ. ಕ್ರಮಿಸುತ್ತಾ ರೈತರು ಪಾದಯಾತ್ರೆ ಮುಂದುವರಿಸಿದ್ದಾರೆ. ಗುರುವಾರ ರಾತ್ರಿ ಬೆಳಗಾವಿಯ ಸುವರ್ಣ ವಿಧಾನಸೌಧದ ಸಮೀಪದ ಕಲ್ಯಾಣ ಮಂಟಪದಲ್ಲಿ ವಾಸ್ತವ್ಯ ಹೂಡಿದ್ದ ಪ್ರತಿಭಟನಾಕಾರರು, ಶುಕ್ರವಾರ ಬೆಳಗ್ಗೆ 10 ಗಂಟೆಗೆ ಮತ್ತೆ ಪಾದಯಾತ್ರೆ ಆರಂಭಿಸಿದರು.
ಶುಕ್ರವಾರ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ತಲುಪುವ ಗುರಿ ಹೊಂದಿರುವ ರೈತರು, ತಮ್ಮ ಬೇಡಿಕೆಗಳು ಈಡೇರುವವರೆಗೆ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಮನವಿ ಮಾಡಿಕೊಂಡಿದ್ದರೂ ಪ್ರತಿಭಟನೆ ಮುಂದುವರಿಸಲು ರೈತರು ನಿರ್ಧರಿಸಿದ್ದಾರೆ. ಪಾದಯಾತ್ರೆ ಸಾಗುವ ಮಾರ್ಗದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಕಲ್ಪಿಸಿದ್ದಾರೆ.ಹೋರಾಟಕ್ಕೆ ಶಶಿಕಾಂತ ಗುರೂಜಿ ಸಾಥ್:
ಕಬ್ಬು ಬೆಳೆಗಾರರ ಪಾದಯಾತ್ರೆಗೆ ರೈತ ಮುಖಂಡ ಶಶಿಕಾಂತ ಗುರೂಜಿ ಬೆಂಬಲ ವ್ಯಕ್ತಪಡಿಸಿದ್ದು, ಕೊಳಿಕೊಪ್ಪ ಬಳಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಚೂನಪ್ಪ ಪೂಜಾರಿ ಹಾಗೂ ಶಶಿಕಾಂತ ಗುರೂಜಿ ಅವರ ನೇತೃತ್ವದಲ್ಲಿ ರೈತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಮುನ್ನಡೆದರು. ಶುಕ್ರವಾರ ಸಂಜೆ ಎಂ.ಕೆ. ಹುಬ್ಬಳ್ಳಿ ಗ್ರಾಮದಲ್ಲಿ ರೈತರು ವಾಸ್ತವ್ಯ ಹೂಡಿದ್ದು, ಶನಿವಾರ ರೈತ ಸಂಘದ ಮುಖಂಡರು ಹಾಗೂ ಪದಾಧಿಕಾರಿಗಳ ಮಹತ್ವದ ಸಭೆ ನಡೆಯಲಿದೆ. ಸಭೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ನಿವಾಸಕ್ಕೆ ಪಾದಯಾತ್ರೆ ಮೂಲಕ ಮುತ್ತಿಗೆ ಹಾಕುವ ದಿನಾಂಕ ಸೇರಿದಂತೆ ಮುಂದಿನ ಹೋರಾಟದ ರೂಪುರೇಷೆಗಳನ್ನು ನಿರ್ಧರಿಸುವ ಸಾಧ್ಯತೆಯಿದೆ.ಗುರ್ಲಾಪುರದಲ್ಲೂ ಮತ್ತೆ ರೈತ ಚಳವಳಿ:
ಪಾದಯಾತ್ರೆಯ ಜತೆಗೆ ಗುರ್ಲಾಪುರದಲ್ಲಿಯೂ ರೈತ ಚಳವಳಿಯನ್ನು ಪುನಾರಂಭಿಸಲು ನಿರ್ಧರಿಸಲಾಗಿದೆ. ಶುಕ್ರವಾರದಿಂದ ಗುರ್ಲಾಪುರದ ಹೋರಾಟದ ವೇದಿಕೆಯಲ್ಲಿ ಪ್ರತಿಭಟನೆ ಮುಂದುವರಿಯಲಿದೆ ಎಂದು ಶಶಿಕಾಂತ ಗುರೂಜಿ ತಿಳಿಸಿದ್ದಾರೆ.ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವುದು ಸೇರಿದಂತೆ ರೈತರ ಪ್ರಮುಖ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸುವವರೆಗೆ ಹೋರಾಟವನ್ನು ಹಿಂಪಡೆಯುವುದಿಲ್ಲ ಎಂದು ರೈತ ಮುಖಂಡರು ಸ್ಪಷ್ಟಪಡಿಸಿದ್ದಾರೆ.