ಸಾರಾಂಶ
ಮದ್ದೂರು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ವೇಳೆ ಕಾರ್ಯಕರ್ತರು ದಿಡೀರ್ ರಸ್ತೆ ತಡೆ ನಡೆಸಿದ ಹಿನ್ನೆಲೆಯಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿ ಸಂಪರ್ಕಿಸುವ ಸರ್ವಿಸ್ ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು.
ಮನ್ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ನೇತೃತ್ವದಲ್ಲಿ ಪ್ರವಾಸಿ ಮಂದಿರದ ನಾಲ್ವಡಿ ಒಡೆಯರ್ ವೃತ್ತದಲ್ಲಿ ಪ್ರತಿಭಟನೆಗೆ ಇಳಿದ ನೂರಾರು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ ಮಾತನಾಡಿ, ರಾಜ್ಯ ಸರ್ಕಾರ ದಿಢೀರನೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡೋ ಮೂಲಕ ರಾಜ್ಯದ ಜನರ ಮೇಲೆ ಬೆಲೆ ಏರಿಕೆ ಬರೆ ಹಾಕುವ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದರು.ಸಿಎಂ ಸಿದ್ದರಾಮಯ್ಯ ಗ್ಯಾರೆಂಟಿ ಯೋಜನೆಗಳಿಗೆ ಹಣ ಹೂಂದಿಸಲಾಗದೆ ದಿವಾಳಿ ಅಂಚಿಗೆ ಬಂದು ನಿಂತಿರುವ ಸರ್ಕಾರದ ಸಂಪನ್ಮೂಲ ಕ್ರೋಢೀಕರಿಸುವ ಉದ್ದೇಶದಿಂದ ತೈಲಬೆಲೆ ಏರಿಕೆ ಮಾಡಿದೆ. ಇದರಿಂದ ಮುಂದಿನ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿ ಜನಸಾಮಾನ್ಯರು ಜೀವನ ನಡೆಸುವುದು ದುಸ್ತರವಾಗುತ್ತದೆ ಎಂದರು. ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಸತೀಶ್, ಬಿಜೆಪಿ ರಾಜ್ಯ ಹಾಲು ಪ್ರಕೋಸ್ಟದ ಸಂಚಾಲಕಿ ರೂಪ, ಮುಖಂಡರಾದ ಎಂ.ಸಿ.ಸಿದ್ದು, ಶಿವಮಲ್ಲಪ್ಪ, ರೈತ ಮೋರ್ಚಾ ಅಧ್ಯಕ್ಷ ರವಿ, ನಗರ ಘಟಕದ ಅಧ್ಯಕ್ಷ ಮಧುಕುಮಾರ್, ಮಹೇಶ್, ಬುಲೆಟ್ ಬಸವರಾಜು, ಜಿಪಂ ಮಾಜಿ ಅಧ್ಯಕ್ಷ ಸಾದೊಳಲು ಕೃಷ್ಣೇಗೌಡ, ಪ್ರಕಾಶ್, ಮ.ನ .ಪ್ರಸನ್ನಕುಮಾರ್, ಮಹಿಳಾ ಮೋರ್ಚಾದ ಲಲಿತಮ್ಮ, ಸಿದ್ದರಾಜು, ಪೂರ್ಣಿಮಾ, ಸೌಮ್ಯ, ಜಾನಕಿ, ಕಾಂತಮಣಿ ಹಲವರು ಪಾಲ್ಗೊಂಡಿದ್ದರು.