ಸಾರಾಂಶ
ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿಯೇ ತಂತ್ರಜ್ಞಾನ ಆಧಾರಿತ ಶಿಕ್ಷಣ ನೀಡುವ ನಿಟ್ಟಿನಲ್ಲಿ ಈಗಾಗಲೇ ಖಾಸಗಿ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಕೆಲ ಶಾಲೆಗಳಿಗೆ ಟ್ಯಾಬ್ ನೀಡಲಾಗಿದೆ. ಉಳಿದ ಶಾಲೆಗಳಿಗೆ ಶಾಸಕರ ಅನುದಾನದಲ್ಲಿ ಟ್ಯಾಬ್ ವಿತರಿಸಲು ಸೂಚನೆ ನೀಡಲಾಗಿದೆ.
ಕನ್ನಡಪ್ರಭ ವಾರ್ತೆ ಮಳವಳ್ಳಿ
ಸರ್ಕಾರಿ ಶಾಲೆಗಳಿಗೆ ಆಧುನಿಕತೆಗೆ ತಕ್ಕಂತೆ ಮೂಲ ಸೌಲಭ್ಯ ಕಲ್ಪಿಸುವ ಮೂಲಕ ಮಾದರಿ ಶಾಲೆಗಳನ್ನಾಗಿ ರೂಪಿಸಲಾಗುವುದು ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ಕೊಠಡಿಯನ್ನು ಉದ್ಘಾಟಿಸಿ ಮಾತನಾಡಿ, ತಾಲೂಕಿನ ಎಲ್ಲಾ ಶಾಲೆಗಳಿಗೆ ಟ್ಯಾಬ್, ಕಂಪ್ಯೂಟರ್ ಸೇರಿದಂತೆ ತಂತ್ರಜ್ಞಾನಕ್ಕೆ ಬೇಕಾದ ಎಲ್ಲಾ ಸೌಲಭ್ಯ ಕಲ್ಪಿಸಲು ಆಗತ್ಯ ಕ್ರಮ ವಹಿಸಿ ಹೈಟೆಕ್ ಸ್ಪರ್ಶ ನೀಡಲಾಗುವುದು ಎಂದರು.
ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿಯೇ ತಂತ್ರಜ್ಞಾನ ಆಧಾರಿತ ಶಿಕ್ಷಣ ನೀಡುವ ನಿಟ್ಟಿನಲ್ಲಿ ಈಗಾಗಲೇ ಖಾಸಗಿ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಕೆಲ ಶಾಲೆಗಳಿಗೆ ಟ್ಯಾಬ್ ನೀಡಲಾಗಿದೆ. ಉಳಿದ ಶಾಲೆಗಳಿಗೆ ಶಾಸಕರ ಅನುದಾನದಲ್ಲಿ ಟ್ಯಾಬ್ ವಿತರಿಸಲು ಸೂಚನೆ ನೀಡಲಾಗಿದೆ. ಗ್ರಾಮೀಣ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಲಿ ಎನ್ನುವ ಉದ್ದೇಶದಿಂದ ವಿಶೇಷ ಸೌಲಭ್ಯ ನೀಡಲಾಗುತ್ತಿದೆ ಎಂದರು.ಪಟ್ಟಣದಲ್ಲಿ ವಿಜ್ಞಾನ ಕಾಲೇಜು ಸೇರಿದಂತೆ ಹೊಸ ಶಿಕ್ಷಣ ಸಂಕೀರ್ಣ ನಿರ್ಮಿಸಲು ರೂಪುರೇಷೆ ಸಿದ್ಧವಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸಾಧಿಸಲು ಹಾಗೂ ಸ್ಪರ್ಧಾತ್ಮಕ ಯುಗದಲ್ಲಿ ರಾಷ್ಟ್ರಕ್ಕೆ ಉತ್ತಮ ಪ್ರಜೆಗಳನ್ನು ರೂಪಿಸುವ ಕೆಲಸ ಮಾಡಲು ಪಣತೊಟ್ಟಿದ್ದು, ಶಿಕ್ಷಕರು ಹಾಗೂ ಶಿಕ್ಷಣಾಸಕ್ತರು ಶಾಲೆಗಳ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ತಾಲೂಕಿನ ರಾವಣಿ ಪ್ರೌಢಶಾಲೆ, ಅಂಚೆದೊಡ್ಡಿ ಸರ್ಕಾರಿ ಪ್ರಾಥಮಿಕ ಶಾಲೆ, ಪಟ್ಟಣದ ಹಿರಿಯ ಪ್ರಾಥಮಿಕ ಶಾಲೆ ಕೊಠಡಿ ಹಾಗೂ ಪಟ್ಟಣದ ಪಶುಸಂಗೋಪನಾ ಆಸ್ಪತ್ರೆಯ ಕಟ್ಟಡವನ್ನು ಶಾಸಕರು ಉದ್ಘಾಟಿಸಿದರು.ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಈ.ಉಮಾ, ಕ್ಷೇತ್ರ ಸಮನ್ವಯಾಧಿಕಾರಿ ಎಂ.ಕೆ.ಶ್ರೀನಿವಾಸ್, ವಿವಿಧ ಶಾಲೆಗಳ ಮುಖ್ಯಶಿಕ್ಷಕರು, ಶಿಕ್ಷಕರು, ಮುಖಂಡರು ಹಾಗೂ ಗ್ರಾಮಸ್ಥರು ಇದ್ದರು.