ಕೇಂದ್ರ ಸರ್ಕಾರ ಮೊದಲಿನಿಂದಲೂ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಲೇ ಬಂದಿದೆ. ತನ್ನ ಕುರ್ಚಿ ಉಳಿಸಿಕೊಳ್ಳುವ ಉದ್ದೇಶದಿಂದ ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ಹೆಚ್ಚಿನ ಅನುದಾನ ನೀಡುತ್ತಿದೆ. ಆದರೆ, ಕರ್ನಾಟಕದ ನ್ಯಾಯಯುತ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ.

ಕನ್ನಡಪ್ರಭ ವಾರ್ತೆ ಮೈಸೂರು

ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಬರೋದ್ರಿಂದ ಯಾವುದೇ ಪ್ರಯೋಜನವಿಲ್ಲ. ಇಲ್ಲಿ ಬಂದು ದೇಶ ಕಟ್ಟೋಣ ಅಂತಾ ಭಾಷಣ ಮಾಡ್ತಾರೆ, ಆದರೆ ರಾಜ್ಯಕ್ಕೆ ಅನುದಾನ ನೀಡುವ ವಿಚಾರ ಬಂದಾಗ ಮಾತ್ರ ಕೇಂದ್ರ ಸರ್ಕಾರ ಹಿಂದೇಟು ಹಾಕುತ್ತಾರೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷ ಬಿ.ಸುಬ್ರಹ್ಮಣ್ಯ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ 5 ಸಾವಿರ ಕೋಟಿ ರು. ಅನುದಾನ ನೀಡುವುದಾಗಿ ಘೋಷಿಸಿ ಹಲವು ವರ್ಷಗಳೇ ಕಳೆದಿದ್ದರೂ, ಈವರೆಗೂ ಅನುದಾನ ಬಿಡುಗಡೆ ಮಾಡುವ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಇತ್ತೀಚೆಗೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಹೆಚ್ಚುವರಿಯಾಗಿ 1.09 ಲಕ್ಷ ಕೋಟಿ ರು.ಗೂ ಅಧಿಕ ತೆರಿಗೆ ಪಾಲು ಬಿಡುಗಡೆ ಮಾಡಿತು. ಇದರಲ್ಲಿ ಕರ್ನಾಟಕಕ್ಕೆ ಕೇವಲ 4,504 ಕೋಟಿ ರು. ನೀಡಿದ್ದರೆ, ಉತ್ತರಪ್ರದೇಶಕ್ಕೆ 19,208 ಕೋಟಿ ರು., ಬಿಹಾರಕ್ಕೆ 10,845 ಕೋಟಿ ರು. ಹಾಗೂ ಮಧ್ಯಪ್ರದೇಶಕ್ಕೆ 8,010 ಕೋಟಿ ರು. ಬಿಡುಗಡೆ ಮಾಡಲಾಗಿದೆ. ಇದು ಕರ್ನಾಟಕದ ವಿರುದ್ಧದ ಮಲತಾಯಿ ಧೋರಣೆಯಾಗಿದೆ ಎಂದು ಆರೋಪಿಸಿದ್ದಾರೆ.

ಕೇಂದ್ರ ಸರ್ಕಾರ ಮೊದಲಿನಿಂದಲೂ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಲೇ ಬಂದಿದೆ. ತನ್ನ ಕುರ್ಚಿ ಉಳಿಸಿಕೊಳ್ಳುವ ಉದ್ದೇಶದಿಂದ ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ಹೆಚ್ಚಿನ ಅನುದಾನ ನೀಡುತ್ತಿದೆ. ಆದರೆ, ಕರ್ನಾಟಕದ ನ್ಯಾಯಯುತ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ದೂರಿದ್ದಾರೆ.

ಬೆಲೆ ಏರಿಕೆ ಬಗ್ಗೆ ಬಿಜೆಪಿ ಮೌನ ಯಾಕೆ?:

ಹಾಲಿನ ದರ ಏರಿಕೆ ವಿಚಾರವಾಗಿ ಬಿಜೆಪಿ ಪ್ರತಿಭಟನೆ ನಡೆಸುತ್ತೆ. ಆದರೆ, ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಬಗ್ಗೆ ಬಿಜೆಪಿ ನಾಯಕರು ಏಕೆ ಧ್ವನಿ ಎತ್ತುತ್ತಿಲ್ಲ? ಕಳೆದ 13 ವರ್ಷಗಳಲ್ಲಿ ಬೆಲೆ ಏರಿಕೆ ಎಷ್ಟಾಗಿದೆ ಎಂಬುದನ್ನ ಗಮನಿಸಬೇಕಿದೆ. ದಿನಬಳಕೆಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದ್ದರೂ ಬಿಜೆಪಿ ಮೌನ ವಹಿಸಿದೆ ಎಂದು ಟೀಕಿಸಿದ್ದಾರೆ.

ಎಥೆನಾಲ್ ಮಿಶ್ರಣದಿಂದ ವಾಹನಗಳಿಗೆ ತೊಂದರೆಯಾಗುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿವೆ. ಇದು ಪೆಟ್ರೋಲ್‌ ಬೆಲೆಯನ್ನೂ ಏಕಾಏಕಿ ಏರಿಸುವ ಹುನ್ನಾರ. ರಾಜ್ಯದ ಬಿಜೆಪಿ ಸಂಸದರು ಈ ವಿಚಾರವಾಗಿ ಮಾತನಾಡುತ್ತಿಲ್ಲ. ಕೃಷ್ಣ ಬೈರೇಗೌಡ ಅವರು ರಾಜ್ಯದ ಸಮಸ್ಯೆಗಳನ್ನು ಪ್ರಧಾನಿಯವರ ಗಮನಕ್ಕೆ ತರುವುದಾಗಿ ಹೇಳಿದ್ದರು. ಆದರೆ ಅವರ ಭಾಷಣಕ್ಕೆ ಕತ್ತರಿ ಹಾಕಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಇಂತಹ ಸಂದರ್ಭದಲ್ಲಿ ಮೋದಿ ಯಾವ ಮುಖ ಇಟ್ಟುಕೊಂಡು ರಾಜ್ಯಕ್ಕೆ ಬರುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ರೈತರ ಸಮಸ್ಯೆಗಳಿಗೆ ಕೇಂದ್ರದ ಸ್ಪಂದನೆ ಇಲ್ಲ:

ಕರ್ನಾಟಕದಲ್ಲಿ ಬರದ ಪರಿಸ್ಥಿತಿ ತೀವ್ರವಾಗಿದ್ದರೂ ರೈತರ ನೆರವಿಗೆ ಕೇಂದ್ರ ಸರ್ಕಾರ ಮುಂದಾಗುತ್ತಿಲ್ಲ. ರೈತರ ಕಣ್ಣೀರು ಒರೆಸುವ ಬದಲು ಬಿಜೆಪಿ ನಾಯಕರು ಸೋನಿಯಾ ಗಾಂಧಿ ಅವರ ಪುಸ್ತಕ, ರಾಹುಲ್ ಗಾಂಧಿ ಅವರ ಪ್ರವಾಸ ಹಾಗೂ ಸಾಮಾಜಿಕ ಜಾಲತಾಣದ ವಿಚಾರಗಳಲ್ಲೇ ಹೆಚ್ಚು ಆಸಕ್ತಿ ತೋರಿಸುತ್ತಿದ್ದಾರೆ. ರೈತರ ಸಂಕಷ್ಟಗಳ ಬಗ್ಗೆ ಚರ್ಚಿಸುವ ಮನಸ್ಸು ಬಿಜೆಪಿಗೆ ಇಲ್ಲ ಎಂದು ಆರೋಪಿಸಿದ್ದಾರೆ.

ರಾಜ್ಯದ ಅಭಿವೃದ್ಧಿ, ರೈತರ ಸಮಸ್ಯೆಗಳು ಹಾಗೂ ಕರ್ನಾಟಕದ ತೆರಿಗೆ ಪಾಲಿನ ಹಂಚಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ನ್ಯಾಯಯುತವಾಗಿ ನಡೆದುಕೊಳ್ಳಬೇಕು. ಕೇವಲ ಭಾಷಣಗಳಿಂದ ರಾಜ್ಯದ ಜನರ ಸಮಸ್ಯೆಗಳು ಬಗೆಹರಿಯುವುದಿಲ್ಲ. ನಿಮಗೆ ನೈತಿಕತೆ ಇದ್ದರೆ, ರಾಜ್ಯಕ್ಕೆ ಅಭಿವೃದ್ಧಿ ಯೋಜನೆಗಳನ್ನ ಘೋಷಿಸಿ ಎಂದು ಅವರು ಆಗ್ರಹಿಸಿದ್ದಾರೆ.