ಸಾರಾಂಶ
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆ ಹೆಚ್ಚಿಸುವ ಮೂಲಕ ಜನಾಕ್ರೋಶ ಯಾತ್ರೆ ಎಂಬ ಪ್ರಹಸನ ಶುರು ಮಾಡಿರುವ ರಾಜ್ಯ ಬಿಜೆಪಿ ನಾಯಕರಿಗೆ ಮುಟ್ಟಿ ನೋಡಿಕೊಳ್ಳುವಂತೆ ಕಪಾಳಮೋಕ್ಷ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಕೇಂದ್ರವು ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ತೆರಿಗೆಯನ್ನು ಪ್ರತಿ ಲೀಟರ್‌ಗೆ 2 ರು. ಹಾಗೂ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 50 ರು. ಹೆಚ್ಚಳ ಮಾಡಿದೆ. ಜನಾಕ್ರೋಶ ಯಾತ್ರೆ ಹೊರಟಿರುವ ಬಿಜೆಪಿ ನಾಯಕರು ಇದಕ್ಕೆ ಏನು ಪ್ರತಿಕ್ರಿಯೆ ನೀಡುತ್ತಾರೆ? ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಇಳಿಯುತ್ತಿದ್ದರೂ ಕೇಂದ್ರ ಸರ್ಕಾರ ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯನ್ನು ಒಂದೇ ಸಮನೆ ಏರಿಸುತ್ತಿರುವುದು ಯಾಕೆ? ಎಂದು ಪ್ರಶ್ನಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಕ್ಕಿ, ಬೇಳೆ, ಮೀನು, ಮಾಂಸ, ತರಕಾರಿಯಿಂದ ಹಿಡಿದು ಹೋಟೆಲ್ ತಿಂಡಿವರೆಗೆ ಎಲ್ಲದರ ಬೆಲೆ ಏರಿಕೆಗೆ ಮೂಲ ಕಾರಣ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಯನ್ನು ಹೆಚ್ಚಿಸುತ್ತಲೇ ಇರುವ ಕೇಂದ್ರ ಸರ್ಕಾರದ ಜನವಿರೋಧಿ ನೀತಿ. ಇದು ಆರ್ಥಿಕ ವ್ಯವಹಾರದ ಸಾಮಾನ್ಯ ಜ್ಞಾನ ಇದ್ದವರಿಗೆಲ್ಲ ಗೊತ್ತು. ಹೀಗಿದ್ದರೂ ಬೆಲೆ ಏರಿಕೆಯ ಪಾಪದ ಹೊರೆಯನ್ನು ನಮ್ಮ ತಲೆ ಮೇಲೆ ಕಟ್ಟಲು ಹೊರಟಿರುವ ಬಿಜೆಪಿ ನಾಯಕರ ಮುಖಕ್ಕೆ ಪ್ರಧಾನಿ ನರೇಂದ್ರ ಮೋದಿಯವರೇ ಮಸಿ ಬಳಿದಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಬಿಜೆಪಿ ನಾಯಕರಿಗೆ ಎರಡೇ ಆಯ್ಕೆ:
ಜನಾಕ್ರೋಶ ಯಾತ್ರೆ ಹೊರಟವರ ಮುಂದೆ ಈಗ ಇರುವುದು ಎರಡೇ ಎರಡು ಆಯ್ಕೆ. ಒಂದೋ ಅವರು ಪ್ರಧಾನಿ ಮೇಲೆ ಒತ್ತಡ ಹೇರಿ, ಪ್ರತಿಭಟನೆ ಮಾಡಿ ಆದರೂ ಕೇಂದ್ರ ಸರ್ಕಾರ ಹೆಚ್ಚಿಸಿರುವ ಬೆಲೆಯನ್ನು ಇಳಿಸುವಂತೆ ಮಾಡಬೇಕು. ಇಲ್ಲವೇ ಯಾತ್ರೆಯನ್ನು ಕೊನೆಗೊಳಿಸಿ ಗಂಟುಮೂಟೆ ಕಟ್ಟಿಕೊಂಡು ತಮ್ಮ ತಮ್ಮ ಮನೆಗೆ ಮರಳಬೇಕು. ಇದರ ಹೊರತಾಗಿ ಈ ಯಾತ್ರೆಯ ಪ್ರಹಸನವನ್ನು ಮುಂದುವರಿಸಿದರೆ ಜನರ ಆಕ್ರೋಶಕ್ಕೆ ತುತ್ತಾಗುವುದು ಖಂಡಿತ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಪೇಮೆಂಟ್ ಸೀಟ್ ಉಳಿಸಿಕೊಳ್ಳುವ ಹೋರಾಟ:
ಇಷ್ಟೊಂದು ಅಸಮರ್ಥ, ನಿರ್ಲಜ್ಜ ಮತ್ತು ಜನವಿರೋಧಿ ವಿರೋಧ ಪಕ್ಷವನ್ನು ರಾಜ್ಯ ಎಂದೂ ಕಂಡಿಲ್ಲ. ಸ್ವಪಕ್ಷೀಯರೇ ಆರೋಪಿಸುವಂತೆ ‘ಪೇಮೆಂಟ್ ಸೀಟ್’ ನಲ್ಲಿ ಕೂತಿರುವ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರಿಗೆ ರಾಜ್ಯ ಸರ್ಕಾರವನ್ನು ಪ್ರಶ್ನಿಸುವ ಯಾವ ನೈತಿಕತೆ ಇದೆ? ನಮ್ಮನ್ನು ಪ್ರಶ್ನಿಸುವ ಮೊದಲು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಅವರ ಶಾಸಕ ಮಿತ್ರರು ಕಳೆದ ಎರಡು ವರ್ಷಗಳಿಂದ ಮಾಡುತ್ತಿರುವ ಗಂಭೀರ ಸ್ವರೂಪದ ಆರೋಪಗಳಿಗೆ ಉತ್ತರಿಸುವ ದಮ್ಮು ತಾಕತ್ ತೋರಿಸಲಿ ಎಂದು ಸಿದ್ದರಾಮಯ್ಯ ಸವಾಲು ಹಾಕಿದರು.
ವಿಜಯೇಂದ್ರ ವಿರುದ್ಧ ಸ್ವಪಕ್ಷೀಯರು ಮಾಡುತ್ತಿರುವ ಭ್ರಷ್ಟಾಚಾರದ ಆರೋಪ ಹೈಕಮಾಂಡಿಗೂ ಮನವರಿಕೆಯಾದಂತಿದೆ. ಪಕ್ಷದೊಳಗಿದ್ದು ಮಾಡುವ ಆರೋಪಗಳಿಂದ ಆಗುವ ಮುಜುಗರದಿಂದ ತಪ್ಪಿಸಿಕೊಳ್ಳಲು ಬಿಜೆಪಿ ಹೈಕಮಾಂಡ್ ಯತ್ನಾಳ್ ಅವರನ್ನು ಪಕ್ಷದಿಂದ ಹೊರಗೆ ಹಾಕಿ, ಅವರಿಂದ ಈಗ ಇನ್ನಷ್ಟು ಆರೋಪಗಳನ್ನು ಮಾಡಿಸುತ್ತಿದೆ. ಅಂತಿಮವಾಗಿ ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗೆ ಇಳಿಸುವುದೇ ಬಿಜೆಪಿ ಹೈಕಮಾಂಡ್ ಉದ್ದೇಶ. ಇದರಿಂದ ಪಾರಾಗಿ ಕುರ್ಚಿ ಉಳಿಸಿಕೊಳ್ಳಲು ವಿಜಯೇಂದ್ರ ಹೊಸ ವರಸೆ ತೆಗೆದಿದ್ದಾರೆ ಎಂದು ದೂರಿದರು.
ಗ್ಯಾರಂಟಿಗಳಿಂದ ಸಂತುಷ್ಟರಾಗಿದ್ದಾರೆ:
ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಬಜೆಟ್‌ನ 51,000 ಕೋಟಿ ರು. ಹಣ ನೇರವಾಗಿ ಫಲಾನುಭವಿಗಳನ್ನು ತಲುಪುತ್ತಿದ್ದು, ಅವರೆಲ್ಲರೂ ಸಂತುಷ್ಟರಾಗಿದ್ದಾರೆ. ಈಗ ಅವರು ಬೀದಿಗೆ ಬಂದು ನಮ್ಮ ಪರ ಘೋಷಣೆ ಹಾಕದೆ ಇರಬಹುದು, ಆದರೆ ಅವರೆಲ್ಲರ ಆಶೀರ್ವಾದ ನಮ್ಮ ಸರ್ಕಾರದ ಪರವಾಗಿದೆ.
- ಸಿದ್ದರಾಮಯ್ಯ, ಮುಖ್ಯಮಂತ್ರಿ