3ನೇ ಬಾರಿ ಪ್ರಧಾನಿಯಾಗಿ ಮೋದಿ ಪ್ರಮಾಣವಚನ

| Published : Jun 11 2024, 01:38 AM IST

ಸಾರಾಂಶ

ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಬಿಜೆಪಿ ಮಂಡಲ ಅಧ್ಯಕ್ಷ ಕೃಷ್ಣ ನೇತೃತ್ವದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.

ಕನ್ನಡ ಪ್ರಭ ವಾರ್ತೆ ಮಳವಳ್ಳಿ

ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಬಿಜೆಪಿ ಮಂಡಲ ಅಧ್ಯಕ್ಷ ಕೃಷ್ಣ ನೇತೃತ್ವದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.

ಪಟ್ಟಣದ ಅನಂತ್‌ರಾಂ ವೃತ್ತದಲ್ಲಿ ಸೇರಿದ ಬಿಜೆಪಿ, ಜೆಡಿಎಸ್ ಮುಖಂಡರು, ಕಾರ್ಯಕರ್ತರು ಬಿಜೆಪಿ ಬಾವುಟಗಳನ್ನು ಹಿಡಿದು ಪ್ರಧಾನಿ ನರೇಂದ್ರ ಮೋದಿ ಪರ ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು.ಬಿಜೆಪಿ ಮಂಡಲ ಅಧ್ಯಕ್ಷ ಕೃಷ್ಣ ಮಾತನಾಡಿ, ನರೇಂದ್ರ ಮೋದಿ ಅವರು ವಿಶ್ವಕಂಡ ಶ್ರೇಷ್ಠ ಪ್ರಧಾನಿ. ಮೂರನೇ ಭಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವುದು ಹೆಮ್ಮೆಯ ವಿಷಯ. ಮತ್ತೊಮ್ಮೆ ಭಾರತ ವಿಶ್ವದಲ್ಲಿ ಉತ್ತಮ ಸಾಧನೆ ಮಾಡಲಿದೆ ಎಂದು ಹೇಳಿದರು.ಸಬ್ಕಾ ಸಾಥ್ ಸಬ್ಕಾ ವಿಕಾಸ್ ಸಬ್ಕಾ ವಿಶ್ವಾಸ್ ಎಂಬ ಘೋಷಣೆಯೊಂದಿಗೆ ಸಮಗ್ರ, ಅಭಿವೃದ್ಧಿ-ಆಧಾರಿತ ಮತ್ತು ಭ್ರಷ್ಟಾಚಾರ-ಮುಕ್ತ ಆಡಳಿತಕ್ಕೆ ಪ್ರಧಾನಿ ನರೇಂದ್ರ ಮೋದಿ ಹೆಚ್ಚು ಒತ್ತು ನೀಡಿದ್ದಾರೆ. ಸರ್ಕಾರದ ಕಾರ್ಯಕ್ರಮಗಳು ಹಾಗೂ ಸೇವೆಗಳು ಪ್ರತಿ ಮನೆಗೂ ತಲುಪುವಂತೆ ಕೇಂದ್ರ ಸರ್ಕಾರ ಆಗತ್ಯ ಕ್ರಮ ಕೈಗೊಂಡಿದೆ. ಭಾರತವು ಬಡತನವನ್ನು ದಾಖಲೆಯ ವೇಗದಲ್ಲಿ ನಿರ್ಮೂಲನೆ ಮಾಡಲು ಮೋದಿ ಶ್ರಮಿಸುತ್ತಿದ್ದಾರೆ ಎಂದರು.ಪ್ರತಿಯೊಬ್ಬ ಭಾರತೀಯನಿಗೂ ಬ್ಯಾಂಕ್ ಖಾತೆಗಳನ್ನು ತೆರೆಯಲು ಪ್ರಧಾನ ಮಂತ್ರಿ ಜನಧನ್ ಯೋಜನೆ, ಆಯುಷ್ಮಾನ್ ಭಾರತ್, ಪ್ರಧಾನ ಮಂತ್ರಿ ಉಜ್ವಲ ಯೋಜನೆ ಸೇರಿದಂತೆ ದೇಶದ ಜನರಿಗಾಗಿ ಹಲವಾರು ಕೊಡುಗೆಗಳನ್ನು ನೀಡಿದ್ದಾರೆ. ಮುಂದಿನ ದಿನಗಳಲ್ಲಿಯೂ ದೇಶದ ಅಭಿವೃದ್ದಿಗಾಗಿ ಇನ್ನೂ ಹೆಚ್ಚಿನ ರೀತಿಯಲ್ಲಿ ಶ್ರಮಿಸುತ್ತಾರೆಂಬ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಕರ್ನಾಟಕ ರಾಜ್ಯಕ್ಕೂ ಕೇಂದ್ರ ಮಂತ್ರಿ ಸ್ಥಾನವನ್ನು ನಿರೀಕ್ಷೆಗೂ ಮೀರಿ ಕೊಟ್ಟಿದ್ದಾರೆ. ರಾಜ್ಯವನ್ನು ಅಭಿವೃದ್ದಿಗೊಳಿಸಿ ಸಂಸದರು ಪ್ರಾಮಾಣಿಕ ಪ್ರಯತ್ನ ಮಾಡಲಿದ್ದಾರೆ. ಪ್ರಧಾನಿ ನರೇಂದ್ರಮೋದಿ ಅವರು ಇನ್ನಷ್ಟು ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತರಲಿ ಎಂದು ಆಶಿಸಿದರು. ಈ ವೇಳೆ ಬಿಜೆಪಿ ಮುಖಂಡರಾದ ನಾಗೇಗೌಡ, ರವಿವೇಣು, ಮಂಜು ಶಕುಂತಲ ಮಲ್ಲಿಕ್, ಜಯರಾಜು, ದೇವರಾಜು ಸೇರಿದಂತೆ ಇತರರು ಇದ್ದರು.