ಸಾರಾಂಶ
ಹಿರಿಯೂರು: ಲೋಕಸಭಾ ಚುನಾವಣೆಯಲ್ಲಿ ದೇಶದ ಮತದಾರನ ಅಭಿಲಾಷೆಯಂತೆ ಬಿಜೆಪಿ ಅಭೂತಪೂರ್ವ ಗೆಲುವಿನೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಬಹುತೇಕ ಖಚಿತ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ವಿಶ್ವಾಸ ವ್ಯಕ್ತಪಡಿಸಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ಸಂಘಟನಾತ್ಮಕ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ಬಿಜೆಪಿ ಕಾರ್ಯಕರ್ತರು ಎಂದಿಗೂ ಅಧಿಕಾರಕ್ಕೆ ಆಸೆಪಟ್ಟವರಲ್ಲ. ಪಕ್ಷ ಅಧಿಕಾರಕ್ಕೆ ಬರಬೇಕು, ದೇಶದ ಭದ್ರತೆ ಹಾಗೂ ಅಭಿವೃದ್ಧಿಗೆ ಸಹಕಾರಿಯಾಗಬೇಕು ಎಂಬ ಭಾವನೆಯಿಂದ ಕಾರ್ಯಕರ್ತರು ಪಕ್ಷದಲ್ಲಿ ತೊಡಗಿಸಿಕೊಂಡಿದ್ದಾರೆ.
ಪಕ್ಷ ಸಂಘಟನೆಯಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸುವ ಅಭಿಲಾಷೆ ಪ್ರತಿಯೊಬ್ಬ ಕಾರ್ಯಕರ್ತನಿಗೂ ಇರುತ್ತದೆ. ಆದರೆ ಪಕ್ಷ ಯೋಚಿಸಿ ಸಮರ್ಥರಿಗೆ ಜವಾಬ್ದಾರಿ ನೀಡುತ್ತದೆ. ಪಕ್ಷದಲ್ಲಿ ಸ್ಥಾನಮಾನ ಸಿಗಲಿಲ್ಲವೆಂದು ಯಾರು ಹತಾಶರಾಗದೆ ಪಕ್ಷ ಸಂಘಟನೆಗೆ ಮುಂದಾಗಬೇಕು ಎಂದರು.ಜಿಲ್ಲಾಧ್ಯಕ್ಷ ಎ.ಮುರಳಿ ಮಾತನಾಡಿ, ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳವಾಗಿದ್ದು, ನಿಷ್ಠಾವಂತ ಕಾರ್ಯಕರ್ತರಿಗೆ ಪಕ್ಷದಲ್ಲಿ ಸಮರ್ಥ ನಾಯಕನಾಗಿ ಹೊರಹೊಮ್ಮುವ ಎಲ್ಲಾ ಅವಕಾಶ ಬಿಜೆಪಿ ಪಕ್ಷದಲ್ಲಿದೆ. ಪಕ್ಷದಲ್ಲಿ ಕಾರ್ಯಕರ್ತರ ಶ್ರಮಕ್ಕೆ ಬೆಲೆ ಜಾಸ್ತಿ. ನಿಷ್ಠೆ, ಪ್ರಾಮಾಣಿಕತೆಯನ್ನು ಬಿಜೆಪಿ ಕಾರ್ಯಕರ್ತರಲ್ಲಿ ಮಾತ್ರ ನೋಡಲು ಸಾಧ್ಯ. ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಸ್ವಾರ್ಥವಾಗಿ ಸಂಘಟನೆಯಲ್ಲಿ ಕಾರ್ಯಕರ್ತರು ತೊಡಗಬೇಕು.
ಕಾರ್ಯಕರ್ತರು ಸಂಘಟನೆಗೊಳ್ಳುವ ಮೂಲಕ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳಿಂದ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದರು.ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ವಿ.ವಿಶ್ವನಾಥ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಸಿದ್ದಾಪುರ, ಸಂಪತ್, ಎನ್.ಆರ್.ಲಕ್ಷ್ಮೀಕಾಂತ್, ಕೇಶವಮೂರ್ತಿ, ನಾಗೇಶ್, ಶಂಭುಲಿಂಗೇಶ್, ಹರ್ಷ, ದ್ಯಾಮೇಗೌಡ, ಚಂದ್ರಹಾಸ್, ಅಸ್ಗರ್ ಅಹಮ್ಮದ್, ನಾಗರಾಜ್, ತಿಪ್ಪೇಸ್ವಾಮಿ, ಹರೀಶ್ ಕುಮಾರ್, ಮದ್ದನಕುಂಟೆ ಜನಾರ್ಧನ್ ಇದ್ದರು.