ಹಣ ಪತ್ತೆ: ಸಂಸದ ಸುಧಾಕರ್‌ ಮೇಲಿನ ಕೇಸ್‌ ರದ್ದು

| Published : Sep 17 2025, 01:05 AM IST

ಸಾರಾಂಶ

ಕಳೆದ ಲೋಕಸಭಾ ಚುನಾವಣೆ ವೇಳೆ ಮಾದಾವರದ ಬಳಿ 4.8 ಕೋಟಿ ಹಣ ಪತ್ತೆಯಾದ ಪ್ರಕರಣ ಸಂಬಂಧ ಚಿಕ್ಕಬಳ್ಳಾಪುರ ಸಂಸದ ಕೆ.ಸುಧಾಕರ್‌ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ ರದ್ದುಪಡಿಸಿ ಹೈಕೋರ್ಟ್‌ ಆದೇಶಿಸಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಕಳೆದ ಲೋಕಸಭಾ ಚುನಾವಣೆ ವೇಳೆ ಮಾದಾವರದ ಬಳಿ 4.8 ಕೋಟಿ ಹಣ ಪತ್ತೆಯಾದ ಪ್ರಕರಣ ಸಂಬಂಧ ಚಿಕ್ಕಬಳ್ಳಾಪುರ ಸಂಸದ ಕೆ.ಸುಧಾಕರ್‌ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ ರದ್ದುಪಡಿಸಿ ಹೈಕೋರ್ಟ್‌ ಆದೇಶಿಸಿದೆ.

ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ಮತ್ತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿ ಡಾ.ಕೆ.ಸುಧಾಕರ್‌ ಸಲ್ಲಿಸಿದ್ದ ತಕರಾರು ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಎಂ.ಐ. ಅರುಣ್‌ ಅವರ ಪೀಠ ಈ ಆದೇಶ ಮಾಡಿದೆ. ವಿಸ್ತೃತ ಆದೇಶ ಇನ್ನಷ್ಟೇ ಬಿಡುಗಡೆಯಾಗಬೇಕಿದೆ.

ಪ್ರಕರಣದ ಹಿನ್ನೆಲೆ:

ಮಾದನಾಯಕನಹಳ್ಳಿ ಪೊಲೀಸ್‌ ಠಾಣೆಗೆ ಚುನಾವಣಾ ಸರ್ವೇಲೆನ್ಸ್‌ ತಂಡದ ಸದಸ್ಯ ದಶರಥ್‌ ವಿ.ಕುಂಬಾರ್‌ ದೂರು ನೀಡಿ, 2024ರ ಲೋಕಸಭಾ ಚುನಾವಣೆ ವೇಳೆ ಏ.25ರಂದು ಮಾದರಿ ನೀತಿ ಸಂಹಿತೆ (ಎಂಸಿಸಿ) ಅಧಿಕಾರಿ ಮೌನಿಶ್‌ ಮುದ್ಗಿಲ್‌ ಅವರ ಮೊಬೈಲ್‌ಗೆ ಒಂದು ಕಡೆ 10 ಕೋಟಿ ರು. ಚುನಾವಣೆಯಲ್ಲಿ ಮತದಾರರಿಗೆ ಹಂಚಲು ಇಡಲಾಗಿದೆ ಎಂಬ ಮಾಹಿತಿ ಬಂದಿತ್ತು. ಅದರಂತೆ ಮಾದಾವರ ಗ್ರಾಮದ ಗೋವಿಂದಪ್ಪ ಎಂಬುವರ ಮನೆಯಲ್ಲಿ ಚುನಾವಣಾಧಿಕಾರಿಗಳು ಹಾಗೂ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಜಂಟಿ ದಾಳಿ ನಡೆಸಿದ್ದಾಗ 4.8 ಕೋಟಿ ಹಣ ಜಪ್ತಿ ಮಾಡಲಾಯಿತು ಎಂದು ತಿಳಿಸಿದ್ದರು,.

ಅಲ್ಲದೆ, ಮುನೀಶ್‌ ಮೌದ್ಗಿಲ್‌ ಅವರಿಗೆ ಬಿಜೆಪಿ ಅಭ್ಯರ್ಥಿಯಾಗಿದ್ದ ಕೆ.ಸುಧಾಕರ್‌ ಅವರು ಅಪರಿಚಿತ ಸಂಖ್ಯೆಯಿಂದ ಕರೆ ವಾಟ್ಸಾಪ್‌ ಕರೆ, ಮೆಸೇಜ್‌ ಮಾಡಿ ಸಹಾಯ ಮಾಡುವಂತೆ ಮನವಿ ಮಾಡಿದ್ದಾರೆ. ಈ ಹಣವನ್ನು ಮತದಾರರಿಗೆ ಲಂಚ ನೀಡಲು ಮುಂದಾಗಿದ್ದರು ಎಂದು ಆರೋಪಿಸಿದ್ದರು. ಈ ದೂರು ಆಧರಿಸಿ ಪೊಲೀಸರು ಕೆ.ಸುಧಾಕರ್‌, ಗೋವಿಂದಪ್ಪ ಮತ್ತಿತರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್‌ 171ಇ, (ಚುನಾವಣೆಯಲ್ಲಿ ಲಂಚ) 171ಎಫ್‌ (ಚುನಾವಣೆಯಲ್ಲಿ ಅನುಚಿತ ಪ್ರಭಾವ ಬೀರಿದ), 171 ಬಿ (ಚುನಾವಣೆಯಲ್ಲಿ ಲಂಚ, ಉಡುಗೊರೆ ನೀಡಿ ಮತದಾರರ ಮೇಲೆ ಪ್ರಭಾವ ಬೀರಿದ), 171ಸಿ (ಮತ ಚಲಾವಣೆ ಹಕ್ಕಿನಲ್ಲಿ ಮಧ್ಯಪ್ರವೇಶ ಮಾಡಿದ) ಮತ್ತು ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನ್‌ 123ರಡಿ (ಚುನಾವಣೆಯಲ್ಲಿ ಭ್ರಷ್ಟಾಚಾರ ನಡೆಸಿದ) ಆರೋಪದ ಮೇಲೆ ಎಫ್‌ಐಆರ್‌ ದಾಖಲು ಮಾಡಿದ್ದರು. ನಂತರ ತನಿಖೆ ನಡೆಸಿ ದೋಷಾರೋಪಪಟ್ಟಿ ಸಲ್ಲಿಸಿದ್ದರು.

ಪ್ರಕರಣವನ್ನು ವಿಚಾರಣೆಗೆ ಪರಿಗಣಿಸಿ ವಿಶೇಷ ನ್ಯಾಯಾಲಯ ಆದೇಶಿಸಿತ್ತು. ಇದರಿಂದ ತಮ್ಮ ವಿರುದ್ಧ ಎಫ್‌ಐಆರ್‌ ಮತ್ತು ವಿಶೇಷ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಸಂಸದ ಕೆ.ಸುಧಾಕರ್‌ ಹೈಕೋರ್ಟ್‌ ಮೊರೆ ಹೋಗಿದ್ದರು.