ಚುನಾವಣಾ ಖರ್ಚು ವೆಚ್ಚದ ಮೇಲೆ ನಿಗಾ

| Published : Apr 14 2024, 01:45 AM IST

ಸಾರಾಂಶ

ಬೆಳಗಾವಿ: ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳ ಚುನಾವಣಾ ಖರ್ಚು, ವೆಚ್ಚದ ಮೇಲೆ ನಿಗಾ ವಹಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿಚುನಾವಣಾ ಆಯೋಗದ ಮಾರ್ಗಸೂಚಿಯಂತೆ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳ ಚುನಾವಣಾ ಖರ್ಚು, ವೆಚ್ಚದ ಮೇಲೆ ನಿಗಾ ವಹಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವೆಚ್ಚ ವೀಕ್ಷಕರು, ಸಹಾಯಕ ಚುನಾವಣಾಧಿಕಾರಿಗಳು ಹಾಗೂ ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗಾಗಲೇ ಎಲ್ಲ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯನ್ನು ನಡೆಸಿ ವೆಚ್ಚ ನಿರ್ವಹಣೆ, ಎಸ್.ಆರ್.ದರಗಳ ನಿಗದಿ ಸೇರಿದಂತೆ ಪ್ರಮುಖ ವಿಷಯಗಳ ಕುರಿತು ಮಾಹಿತಿ ನೀಡಲಾಗಿದೆ ಎಂದರು.

ಬ್ಯಾಂಕ್‌ರುಗಳ ಸಭೆಯನ್ನು ನಡೆಸಿ ಸಂಶಯಾಸ್ಪದ ವ್ಯವಹಾರಗಳ ಬಗ್ಗೆ ಮಾಹಿತಿ ನೀಡುವಂತೆ ತಿಳಿಸಲಾಗಿದ್ದು ಡಿಜಿಟಲ್ ಸೇರಿದಂತೆ ಪ್ರತಿಯೊಂದು ಬ್ಯಾಂಕ್‌ ವ್ಯವಹಾರಗಳ ಮೇಲೆ ನಿಗಾ ವಹಿಸಲಾಗಿದೆ. ಪ್ರಿಂಟಿಂಗ್ ಪ್ರೆಸ್ ಮಾಲೀಕರ ಸಭೆ ಕೂಡ ನಡೆಸುವ ಮೂಲಕ ಅಗತ್ಯ ತಿಳಿವಳಿಕೆ ನೀಡಲಾಗಿದೆ ಎಂದು ತಿಳಿಸಿದರು.

ಬೆಳಗಾವಿ ಲೋಕಸಭಾ ಕ್ಷೇತ್ರದ ವೆಚ್ಚ ವೀಕ್ಷಕ ಹರಕ್ರಿಪಾಲ್ ಖಟಾನಾ ಮಾತನಾಡಿ, ಕೆಲವು ಚೆಕ್‌ಪೋಸ್ಟ್‌ಗಳಿಗೆ ಭೇಟಿ ನೀಡಿ‌ ಪರಿಶೀಲಿಸಲಾಗಿದ್ದು, ವಾಹನ ದಟ್ಟಣೆ‌ ಹೆಚ್ಚಾಗಿರುವ ಕಡೆಗಳಲ್ಲಿ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಬೇಕು. ಪೇಡ್ ನ್ಯೂಸ್ ಸೇರಿದಂತೆ ಪ್ರತಿಯೊಂದು ವೆಚ್ಚದ ಮೇಲೆ ನಿಗಾ ವಹಿಸಬೇಕು ಎಂದು ಸೂಚಿಸಿ ಸಹಾಯಕ ವೆಚ್ಚ ನೋಡಲ್ ಅಧಿಕಾರಿಗಳು ಹಾಗೂ ಪ್ರತಿಯೊಂದು ತಂಡದ ಕುರಿತು ಸಭೆಯಲ್ಲಿ ಮಾಹಿತಿ ಪಡೆದುಕೊಂಡರು.

ಇನ್ನೋರ್ವ ವೆಚ್ಚ ವೀಕ್ಷಕ ನರಸಿಂಗ್ ರಾವ್.ಬಿ, ಡಿಸಿಪಿ ರೋಹನ್ ಜಗದೀಶ್, ಪ್ರೊಬೇಷನರಿ ಐಎಎಸ್‌ ಅಧಿಕಾರಿ ಶುಭಂ ಶುಕ್ಲಾ ಉಪಸ್ಥಿತರಿದ್ದರು.

ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ, ತರಬೇತಿ ನೋಡಲ್ ಅಧಿಕಾರಿ ಶಂಕರಾನಂದ ಬನಶಂಕರಿ, ಸಹಾಯಕ ಚುನಾವಣಾಧಿಕಾರಿಗಳಾದ ಪಿ.ಎನ್.ಲೋಕೇಶ್, ಸತೀಶ್ ಕುಮಾರ್, ಪ್ರಭಾವತಿ ಫಕ್ಕೀರಪುರ, ಡಾ.ರಾಜೀವ್ ಕೂಲೇರ್, ರಾಜಶ್ರೀ ಜೈನಾಪುರ, ವೆಚ್ಚ ವೀಕ್ಷಕ ನೋಡಲ್ ಅಧಿಕಾರಿ ಗೌರಿಶಂಕರ ಕಡೇಚೂರ, ಎಂಸಿಎಂಸಿ ನೋಡಲ್ ಅಧಿಕಾರಿ ಗುರುನಾಥ ಕಡಬೂರ ಸೇರಿದಂತೆ ವಿವಿಧ ತಂಡಗಳ ಮುಖ್ಯಸ್ಥರು ಪಾಲ್ಗೊಂಡಿದ್ದರು.

ಕೋಟ್‌....ಪ್ರತಿಯೊಂದು ವಿಧಾನಸಭಾ ಕ್ಷೇತ್ರಗಳಿಗೆ ಕನಿಷ್ಠ 3 ಎಫ್‌ಎಸ್‌ಟಿ ತಂಡಗಳಂತೆ 28 ತಂಡಗಳನ್ನು ಹಾಗೂ 28 ಎಸ್‌ಎಸ್‌ಟಿ ಹಾಗೂ 25 ವಿಎಸ್‌ಟಿ ತಂಡಗಳು ಕಾರ್ಯನಿರ್ವಹಿಸುತ್ತಿವೆ. ಅಕ್ರಮ ಹಣ, ಮದ್ಯ ಮತ್ತಿತರ ವಸ್ತುಗಳ ಸಾಗಾಣಿಕೆ ಮೇಲೆ ನಿಗಾವಹಿಸಲಾಗಿದೆ. ಆದಾಯ ತೆರಿಗೆ, ವಾಣಿಜ್ಯ ತೆರಿಗೆ, ಅಬಕಾರಿ ಹಾಗೂ ಪೊಲೀಸ್ ಸೇರಿದಂತೆ ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಮತ್ತು ತಂಡಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸುತ್ತಿವೆ.ನಿತೇಶ್ ಪಾಟೀಲ, ಜಿಲ್ಲಾ ಚುನಾವಣಾಧಿಕಾರಿ.