ಮಳೆ ಕೊರತೆ ಹಿನ್ನೆಲೆ ಜನರು ಹಾಗೂ ಜಾನುವಾರುಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು
ಕಂಪ್ಲಿ: ಮಳೆ ಕೊರತೆಯಿಂದ ತಾಲೂಕಿನಲ್ಲಿ ಎದುರಾಗಬಹುದಾದ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಮುಂಜಾಗ್ರತಾ ಕ್ರಮ ಕೈಗೊಳ್ಳಲು ಬುಧವಾರ ಇಲ್ಲಿನ ತಹಸೀಲ್ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಯಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ಜೂಗಲ ಮಂಜುನಾಯಕ ಮಾತನಾಡಿ, ಮಳೆ ಕೊರತೆ ಹಿನ್ನೆಲೆ ಜನರು ಹಾಗೂ ಜಾನುವಾರುಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ವಿಶೇಷವಾಗಿ ಕುಡಿಯುವ ನೀರು ಮತ್ತು ಮೇವಿನ ಲಭ್ಯತೆ ಕುರಿತು ಅಧಿಕಾರಿಗಳು ನಿರಂತರವಾಗಿ ನಿಗಾ ವಹಿಸಬೇಕು ಎಂದು ಸೂಚಿಸಿದರು.ತಾಲೂಕಿನ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಗ್ರಾಮವಾರು ಪರಿಶೀಲನೆ ನಡೆಸಬೇಕು. ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾದರೆ ತಕ್ಷಣವೇ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ವಹಿಸಬೇಕು ಎಂದು ಹೇಳಿದರು.
ಮೆಟ್ರಿ, ಸಣಾಪುರ ಹಾಗೂ ಇಟಗಿ ಗ್ರಾಮಗಳಲ್ಲಿ ಬೆರಳೆಣಿಕೆಯಷ್ಟು ಮನೆಗಳಿಗೆ ಮಾತ್ರ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ ಎಂಬ ವಿಷಯ ಸಭೆಯಲ್ಲಿ ಚರ್ಚೆಗೆ ಬಂದಿತು. ಈ ಸಮಸ್ಯೆಗೆ ಕಾರಣವೇನು ಎಂಬುದನ್ನು ಪರಿಶೀಲಿಸಿ ಅಗತ್ಯವಿರುವ ಕಡೆ ಪೈಪ್‌ಲೈನ್ ದುರಸ್ತಿ, ನೀರು ಪೂರೈಕೆ ವ್ಯವಸ್ಥೆ ಸೇರಿದಂತೆ ಸೂಕ್ತ ಕ್ರಮ ಕೈಗೊಂಡು ಸಮಸ್ಯೆ ಶೀಘ್ರ ಪರಿಹರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಹಸೀಲ್ದಾರ್ ಸೂಚಿಸಿದರು.32 ವಾರಗಳಿಗೆ ಸಾಕಾಗುವಷ್ಟು ಮೇವು: ತಾಲೂಕಿನಲ್ಲಿ ಸದ್ಯ 32 ವಾರಗಳಿಗೆ ಸಾಕಾಗುವಷ್ಟು ಮೇವು ದಾಸ್ತಾನು ಇರುವುದರಿಂದ ಸದ್ಯಕ್ಕೆ ಜಾನುವಾರುಗಳಿಗೆ ಮೇವು ಕೊರತೆಯಾಗುವ ಸಾಧ್ಯತೆ ಇಲ್ಲ ಎಂದು ಕಂಪ್ಲಿ ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿ ಡಾ.ಕೆ.ಯು. ಬಸವರಾಜ ಸಭೆಗೆ ಮಾಹಿತಿ ನೀಡಿದರು.
ಮೇವು ಬೆಳೆಗಾರರಿಗೆ ವಿತರಿಸಲು ಅಗತ್ಯವಿರುವ 1,071 ಮೇವು ಕಿಟ್‌ಗಳು ವಾರದೊಳಗೆ ದಾಸ್ತಾನು ಬರಲಿವೆ. ಬಳ್ಳಾರಿ ಪಶುಪಾಲನಾ ಇಲಾಖೆಯ ಉಪನಿರ್ದೇಶಕರು ಈ ಕುರಿತು ಮಾಹಿತಿ ನೀಡಿದ್ದು, ಮೇವು ಲಭ್ಯತೆ ಹಾಗೂ ವಿತರಣೆಯ ಬಗ್ಗೆ ಇಲಾಖೆಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.ಮಳೆ ಕೊರತೆಯಿಂದ ಮುಂದಿನ ದಿನಗಳಲ್ಲಿ ಮೇವಿನ ಲಭ್ಯತೆಯ ಮೇಲೆ ಪರಿಣಾಮ ಬೀರದಂತೆ ಮುಂಜಾಗ್ರತಾ ಕ್ರಮ ಮುಂದುವರಿಸಬೇಕು. ಜಾನುವಾರು ಸಾಕಾಣಿಕೆದಾರರಿಗೆ ಅಗತ್ಯ ಮಾಹಿತಿ ನೀಡಿ, ಮೇವು ಕೊರತೆ ಕಂಡುಬಂದಲ್ಲಿ ತಕ್ಷಣವೇ ಮೇಲಧಿಕಾರಿಗಳ ಗಮನಕ್ಕೆ ತಂದು ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಸಭೆಯಲ್ಲಿ ಚರ್ಚಿಸಲಾಯಿತು.
ಯುವ ಸಂಸತ್ತು, ಗಾಂಧಿ ಜಯಂತಿ ಆಚರಣೆ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಯುವ ಸಂಸತ್ತು ರಚಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಯುವಜನರಲ್ಲಿ ಪ್ರಜಾಪ್ರಭುತ್ವದ ಆಶಯ, ಸಂವಿಧಾನಾತ್ಮಕ ಮೌಲ್ಯ , ಹಕ್ಕು ಮತ್ತು ಕರ್ತವ್ಯಗಳ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸುವ ಬಗ್ಗೆ ಅಧಿಕಾರಿಗಳು ಚರ್ಚಿಸಿದರು.ಅದೇ ರೀತಿ ಅ. 2ರಂದು ಮಹಾತ್ಮ ಗಾಂಧೀಜಿ ಜಯಂತಿಯನ್ನು ತಾಲೂಕು ಮಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಿಸುವ ಕುರಿತು ಚರ್ಚೆ ನಡೆಸಲಾಯಿತು. ವಿವಿಧ ಇಲಾಖೆಗಳ ಸಹಯೋಗದಲ್ಲಿ ಕಾರ್ಯಕ್ರಮ ರೂಪಿಸಿ ಸ್ವಚ್ಛತೆ, ಅಹಿಂಸೆ ಹಾಗೂ ಗಾಂಧೀಜಿ ವಿಚಾರಧಾರೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಚಟುವಟಿಕೆ ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಸಲಹೆ ನೀಡಲಾಯಿತು.
ಸಭೆಯಲ್ಲಿ ತಾಪಂ ಇಒ ಆರ್.ಕೆ. ಶ್ರೀಕುಮಾರ್, ಉಪ ತಹಸೀಲ್ದಾರ್ ಎಸ್.ಡಿ. ರಮೇಶ್, ನಿಲಯ ಪಾಲಕ ಕೆ. ವಿರೂಪಾಕ್ಷಪ್ಪ ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.