ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಅಂಡ್ ರಿಸರ್ಚ್ ಸೆಂಟರ್ (ಆಳ್ವಾಸ್ ಮೆಡಿಕಲ್ ಕಾಲೇಜು) ಸೋಮವಾರ ಮಿಜಾರಿನ ಶ್ರೀಮತಿ ಶೋಭಾ ಮೋಹನ್ ಆಳ್ವ ಆವರಣದಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಮೂಡುಬಿದಿರೆ : ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಅಂಡ್ ರಿಸರ್ಚ್ ಸೆಂಟರ್ (ಆಳ್ವಾಸ್ ಮೆಡಿಕಲ್ ಕಾಲೇಜು) ಸೋಮವಾರ ಮಿಜಾರಿನ ಶ್ರೀಮತಿ ಶೋಭಾ ಮೋಹನ್ ಆಳ್ವ ಆವರಣದಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ, ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆ ಶುಭಾಶೀರ್ವಾದದೊಂದಿಗೆ ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಅಂಡ್ ರಿಸರ್ಚ್ ಸೆಂಟರ್‌ನ ಉದ್ಘಾಟನಾ ಸಮಾರಂಭವು ಸೋಮವಾರ ಸಂಜೆ 6 ಗಂಟೆಗೆ ಮಿಜಾರಿನ ಶ್ರೀಮತಿ ಶೋಭಾ ಮೋಹನ್ ಆಳ್ವ ಆವರಣದಲ್ಲಿ ನಡೆಯಲಿದೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಆರೋಗ್ಯ ಸಚಿವ ಯು.ಟಿ. ಖಾದರ್, ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ, ಮೂಡುಬಿದಿರೆ ಶಾಸಕ ಉಮಾನಾಥ ಎ. ಕೋಟ್ಯಾನ್ ಹಾಗೂ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಡಾ. ಭಗವಾನ್ ಬಿ.ಸಿ. ಸೇರಿದಂತೆ ಸಮಾಜದ ಇನ್ನಿತರ ಹತ್ತಾರು ಗಣ್ಯರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.ಸಂಜೆ 5ರಿಂದ 6ರವರೆಗೆ ಉಪಹಾರ, 6ರಿಂದ 7ರವರೆಗೆ ಉದ್ಘಾಟನಾ ಕಾರ್ಯಕ್ರಮ ಹಾಗೂ 7ರಿಂದ 8.15ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಕಾಲೇಜಿನ ವಿವಿಧ ವಿಭಾಗಗಳು, ವಿಶಾಲ ತರಗತಿ ಕೊಠಡಿಗಳು, ಆಧುನಿಕ ಸೌಲಭ್ಯಗಳನ್ನು ಹೊಂದಿರುವ ಸಭಾಂಗಣ ಹಾಗೂ ವಿದ್ಯಾರ್ಥಿಗಳು ಮತ್ತು ಬೋಧಕರಿಗೆ ಅನುಕೂಲವಾಗುವಂತೆ 24 ಗಂಟೆಯೂ ಕಾರ್ಯನಿರ್ವಹಿಸುವ ವಿಶಾಲ ಗ್ರಂಥಾಲಯ ನಿರ್ಮಿಸಲಾಗಿದೆ.ಎಲ್ಲ ವಿಭಾಗಗಳಲ್ಲೂ ಅನುಭವಿ ಪ್ರಾಧ್ಯಾಪಕರನ್ನು ನೇಮಕ ಮಾಡಲಾಗಿದ್ದು, ಆಧುನಿಕ ವೈದ್ಯಕೀಯ ಶಿಕ್ಷಣಕ್ಕೆ ಅಗತ್ಯವಿರುವ ತಂತ್ರಜ್ಞಾನ ಮತ್ತು ಗ್ಯಾಜೆಟ್‌ಗಳ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಮುಂದಿನ ದಿನಗಳಲ್ಲಿ ಮಿಜಾರಿನಲ್ಲಿ 650 ಹಾಸಿಗೆಯ ಪ್ರತ್ಯೇಕ ಆಸ್ಪತ್ರೆಯನ್ನು ನಿರ್ಮಿಸುವ ಯೋಜನೆ ಇದೆ.
ವಿದ್ಯಾರ್ಥಿಗಳಿಗೆ ಕ್ಲಿನಿಕಲ್ ತರಬೇತಿಗೆ ಬಲ: ಬಡವರು ಸೇರಿದಂತೆ ಸಮಾಜದ ಎಲ್ಲ ವರ್ಗದ ಜನರಿಗೆ ಗುಣಮಟ್ಟದ ಹಾಗೂ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಡಾ. ಎಂ. ಮೋಹನ್ ಆಳ್ವ ಪರಿಕಲ್ಪನೆಯಂತೆ 1986ರಲ್ಲಿ ಆರಂಭಗೊಂಡ ಆಳ್ವಾಸ್ ಹೆಲ್ತ್ ಸೆಂಟರ್ (ಎಎಚ್‌ಸಿ) ಇಂದು 650 ಹಾಸಿಗೆಗಳ ಬಹುಶಿಸ್ತೀಯ ಆಸ್ಪತ್ರೆಯಾಗಿ ಬೆಳೆದಿದೆ. ಪ್ರತಿದಿನ ಸುಮಾರು 800ರಿಂದ 1,000 ಹೊರರೋಗಿಗಳು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದು, ಇದು ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳಿಗೆ ವ್ಯಾಪಕ ಕ್ಲಿನಿಕಲ್ ತರಬೇತಿ ಮತ್ತು ಪ್ರಾಯೋಗಿಕ ಅನುಭವ ಪಡೆಯಲು ನೆರವಾಗಲಿದೆ.ಆಸ್ಪತ್ರೆಯಲ್ಲಿ ಹೃದ್ರೋಗ ಚಿಕಿತ್ಸೆಗೆ ಸಮರ್ಪಿತ ಕಾರ್ಡಿಯಾಕ್ ಸೆಂಟರ್, ಕ್ಯಾಥ್ ಲ್ಯಾಬ್ ಸೇರಿದಂತೆ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳೊಂದಿಗೆ 24*7 ಸೇವೆ ಲಭ್ಯವಿದೆ. ಆಯುಷ್ಮಾನ್ ಭಾರತ ಯೋಜನೆಯಡಿ ಅರ್ಹ ಬಿಪಿಎಲ್ ಕಾರ್ಡ್‌ದಾರರಿಗೆ ಉಚಿತ ಆಂಜಿಯೋಪ್ಲಾಸ್ಟಿ ಚಿಕಿತ್ಸೆಯ ಸೌಲಭ್ಯವೂ ಲಭ್ಯವಿದೆ. ಮುಂದಿನ ದಿನಗಳಲ್ಲಿ ಆಸ್ಪತ್ರೆಯ ವೈದ್ಯಕೀಯ ಸೌಲಭ್ಯಗಳನ್ನು ಇನ್ನಷ್ಟು ವಿಸ್ತರಿಸುವ ಯೋಜನೆಗಳಿವೆ.
ತುಳು ಭಾಷಿಕರಿಗೆ 54 ಸೀಟು: 2026–27ನೇ ಶೈಕ್ಷಣಿಕ ವರ್ಷಕ್ಕೆ ಕಾಲೇಜಿಗೆ 150 ಎಂಬಿಬಿಎಸ್ ಸೀಟುಗಳ ಮಂಜೂರಾತಿ ದೊರೆತಿದ್ದು, ತುಳು ಭಾಷಿಕ ಅಲ್ಪಸಂಖ್ಯಾತರಿಗೆ 54 ಸೀಟುಗಳು ಲಭ್ಯವಾಗಲಿವೆ. ಇದು ತುಳು ಭಾಷಿಕ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣದ ಅವಕಾಶವನ್ನು ಮತ್ತಷ್ಟು ವಿಸ್ತರಿಸುವ ಮಹತ್ವದ ಹೆಜ್ಜೆಯಾಗಿದೆಕೈಗೆಟುಕುವ ಹೆರಿಗೆ ಸೇವೆ: ಆಳ್ವಾಸ್ ಹೆಲ್ತ್ ಸೆಂಟರ್‌ನ ‘ಮಡಿಲು’ ಯೋಜನೆಯಡಿ ಕಡಿಮೆ ವೆಚ್ಚದಲ್ಲಿ ಹೆರಿಗೆ, ಗರ್ಭಕೋಶಕ್ಕೆ ಸಂಬಂಧಿಸಿದ ಶಸ್ತ್ರಚಿಕಿತ್ಸೆ ಸೇರಿದಂತೆ ಅಗತ್ಯ ವೈದ್ಯಕೀಯ ಸೇವೆ ಒದಗಿಸಲಾಗುತ್ತಿದೆ. ಸಮಾಜದ ವಿವಿಧ ವರ್ಗದ ಜನರಿಗೆ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ ತಲುಪಿಸುವ ಉದ್ದೇಶವನ್ನು ಈ ಯೋಜನೆ ಹೊಂದಿದೆ.ಆರೋಗ್ಯ ಸೇವೆ: ರಾಜ್ಯ ಸರ್ಕಾರದ ಸಾರ್ವಜನಿಕ-ಖಾಸಗಿ ಸಹಭಾಗಿತ್ವ ಮಾದರಿಯಡಿ ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರ, ಬೆಳುವಾಯಿ, ಶಕ್ತಿನಗರ ಆರೋಗ್ಯ ಕೇಂದ್ರಗಳ ನಿರ್ವಹಣೆಯನ್ನು ಆಳ್ವಾಸ್ ಹೆಲ್ತ್ ಸೆಂಟರ್ ವಹಿಸಿಕೊಂಡಿದೆ. ಮಾನಸಿಕ ಆರೋಗ್ಯಕ್ಕೂ ವಿಶೇಷ ಆದ್ಯತೆ: ವ್ಯಸನಮುಕ್ತ ಸಮಾಜ ನಿರ್ಮಾಣದ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿರುವ ಆಳ್ವಾಸ್ ಪುನರ್ಜನ್ಮ ಕೇಂದ್ರವನ್ನು ಮೇಲ್ದರ್ಜೆಗೇರಿಸಿ 50 ಹಾಸಿಗೆಗಳ ಆಳ್ವಾಸ್ ಪುನರ್ಜನ್ಮ ಮಾನಸಿಕ ಆರೋಗ್ಯ ಆಸ್ಪತ್ರೆಯಾಗಿ ಅಭಿವೃದ್ಧಿಪಡಿಸಲಾಗಿದೆ. ಇಲ್ಲಿಯು ಮುಂದಿನ ದಿನಗಳಲ್ಲಿ 200 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಿಸುವ ಯೋಜನೆ ಇದೆ.
ಭವಿಷ್ಯದ ಯೋಜನೆಗಳು: ಮುಂದಿನ ಹಂತದಲ್ಲಿ ವೃದ್ಧರಿಗಾಗಿ ವಿಶೇಷ ಆರೈಕೆ ಮತ್ತು ಚಿಕಿತ್ಸಾ ವಿಭಾಗ, ಡಯಾಲಿಸಿಸ್ ಹಾಗೂ ಕಣ್ಣಿನ ಚಿಕಿತ್ಸೆಗೆ ಪ್ರತ್ಯೇಕ ವಿಭಾಗಗಳು, ಹಾಸಿಗೆ ಹಿಡಿದಿರುವ ರೋಗಿಗಳಿಗಾಗಿ ಸುಖಾಂತ್ಯ ಆರೈಕೆ ಕೇಂದ್ರ ಸೇರಿದಂತೆ ಹಲವು ಹೊಸ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುವ ಯೋಜನೆಗಳಿವೆ.ಸೇವಾ ಮನೋಭಾವದ ವೈದ್ಯರ ನಿರ್ಮಾಣ: ವೈದ್ಯಕೀಯ ಶಿಕ್ಷಣವನ್ನು ಕೇವಲ ತಾಂತ್ರಿಕ ಜ್ಞಾನಕ್ಕೆ ಸೀಮಿತಗೊಳಿಸದೆ, ರೋಗಿಗಳು ಮತ್ತು ಸಮಾಜದ ಬಗ್ಗೆ ಮಾನವೀಯತೆ, ಕರುಣೆ ಹಾಗೂ ಸೇವಾ ಮನೋಭಾವ ಹೊಂದಿರುವ ವೈದ್ಯರನ್ನು ರೂಪಿಸುವುದು ಸಂಸ್ಥೆಯ ಪ್ರಮುಖ ಉದ್ದೇಶವಾಗಿದೆ.
ಹಿರಿಯ ವೈದ್ಯರ ಸ್ಮರಣೆಗೆ ವಿಭಾಗಗಳಿಗೆ ಹೆಸರು: ವೈದ್ಯಕೀಯ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದ ಹಿರಿಯ ವೈದ್ಯರು ಹಾಗೂ ವೈದ್ಯಕೀಯ ದಿಗ್ಗಜರ ಸ್ಮರಣೆಯನ್ನು ಗೌರವಿಸುವ ಉದ್ದೇಶದಿಂದ ಕಾಲೇಜಿನ ವಿವಿಧ ಚಿಕಿತ್ಸಾ ಕೇಂದ್ರಗಳು ಮತ್ತು ವಿಭಾಗಗಳಿಗೆ ಟಿ.ಎಂ.ಎ. ಪೈ, ಡಾ. ಎಸ್. ಕಾಂತ, ಡಾ. ಶಂಕರ್ ನಾಯಕ್, ಡಾ. ವಿ.ಎಸ್. ಆಚಾರ್ಯ, ಡಾ. ಶಾಂತರಾಮ್ ಶೆಟ್ಟಿ, ವಿನಯ್ ಹೆಗ್ಡೆ, ಡಾ. ಚಂದ್ರಶೇಖರ್ ಶೆಟ್ಟಿ, ಡಾ. ಸುಧಾಕರ್ ಶೆಟ್ಟಿ, ಡಾ. ವಿ.ಎಸ್. ಕಾಮತ್, ಡಾ. ಮನೋರಮಾ, ಡಾ. ಕೃಷ್ಣಮೂರ್ತಿ ಹಾಗೂ ಡಾ. ಅಮರನಾಥ್ ಹೆಗ್ಡೆ ಅವರ ಹೆಸರುಗಳನ್ನು ಇಡಲಾಗಿದೆ.