ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿ ಕಲಾವಿದರಿಂದ, ಆಳ್ವಾಸ್ ನುಡಿಸಿರಿ- ವಿರಾಸತ್ ಮಂಗಳೂರು ಘಟಕದ ಆಶ್ರಯದಲ್ಲಿ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಮಾ.21ರಂದು ಸಂಜೆ ‘ಆಳ್ವಾಸ್ ಸಾಂಸ್ಕೃತಿಕ ವೈಭವ’ ಕಾರ್ಯಕ್ರಮ ಸಂಘಟಿಸಲಾಗಿದೆ. ಸಮಾಜಕ್ಕೆ ನಮ್ಮ ಸಾಂಸ್ಕೃತಿಕ, ಜನಪದ ಹಾಗೂ ಶಾಸ್ತ್ರೀಯ ಕಲೆಗಳನ್ನು ತಲುಪಿಸುವುದು ಈ ಕಾರ್ಯಕ್ರಮದ ಆಶಯವಾಗಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ತಿಳಿಸಿದ್ದಾರೆ.
ಮಂಗಳೂರು
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿ ಕಲಾವಿದರಿಂದ, ಆಳ್ವಾಸ್ ನುಡಿಸಿರಿ- ವಿರಾಸತ್ ಮಂಗಳೂರು ಘಟಕದ ಆಶ್ರಯದಲ್ಲಿ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಮಾ.21ರಂದು ಸಂಜೆ ‘ಆಳ್ವಾಸ್ ಸಾಂಸ್ಕೃತಿಕ ವೈಭವ’ ಕಾರ್ಯಕ್ರಮ ಸಂಘಟಿಸಲಾಗಿದೆ. ಸಮಾಜಕ್ಕೆ ನಮ್ಮ ಸಾಂಸ್ಕೃತಿಕ, ಜನಪದ ಹಾಗೂ ಶಾಸ್ತ್ರೀಯ ಕಲೆಗಳನ್ನು ತಲುಪಿಸುವುದು ಈ ಕಾರ್ಯಕ್ರಮದ ಆಶಯವಾಗಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ತಿಳಿಸಿದ್ದಾರೆ.ನಗರ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಈಗಾಗಲೇ ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಸಲಾಗಿದ್ದು, ಅಪಾರ ಜನಮನ್ನಣೆ ಗಳಿಸಿದೆ ಎಂದರು.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು 3 ಸಾವಿರ ಮಕ್ಕಳಿಗೆ ಉಚಿತ ಶಿಕ್ಷಣದ ಜತೆಗೆ ನುಡಿಸಿರಿ, ವಿರಾಸತ್‌ನಂತಹ ಕಾರ್ಯಕ್ರಮಗಳ ಮೂಲಕ ನಮ್ಮ ನಾಡು, ನುಡಿ ಹಾಗೂ ಕಲೆಗಳ ಪುನರುತ್ಥಾನಕ್ಕೆ ಶ್ರಮಿಸುತ್ತಲೇ ಬಂದಿದೆ. ನಮ್ಮ ಶಾಸ್ತ್ರೀಯ, ಜನಪದ ಕಲೆಗಳು ಮರೆಯಾಗದಂತೆ ವಿದ್ಯಾರ್ಥಿಗಳಿಗೆ ಶಿಕ್ಷಣ ಜತೆಗೆ ಸಾಂಸ್ಕೃತಿ ಶಿಕ್ಷಣ ನೀಡುವುದು ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಮುಖ್ಯ ಉದ್ದೇಶವಾಗಿದೆ. ಮಂಗಳೂರಿನಲ್ಲಿ ನಡೆಯಲಿರುವ ಆಳ್ವಾಸ್ ಸಾಂಸ್ಕೃತಿಕ ವೈಭವಕ್ಕೆ ಸಮಾನ ಮನಸ್ಕರು ಕೈಜೋಡಿಸಬೇಕು ಎಂದು ಡಾ.ಎಂ.ಮೋಹನ್ ಆಳ್ವ ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರೊ.ಎಂ.ಬಿ. ಪುರಾಣಿಕ್ ಮಾತನಾಡಿ, ಡಾ.ಎಂ. ಮೋಹನ್ ಆಳ್ವರು ಸಂಸ್ಕಾರ, ಸಂಸ್ಕೃತಿಯನ್ನು ಮರೆತವರಲ್ಲ. ರಾಜ್ಯದಲ್ಲಿ ನೂರಾರು ವಿದ್ಯಾಸಂಸ್ಥೆಗಳಿವೆ. ಆದರೆ ಮೂಡುಬಿದಿರೆಯನ್ನು ಸಾಂಸ್ಕೃತಿಕ ಕೇಂದ್ರವನ್ನಾಗಿ ಮಾಡಿ ದೊಡ್ಡ ಕ್ರಾಂತಿಯನ್ನೇ ಮಾಡಿದ್ದಾರೆ. ನಾಡಿನ ಸಾಂಸ್ಕೃತಿಕ ಪ್ರಪಂಚಕ್ಕೆ ಡಾ.ಆಳ್ವರ ಕೊಡುಗೆ ದೊಡ್ಡದು ಎಂದರು.
ಸಂಸ್ಕೃತಿಯ ರುಚಿಯನ್ನು ಎಳೆಯರ ಮನಸ್ಸಿನಲ್ಲಿ ಡಾ.ಎಂ. ಮೋಹನ್ ಆಳ್ವರು ಬಿತ್ತಿದ್ದಾರೆ. ಶಿಕ್ಷಣದ ಗುಣಮಟ್ಟವನ್ನು ಕಾಯ್ದುಕೊಂಡು ಕಲೆ, ಸಂಸ್ಕೃತಿಗೆ ಪ್ರೋತ್ಸಾಹ ನೀಡುವ ಕೆಲಸ ಸುಲಭದ ಮಾತಲ್ಲ. ಇದನ್ನು ಡಾ.ಆಳ್ವರು ತೋರಿಸಿಕೊಟ್ಟಿದ್ದಾರೆ ಎಂದು ಶ್ಲಾಘಿಸಿದರು.ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ, ಮುಖಂಡರಾದ ಹರಿಕೃಷ್ಣ ಪುನರೂರು, ಪ್ರದೀಪ್ ಕುಮಾರ್ ಕಲ್ಕೂರ, ಪದ್ಮರಾಜ್ ಆರ್. ಪೂಜಾರಿ, ಡಾ.ಆಶಾ ಜ್ಯೋತಿ ರೈ, ಭಾಸ್ಕರ ರೈ ಕುಕ್ಕುವಳ್ಳಿ, ರತ್ನಾಕರ ಜೈನ್, ಲೀಲಾಕ್ಷ ಕರ್ಕೇರ, ಕದ್ರಿ ನವನೀತ ಶೆಟ್ಟಿ, ವಿದುಷಿ ರಾಜಶ್ರೀ ಉಳ್ಳಾಲ್, ಯುವಜನ ಕ್ರೀಡಾಧಿಕಾರಿ ಪ್ರದೀಪ್ ಡಿಸೋಜ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಆಳ್ವಾಸ್ ನುಡಿಸಿರಿ ವಿರಾಸತ್ ಮಂಗಳೂರು ಘಟಕದ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಪ್ರಸಾದ್ ರೈ ಕಲ್ಲಿಮಾರ್, ಖಜಾಂಚಿ ಶಶಿರಾಜ್ ರಾವ್ ಕಾವೂರು ಇದ್ದರು.