ಸಾರಾಂಶ
ದಾಬಸ್‍ಪೇಟೆ: ಇಂದು ಸಮಾಜದಲ್ಲಿ ನೈತಿಕತೆಯನ್ನು ಮೂಡಿಸುವ ಶಿಕ್ಷಣದ ಅವಶ್ಯಕತೆಯಿದೆ, ಅಕ್ಷರದ ಜೊತೆ ಸಂಸ್ಕಾರ, ಸಂಸ್ಕೃತಿಯನ್ನು ಸಂರಕ್ಷಿಸುವುದು ಅಗತ್ಯ ಎಂದು ನಿವೃತ್ತ ಶಿಕ್ಷಕ ಲಕ್ಷ್ಮೀನರಸಿಂಹಯ್ಯ ತಿಳಿಸಿದರು.
ಸೋಂಪುರ ಹೋಬಳಿಯ ಪೆಮ್ಮನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಲ್ಲಿ ಸರ್ಕಾರಿ ಶಾಲೆಗಳು ವಿದ್ಯಾರ್ಥಿಗಳಿಲ್ಲದೆ ಮುಚ್ಚುವ ಹಂತಕ್ಕೆ ತಲುಪುತ್ತಿವೆ. ಇನ್ನಾದರೂ ಪೋಷಕರು ಅರಿತು ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ದಾಖಲಾತಿ ಮಾಡಿಸಿ ಸರ್ಕಾರಿ ಶಾಲೆಗಳ ಉನ್ನತಿಗೆ ಸಹಕರಿಸಬೇಕು. ಇಷ್ಟು ವರ್ಷಗಳ ಕಾಲ ಸೇವೆ ಮಾಡಿದ್ದಕ್ಕೆ ತೃಪ್ತಿ ಇದೆ ಎಂದರು.ಗ್ರಾಪಂ ಮಾಜಿ ಸದಸ್ಯ ದೇವರಾಜು ಮಾತನಾಡಿ, ನಮ್ಮ ಶಾಲೆಯಲ್ಲಿ ಕಳೆದ 23 ವರ್ಷಗಳಿಂದ ಶಿಕ್ಷಕರಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗುತ್ತಿದ್ದಾರೆ. ಇವರು ನೀಡಿದ ಶಿಕ್ಷಣವನ್ನು ಕಲಿತ ವಿದ್ಯಾರ್ಥಿಗಳು ಇಂದು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡು ಸೇವೆ ಸಲ್ಲಿಸುತ್ತಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಈ ಹಿಂದೆ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿದ ಶಿಕ್ಷಕರುಗಳಾದ ಯೋಗಾನಂದ್, ನಾರಾಯಣಪ್ಪ, ಹನುಮಕ್ಕ ಅವರನ್ನು ಹಳೆ ವಿದ್ಯಾರ್ಥಿಗಳು ಸನ್ಮಾನಿಸಿದರು.ಈ ಸಂದರ್ಭದಲ್ಲಿ ಹಳೆವಿದ್ಯಾರ್ಥಿಗಳಾದ ತಿಮ್ಮಪ್ಪಯ್ಯ, ಮಂಜುನಾಥ್, ದೇವರಾಜು, ಕುಮಾರ್, ಜಯರಾಮ್, ಮೂರ್ತಿ, ಪುಟ್ಟಣ್ಣ, ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ವಾಸುದೇವಮೂರ್ತಿ, ಗಿರೀಶ್ ಕುಮಾರ್ ಸೇರಿದಂತೆ ಶಾಲೆಯ ಮಕ್ಕಳು, ಹಳೆ ವಿದ್ಯಾರ್ಥಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.
(2 ಕಾಲಂ ಸುದ್ದಿ, 1 ಕಾಲಂ ಫೋಟೋ ಬಳಸಿ)ಪೋಟೋ 6 : ಪೆಮ್ಮನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಿವೃತ್ತ ಶಿಕ್ಷಕ ಲಕ್ಷ್ಮೀನರಸಿಂಹಯ್ಯ ಅವರನ್ನು ಹಳೆ ವಿದ್ಯಾರ್ಥಿಗಳು ಸನ್ಮಾನಿಸಿದರು.