ಸಾರಾಂಶ
ಲಕ್ಷ್ಮೇಶ್ವರ: ಗ್ರಾಮೀಣ ಪ್ರದೇಶದಲ್ಲಿನ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಪ್ರಥಮ ಆದ್ಯತೆ ನೀಡುತ್ತಿರುವುದು ಸ್ವಾಗತಾರ್ಹ ಸಂಗತಿಯಾಗಿದೆ ಎಂದು ಜಿಪಂ ಮಾಜಿ ಸದಸ್ಯ ಎಮ್.ಎಸ್. ದೊಡ್ಡಗೌಡರ ಹೇಳಿದರು.
ಶುಕ್ರವಾರ ಸಂಜೆ ಸಮೀಪದ ಗೊಜನೂರ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗ್ರಾಮೀಣ ಮಕ್ಕಳು ಗುಣಮಟ್ಟದ ಶಿಕ್ಷಣದಿಂದ ವಂಚಿತವಾಗುತ್ತಿದ್ದ ಕಾಲದಲ್ಲಿ ಸರ್ಕಾರ ಗುಣಮಟ್ಟದ ಶಿಕ್ಷಣ ನೀಡುವ ಸಂಸ್ಥೆಗಳ ಅವಶ್ಯಕತೆ ಅರಿತು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಸ್ಥಾಪನೆ ಮಾಡುವ ಮೂಲಕ ಪ್ರತಿಭೆಗಳಿಗೆ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ನೀಡುವ ಕಾರ್ಯ ಮಾಡಿದ್ದರಿಂದ ರಾಜ್ಯದಲ್ಲಿ ಗುಣಮಟ್ಟದ ಶಿಕ್ಷಣ ಸಿಗಲು ಸಾಧ್ಯವಾಗಿದೆ, ಗ್ರಾಮೀಣ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ನಿಮ್ಮ ತಂದೆ ತಾಯಿಗಳ ಆಸೆಯನ್ನು ಪೂರೈಸುವ ಕಾರ್ಯ ಮಾಡಬೇಕು ಎಂದು ಹೇಳಿದರು.
ತಹಸೀಲ್ದಾರ್ ವಾಸುದೇವ ಸ್ವಾಮಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎನ್ನುವುದು ಸರ್ಕಾರದ ಆಸೆಯಾಗಿತ್ತು. ಆ ನಿಟ್ಟಿನಲ್ಲಿ ಸರ್ಕಾರ ಈಗ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಕಾರ್ಯ ಮಾಡುತ್ತಿದೆ. ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದು ತಮ್ಮ ಮುಂದಿನ ಭವಿಷ್ಯ ರೂಪಿಸಿಕೊಳ್ಳುವ ಕಾರ್ಯ ಮಾಡಬೇಕು ಎಂದು ಹೇಳಿದರು.ಈ ವೇಳೆ ಸಮಾಜ ಕಲ್ಯಾಣ ಇಲಾಖೆಯ ನಿವೃತ್ತ ಜಿಲ್ಲಾಧಿಕಾರಿ ರತ್ನಾ ಹೊಸಮನಿ, ಎಸ್.ಪಿ. ಪಾಟೀಲ, ಶಿವನಗೌಡ ಪಾಟೀಲ ಮಾತನಾಡಿದರು. ಪ್ರಾಚಾರ್ಯ ಎನ್. ಕೆ. ಹತ್ತಿಕಾಳ ಶಾಲೆ ನಡೆದು ಬಂದ ದಾರಿಯ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಭೆಯಲ್ಲಿ ಗ್ರಾಪಂ ಅಧ್ಯಕ್ಷೆ ನೀಲವ್ವ ಮಾದರ ಕಾರ್ಯಕ್ರಮ ಉದ್ಘಾಟಿಸಿದರು. ಗ್ರಾಪಂ ಸದಸ್ಯೆ ನೀಲವ್ವ ಪಾಟೀಲ, ಚಿನ್ನವ್ವ ಲಮಾಣಿ, ಶಂಭುಲಿಂಗಪ್ಪ ಸೊರಟೂರ, ನಾಗಪ್ಪ ವಡಕಣ್ಣವರ, ಅಶೋಕ ಸೊರಟೂರ, ಬಸವರಾಜ ದನದಮನಿ, ಶಿವಪುತ್ರಪ್ಪ ಕಣವಿ, ನಾಗರಾಜ ಕಳಸಾಪೂರ. ರವಿಕಿರಣ ನಾಯಕ್ ಇದ್ದರು.ಸಭೆಯ ನಂತರ ನಡೆದ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ನೋಡುಗರನ್ನು ಮಂತ್ರಮುಗ್ಧಗೊಳಿಸಿದ್ದವು. ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶಿಕ್ಷಕ ಸಿಬ್ಬಂದಿಗಳು ಕಾರ್ಯಕ್ರಮ ನಿರ್ವಹಿಸಿದರು.