ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮ ಮಟ್ಟಕ್ಕೆ ತರಲು ಹೆಚ್ಚಿನ ಕ್ರಮ ಅಗತ್ಯ: ಭಾಗ್ಯಮ್ಮ

| Published : Jan 12 2024, 01:46 AM IST

ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮ ಮಟ್ಟಕ್ಕೆ ತರಲು ಹೆಚ್ಚಿನ ಕ್ರಮ ಅಗತ್ಯ: ಭಾಗ್ಯಮ್ಮ
Share this Article
  • FB
  • TW
  • Linkdin
  • Email

ಸಾರಾಂಶ

ಕುಶಾಲನಗರ ಜ್ಞಾನ ಭಾರತಿ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರೌಢಾಶಾಲೆಗಳ ಮುಖ್ಯ ಶಿಕ್ಷಕರ ಸಭೆ ನಡೆಯಿತು. ತಾಲೂಕಿನ ಪ್ರೌಢಶಾಲೆಗಳಲ್ಲಿ ಪ್ರಸಕ್ತ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಪರೀಕ್ಷೆಯ ಪ್ರಗತಿ ಪರಿಶೀಲನೆ ಮಾಡಲಾಯಿತು.

ಕನ್ನಡಪ್ರಭ ವಾರ್ತೆ ಕುಶಾಲನಗರಶಿಕ್ಷಕರು ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವ ಮೂಲಕ ಮಕ್ಕಳ ಕಲಿಕಾಮಟ್ಟವನ್ನು ಉತ್ತಮಪಡಿಸಿ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷಾ ಫಲಿತಾಂಶವನ್ನು ಅತ್ಯುತ್ತಮ ಮಟ್ಟಕ್ಕೆ ತರಲು ಹೆಚ್ಚಿನ ಕ್ರಮ ವಹಿಸಬೇಕು ಎಂದು ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಭಾಗ್ಯಮ್ಮ ಹೇಳಿದರು.

ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಹಾಗೂ ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ‌ ಕುಶಾಲನಗರ ಜ್ಞಾನ ಭಾರತಿ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರೌಢಾಶಾಲೆಗಳ ಮುಖ್ಯ ಶಿಕ್ಷಕರ ಸಭೆಯಲ್ಲಿ ಶೈಕ್ಷಣಿಕ ಮಾಹಿತಿ ನೀಡಿದರು.ತಾಲೂಕಿನ ಪ್ರೌಢಶಾಲೆಗಳಲ್ಲಿ ಪ್ರಸಕ್ತ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಪರೀಕ್ಷೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಪ್ರೌಢಶಾಲಾ ಎಲ್ಲಾ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದ ತಮ್ಮ ಶಾಲೆಗಳು ಪ್ರಸಕ್ತ ವರ್ಷದಲ್ಲಿ ಶೇ.100 ಫಲಿತಾಂಶ ಪಡೆಯಲು ಶ್ರಮಿಸಬೇಕು ಎಂದರು.

ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳಿಗೆ ವಿಶೇಷ ಆದ್ಯತೆ ನೀಡಿ ಅವರೂ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಹೆಚ್ಚಿನ ಶ್ರಮವಹಿಸಬೇಕು. ವಿದ್ಯಾರ್ಥಿಗಳು 8 ಮತ್ತು 9ನೇ ತರಗತಿಗಳಲ್ಲಿರುವಾಗಲೇ ಅವರ ಕಲಿಕೆ ಬಗ್ಗೆ ಹೆಚ್ಚಿನ ಗಮನ ಹರಿಸಿದರೆ 10ನೇ ತರಗತಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಸುಲಭವಾಗಿ ಬರೆಯಲು ಸನ್ನದ್ಧರಾಗುತ್ತಾರೆ. ಇದರಿಂದ ಶಿಕ್ಷಕರ ಹೊರೆಯೂ ಕಡಿಮೆಯಾಗುವುದು, ವಿದ್ಯಾರ್ಥಿಗಳ ಕಲಿಕೆಯೂ ಸುಗಮವಾಗುವುದು ಎಂದು ಅಭಿಪ್ರಾಯಪಟ್ಟರು.ಕಳೆದ ಸಾಲಿನಲ್ಲಿ ಶೇ.100ರಷ್ಟು ಉತ್ತಮ ಫಲಿತಾಂಶ ಪಡೆದ ಶಾಲೆಗಳು ಹಾಗೂ ವಿಷಯ ಶಿಕ್ಷಕರ ಶ್ರಮದ ಬಗ್ಗೆ ಬಿಇಓ ಭಾಗ್ಯಮ್ಮ ಇದೇ ವೇಳೆ ಶ್ಲಾಘಿಸಿದರು.

ಪ್ರಸ್ತುತ ಸಾಲಿನ ಎಸ್ಸೆಸ್ಸೆಲ್ಸಿ ಪರಿಕ್ಷೆಯ ಫಲಿತಾಂಶವನ್ನು ಉತ್ತಮ ಪಡಿಸಲು ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಪರಸ್ಪರ ಸಮನ್ವಯತೆಯಿಂದ ತಮ್ಮ ಜವಾಬ್ದಾರಿಗಳನ್ನು ಅರಿತು ಕೆಲಸ ನಿರ್ವಹಿಸಿದರೆ ಖಂಡಿತವಾಗಿ ನಿರೀಕ್ಷಿತ ಉತ್ತಮ ಫಲಿತಾಂಶ ಗಳಿಸಲು ಸಾಧ್ಯ. ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಉತ್ತಮಪಡಿಸಲು ಕೈಗೊಳ್ಳಬಹುದಾದ ಶೈಕ್ಷಣಿಕ ಕ್ರಮಗಳ ಕುರಿತು ಮಾರ್ಗದರ್ಶನ ನೀಡಿದರು. ತಾವು ಶಾಲೆಗಳಿಗೆ ಭೇಟಿ ನೀಡಿದಾಗ ಗಮನಿಸಿದ ಅಂಶಗಳನ್ನು ಬಿಇಓ ವಿಶ್ಲೇಷಿಸಿದರು.ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ.ಸೋಮಶೇಖರ್ ಮಾತನಾಡಿ, ಜಿಲ್ಲೆಯಲ್ಲಿ ಪ್ರತಿವರ್ಷ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ಉತ್ತಮಪಡಿಸಲು ಎಲ್ಲಾ ಪ್ರೌಢಶಾಲೆಗಳಲ್ಲಿ ಶಿಕ್ಷಕರು ಉತ್ತಮ ಶೈಕ್ಷಣಿಕ ಯೋಜನೆಗಳ ಮೂಲಕ ಹೆಚ್ಚಿನ ಕಾಳಜಿ ವಹಿಸಿದ್ದಾರೆ. ಹಾಗಾಗಿ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಫಲಿತಾಂಶ ನಿರೀಕ್ಷಿಸಲಾಗಿದೆ ಎಂದರು.ಜಿಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಕೋಶಾಧಿಕಾರಿ ಹ್ಯಾರಿ ಮೋರಸ್, ತಾಲೂಕು ಮುಖ್ಯ ಶಿಕ್ಷಕರ ಸಂಘದ ಉಪಾಧ್ಯಕ್ಷೆ ಕೆ.ಇಂದಿರಾ, ನಿರ್ದೇಶಕಿ ಬಿ.ಎನ್.ಪುಷ್ಪ, ಕಾನ್ ಬೈಲ್ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಎಂ.ವಿ.ಮಂಜೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಸಭೆಯಲ್ಲಿ ತಾಲೂಕಿನ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರೌಢಶಾಲಾ ಮುಖ್ಯ ಶಿಕ್ಷಕರು ಇದ್ದರು.

ಇದೇ ವೇಳೆ ನೂತನ ಬಿಇಓ ಎಸ್.ಭಾಗ್ಯಮ್ಮ ಹಾಗೂ ಈ ಹಿಂದೆ ಪ್ರಭಾರ ಬಿಇಓ ಆಗಿ ಸೇವೆ ಸಲ್ಲಿಸಿದ ಕಾನ್‌ಬೈಲ್ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಎಂ.ವಿ.ಮಂಜೇಶ್ ಅವರನ್ನು ತಾಲೂಕು ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ವತಿಯಿಂದ ಸನ್ಮಾನಿಸಲಾಯಿತು.ಸಭೆಯಲ್ಲಿ ನೂತನವಾಗಿ ಪ್ರೌಢಶಾಲಾ ಮುಖ್ಯ ಶಿಕ್ಷಕರಾಗಿ ನೇಮಕಗೊಂಡ ನಳಿನಿ, ರಾಜೇಶ್ವರಿ, ಹನುಮಂತಪ್ಪ ತಳವಾರ್ ಹಾಗೂ ಜಾಧವ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.