ಸಾರಾಂಶ
ಕನ್ನಡಪ್ರಭ ವಾರ್ತೆ ಬೆಳ್ತಂಗಡಿ
ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷ ಸ್ಪಷ್ಟವಾದ ಬಹುಮತದೊಂದಿಗೆ ಗೆಲವು ಪಡೆಯಲಿದೆ. ತುಳುನಾಡಿನಿಂದ ಕನಿಷ್ಟ ಹತ್ತು ಮಂದಿ ಕಾಂಗ್ರೆಸ್ ಶಾಸಕರು ಆಯ್ಕೆಯಾಗಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.ಅವರು ಬೆಳ್ತಂಗಡಿ ನಗರ ಹಾಗೂ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಗುರುವಾಯನಕೆರೆಯಲ್ಲಿ ಭಾನುವಾರ ನಡೆದ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು.ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ. ಇದು ರಾಜ್ಯದ ಸಾಮಾನ್ಯ ಜನರಿಗೆ ಶಕ್ತಿ ತುಂಬುವ ಕಾರ್ಯಕ್ರಮಗಳಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಕಾರ್ಯ ಮಾಡಬೇಕು. ರಾಜ್ಯದ ಜನತೆ ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಚಲಾಯಿಸುತ್ತಾರೆ ಎಂಬ ವಿಶ್ವಾಸವಿದೆ. ಇದನ್ನು ಕಳೆದ ಉಪ ಚುನಾವಣೆಯಲ್ಲಿ ನೋಡಿದ್ದೇವೆ. ಬಿಜೆಪಿ ಜನತಾದಳದ ಕೋಟೆಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲು ಸಾಧ್ಯವಾಗಿದೆ. ಕರಾವಳಿಯ ಕಾಂಗ್ರೆಸ್ ಕಾರ್ಯಕರ್ತರಿಗೆ ಯಾವುದೆ ಹಿಂಜರಿಕೆ ಬೇಡ ಮುಂದಿನ ಚುನಾವಣೆಯಲ್ಲಿ ಗೆಲುವು ನಿಮ್ಮದೇ ಆಗಲಿದೆ ಎಂದರು.ಮುಂದಿನ ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಬರಲಿದ್ದು, ಕಾರ್ಯಕರ್ತರು ಆತ್ಮವಿಶ್ವಾಸದಿಂದ ಚುನಾವಣೆ ಎದುರಿಸಬಹುದಾಗಿದೆ. ಸರ್ಕಾರದ ಸಾಧನೆಗಳೇ ಕಾಂಗ್ರೆಸ್ ಪಕ್ಷಕ್ಕೆ ಶ್ರೀರಕ್ಷೆಯಾಗಿದೆ ಎಂದು ಹೇಳಿದರು.ಕಾಂಗ್ರೆಸ್ ಪಕ್ಷ ಜನರ ಬದುಕನ್ನು ಕಟ್ಟುವ ಕಾರ್ಯ ಮಾಡಿದೆ. ಆದರೆ ಬಿಜೆಪಿ ಜನರ ಭಾವನೆಗಳೊಂದಿಗೆ ಆಟವಾಡುವ ಕಾರ್ಯ ಮಾಡುತ್ತಿದೆ. ಜನರು ಅದನ್ನು ಅರ್ಥ ಮಾಡಿಕೊಳ್ಳುತ್ತಾರೆ. ಅಧಿಕಾರದಲ್ಲಿ ಯಾರೂ ಶಾಶ್ವತವಲ್ಲ, ಆದರೆ ಜನರ ಹೃದಯ ಗೆಲ್ಲುವ ಕಾರ್ಯ ಮಾಡೋಣ ಎಂದರು.
ವಾಗ್ಮಿ ನಿಕೇತ್ ರಾಜ್ ಮೌರ್ಯ ಮಾತನಾಡಿ, ಬೆಳ್ತಂಗಡಿಯಲ್ಲಿ ಕಾಂಗ್ರೆಸ್‌ನ ಶಕ್ತಿಯನ್ನು ನೋಡಿ ಭಯಗೊಂಡು ಬ್ಯಾನರ್ ಹರಿದು ಹಾಕುವ ಕಾರ್ಯ ಮಾಡಿದ್ದಾರೆ. ಆದರೆ ಗ್ಯಾರಂಟಿ ಯೋಜನೆಯ ಮೂಲಕ ರಾಜ್ಯದ ಜನರ ಹೃದಯಗಳಲ್ಲಿ ಕಟ್ಟಿರುವ ಬ್ಯಾನರ್ ಹರಿಯಲು ಯಾರಿಗೂ ಸಾಧ್ಯವಿಲ್ಲ ಎಂದರು.ಸಮಾವೇಶ ಉದ್ದೇಶಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಮಾತನಾಡಿದರು. ಅಧ್ಯಕ್ಷತೆಯನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ವಹಿಸಿದ್ದರು.
ಕಾಂಗ್ರೆಸ್ ಮುಖಂಡ ಸುಧೀರ್ ಕುಮಾರ್ ಮೂರಳ್ಳಿ ಮಾತನಾಡಿದರು.ಮಾಜಿ ಸಚಿವರಾದ ಬಿ.ರಮಾನಾಥ ರೈ, ಅಭಯಚಂದ್ರ ಜೈನ್, ವಿನಯಕುಮಾರ್ ಸೊರಕೆ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಪದ್ಮರಾಜ್ ಆರ್., ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ಪಕ್ಷದ ಮುಖಂಡರಾದ ಎಂ.ಎಸ್. ಮೊಹಮ್ಮದ್, ಸತೀಶ್ ಕುಮಾರ್ ಕಾಶಿಪಟ್ಣ, ನಾಗೇಶ್ ಕುಮಾರ್ ಗೌಡ, ಉಮ್ಮರ್ ಕುಂಞಿ ಮುಸ್ಲಿಯಾರ್, ಶೇಖರ ಕುಕ್ಕೇಡಿ, ಪದ್ಮನಾಭ ಸಾಲಿಯಾನ್, ಇಬ್ರಾಹಿಂ ನವಾಜ್, ಸೆಬಾಸ್ಟಿಯನ್ ಕಳೆಂ, ಕರೀಂ ಗೇರುಕಟ್ಟೆ, ವಂದನಾ ಭಂಡಾರಿ, ನಮಿತಾ ಪೂಜಾರಿ ಹಾಗೂ ಇತರ ಮುಖಂಡರು ಉಪಸ್ಥಿತರಿದ್ದರು.ರಕ್ಷಿತ್ ಶಿವರಾಂ ಸ್ವಾಗತಿಸಿದರು. ಸಾಹುಲ್ ಹಮೀದ್ ನಿರೂಪಿಸಿದರು.