ಸರ್ಕಾರಿ ಶಾಲೆಗಳ ಅಭಿವೃದ್ದಿಗಾಗಿ ಹೆಚ್ಚು ಒತ್ತು : ಕೆ. ಷಡಕ್ಷರಿ

| Published : Feb 10 2025, 01:47 AM IST

ಸಾರಾಂಶ

ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಅವುಗಳನ್ನು ಸಮರ್ಪಕವಾಗಿ ಸದ್ಭಳಕೆ ಮಾಡಿಕೊಂಡು ಶಾಲೆಗಳ ಉಳಿವಿಗೆ ಶ್ರಮಿಸೋಣ ಎಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ತಿಪಟೂರು

ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಅವುಗಳನ್ನು ಸಮರ್ಪಕವಾಗಿ ಸದ್ಭಳಕೆ ಮಾಡಿಕೊಂಡು ಶಾಲೆಗಳ ಉಳಿವಿಗೆ ಶ್ರಮಿಸೋಣ ಎಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು.

ತಾಲೂಕಿನ ರಜತಾದ್ರಿಪುರದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಶಾಲಾ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬರಿಗೂ ಶಿಕ್ಷಣ ದೊರೆಯುವಂತಾಗಬೇಕೆಂಬ ಉದ್ದೇಶದಿಂದ ಸರ್ಕಾರ ಶಿಕ್ಷಣಕ್ಕೆ ಸಂಬಂಧಪಟ್ಟ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಪೋಷಕರು ಖಾಸಗಿ ಶಾಲೆಯ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಗೆ ತಮ್ಮ ಮಕ್ಕಳನ್ನು ಸೇರಿಸಬೇಕು. ಆಧುನಿಕ ಜಗತ್ತಿನಲ್ಲಿ ಪ್ರತಿಯೊಬ್ಬರೂ ವಿದ್ಯಾವಂತರಾಗಬೇಕೆಂಬ ಸದುದ್ದೇಶದಿಂದ ಸರ್ಕಾರ ಕಡ್ಡಾಯ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದೆ. ಗ್ರಾಮೀಣ ಪ್ರದೇಶಗಳ ಸರ್ಕಾರಿ ಶಾಲೆಗಳನ್ನು ಉನ್ನತೀಕರಿಸಿ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಲಾಗುತ್ತಿದೆ. ಕಲಿಕೆಗೆ ಮುಕ್ತ ವಾತಾವರಣ ಕಲ್ಪಿಸಿದ್ದು, ಉಚಿತ ಸಮವಸ್ತ್ರ, ಪಠ್ಯಪುಸ್ತಕ, ಅಕ್ಷರದಾಸೋಹದಂತಹ ಯೋಜನೆಗಳನ್ನು ಜಾರಿಗೆ ತಂದಿದೆ. ಇದರಿಂದ ಸರ್ಕಾರಿ ಶಾಲೆಗಳಲ್ಲಿ ಕಲಿಯಬೇಕೆಂಬ ಹಂಬಲವನ್ನು ಹೆಚ್ಚಿಸಿದೆ. ಆದ್ದರಿಂದ ಸ್ಥಳೀಯ ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು ಸಹ ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಶ್ರಮಿಸಬೇಕೆಂದರು. ನಂತರ ನಗರ ಮತ್ತು ಗ್ರಾಮೀಣ ಪ್ರದೇಶಕ್ಕೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಸಲುವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಜಲ ಜೀವನ ಮಿಷನ್ ಯೋಜನೆಯಡಿ ಮನೆ ಮನೆಗೆ ಕುಡಿಯುವ ನೀರನ್ನು ಕಲ್ಪಿಸಲಾಗುತ್ತಿದ್ದು ಈ ನೀರನ್ನು ಅನ್ಯಕಾರ್ಯಗಳಿಗೆ ಬಳಸಿಕೊಳ್ಳದೆ ಕುಡಿಯಲು ಮಾತ್ರ ಬಳಸಿಕೊಳ್ಳಬೇಕು. ಹಾಗೆಯೇ ನಗರದಲ್ಲಿ ನೂತನವಾಗಿ ಬೋರ್‌ವೆಲ್‌ಗಳನ್ನು ಕೊರೆಸಲಾಗುತ್ತಿದೆ ಎಂದರು. ಕಾರ್ಯಕ್ರಮ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಯ್ಯ ಸೇರಿದಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಎಸ್‌ಡಿಎಂಸಿ ಸದಸ್ಯರು, ಮುಖ್ಯ ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.