ಪಾಂಡವಪುರ:
ಕೆಪಿಸಿಸಿ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ಕೆ.ಹರಿಪ್ರಸಾದ್ ಅವರ ಪದಗ್ರಹಣ ಹಾಗೂ ಅಧಿಕಾರ ಹಸ್ತಾಂತರ ಕಾರ್ಯಕ್ರಮ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜೂ.21ರಂದು ನಡೆಯಲಿದೆ. ಕಾರ್ಯಕ್ರಮಕ್ಕೆ ಮೇಲುಕೋಟೆ ವಿಧಾನಸಭಾ ಕ್ಷೇತ್ರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಭಾಗವಹಿಸಬೇಕೆಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ತ್ಯಾಗರಾಜು ಕೋರಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಹಿನ್ನೆಲೆಯಲ್ಲಿ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಬಿ.ಕೆ.ಹರಿಪ್ರಸಾದ್ ನೇಮಕಗೊಂಡು ಪದಗ್ರಹಣ ಮಾಡುತ್ತಿರುವ ಹಿನ್ನೆಲೆಯಲ್ಲಿ ಮೇಲುಕೋಟೆ ಕ್ಷೇತ್ರದಿಂದ ಕನಿಷ್ಠ ಪಕ್ಷ 25ಕ್ಕೂ ಅಧಿಕ ವಾಹನದಲ್ಲಿ ಕಾರ್ಯಕರ್ತರು ತೆರಳಿ ಅವರಿಗೆ ಶುಭಾಶಯ ಕೋರಬೇಕೆಂದು ತೀರ್ಮಾನಿಸಲಾಗಿದೆ ಎಂದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಕೃಷ್ಣೇಗೌಡ ಮಾತನಾಡಿ, ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಪದಗ್ರಹಣ ಕಾರ್ಯಕ್ರಮಕ್ಕೆ ಸ್ವಯಂ ಪ್ರೇರಿತರಾಗಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಸಾವಿರಾರು ಜನರು ಭಾಗಿ: ಗಂಗಾಧರ್
ಮಂಡ್ಯ: ಜೂ.21 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೆಪಿಸಿಸಿ ವತಿಯಿಂದ ನಡೆಯಲಿರುವ ಅಧಿಕಾರ ಸ್ವೀಕಾರ ಹಾಗೂ ಅಭಿನಂದನಾ ಸಮಾರಂಭಕ್ಕೆ ಜಿಲ್ಲೆಯಿಂದ ಸಾವಿರಾರು ಕಾರ್ಯಕರ್ತರು ತೆರಳಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನಾ ಸಮಾರಂಭ ಮತ್ತು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಪದಗ್ರಹಣ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಸಾವಿರಾರು ಕಾರ್ಯಕರ್ತರು ಸ್ವಯಂ ಪ್ರೇರಿತವಾಗಿ ತೆರಳಲಿದ್ದಾರೆ ಎಂದರು.ಜಿಲ್ಲೆಯ ಎಲ್ಲಾ 7 ವಿಧಾನಸಭಾ ಕ್ಷೇತ್ರಗಳಿಂದ 800 ರಿಂದ 1000 ಸಾವಿರ ಮಂದಿ ಸಮಾರಂಭಕ್ಕೆ ತೆರಳಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಮುಖಂಡರು, ಕಾರ್ಯಕರ್ತರು ಆಗಮಿಸುವಂತೆ ಮನವಿ ಮಾಡಿದರು.ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಕಿಸಾನ್ ಮೋರ್ಚಾದ ಅಧ್ಯಕ್ಷ ದೇಶಹಳ್ಳಿ ಮೋಹನ್, ಮುಖಂಡ ತಗ್ಗಹಳ್ಳಿ ರಾಮಕೃಷ್ಣ, ಗುರುರಾಜ್, ವಿಜಯ್‌ಕುಮಾರ್ ಇತರರಿದ್ದರು.