ಕಲುಷಿತ ನೀರು ಸೇವಿಸಿ 40ಕ್ಕೂ ಅಧಿಕ ಜನರು ಅಸ್ವಸ್ಥ

| Published : Aug 13 2024, 12:49 AM IST

ಸಾರಾಂಶ

ಬೆಳಗಾವಿ: ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 40 ಅಧಿಕ ಜನರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದ್ದು, ತೀವ್ರ ಅಸ್ವಸ್ಥಗೊಂಡ ಮೂವರನ್ನು ಜಿಲ್ಲಾಸ್ಪತ್ರೆಗೆ, ಮೂವರನ್ನು ಬೈಲಹೊಂಗಲ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಗಾವಿ: ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 40 ಅಧಿಕ ಜನರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದ್ದು, ತೀವ್ರ ಅಸ್ವಸ್ಥಗೊಂಡ ಮೂವರನ್ನು ಜಿಲ್ಲಾಸ್ಪತ್ರೆಗೆ, ಮೂವರನ್ನು ಬೈಲಹೊಂಗಲ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರನ್ನು ಚಚಡಿ, ಇಂಚಲದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈರವ್ವ ಗಾಳಿಮಠ (63) ಎಂಬ ಮಹಿಳೆಯನ್ನು ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿಯುತ್ತಿದ್ದಂತೆಯೇ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಹೇಶ ಕೋಣಿ ಗ್ರಾಮಕ್ಕೆ ಭೇಟಿ ನೀಡಿ ತುರ್ತು ಚಿಕಿತ್ಸೆಯ ವ್ಯವಸ್ಥೆ ಮಾಡಿದ್ದಾರೆ. ಕಲುಷಿತ ನೀರು ಸೇವನೆಯಿಂದ ಜನರು ಅಸ್ವಸ್ಥರಾಗಿದ್ದಾರೆ. ಯಾವುದೇ ಪ್ರಾಣಾಪಾಯ ಆಗಿಲ್ಲ. ಅಸ್ವಸ್ಥಗೊಂಡವರನ್ನು ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗ್ರಾಮದಲ್ಲಿ ನಾಲ್ವರು ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಬೀಡುಬಿಟ್ಟಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು. ಜನರು ನೀರನ್ನು ಕುದಿಸಿ ಆರಿಸಿ ಕುಡಿಯಬೇಕೆಂದು ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ತಾಪಂ ಇಒ ಯಶವಂತಕುಮಾರ್‌ ಮಾತನಾಡಿ, ಗ್ರಾಮದ ಕೊಳವೆಬಾವಿಗಳ ನೀರನ್ನು ತಪಾಸಣೆಗೆ ಕಳಿಸಲಾಗಿದೆ. ಗ್ರಾಮದ ನೀರು ಸರಬರಾಜು ನಿಲ್ಲಿಸಲಾಗಿದೆ. ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.