ಸಾರಾಂಶ
ಕನ್ನಡಪ್ರಭ ವಾರ್ತೆ ನಾಗಮಂಗಲ
ಪಟ್ಟಣದಲ್ಲಿ ಶುಕ್ರವಾರ ನಡೆಯುವ ಐತಿಹಾಸಿಕ 73ನೇ ವರ್ಷದ ಶ್ರೀಕೋಟೆ ವಿದ್ಯಾಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದ 800ಕ್ಕೂ ಹೆಚ್ಚು ಪೊಲೀಸರು ಮತ್ತು ಗೃಹ ರಕ್ಷಕದಳದ ಸಿಬ್ಬಂದಿ ಪಟ್ಟಣದಲ್ಲಿ ಗುರುವಾರ ಸಂಜೆ ಪಥ ಸಂಚಲನ ನಡೆಸಿದರು.ಪಟ್ಟಣದ ಶ್ರೀಸೌಮ್ಯಕೇಶವಸ್ವಾಮಿ ದೇವಸ್ಥಾನದ ಮುಂಭಾಗದಿಂದ ಆರಂಭಗೊಂಡ ಪೊಲೀಸ್ ಪಥ ಸಂಚಲನ ಪಟ್ಟಣದ ಪ್ರಮುಖ ರಸ್ತೆ, ವೃತ್ತಗಳು ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಸಂಚರಿಸಿ ನಿಮ್ಮೊಂದಿಗೆ ನಾವಿದ್ದೇವೆಂದು ಜನರಲ್ಲಿ ವಿಶ್ವಾಸ ಮೂಡಿಸುವ ಜೊತೆಗೆ, ಶಾಂತಿ ಕದಡಲು ಯತ್ನಿಸುವವರ ವಿರುದ್ಧ ಕಠಿಣ ಕ್ರಮಜರುಗಿಸುವ ಸಂದೇಶ ರವಾನಿಸಿದರು.
ಈ ವೇಳೆ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ಶ್ರೀಕೋಟೆ ವಿದ್ಯಾಗಣಪತಿ ಉತ್ಸವದ ಪ್ರಯುಕ್ತ ಪೊಲೀಸ್ ಇಲಾಖೆಯಿಂದ ಸಾಕಷ್ಟು ಪೂರ್ವ ತಯಾರಿ ಮಾಡಿಕೊಳ್ಳಲಾಗಿದೆ. ಹಾಗಾಗಿ ಸಾರ್ವಜನಿಕರು ಶಾಂತಿ ಸುವ್ಯವಸ್ಥೆ ಕಾಪಾಡುವ ಜೊತೆಗೆ ಸಣ್ಣ ಪುಟ್ಟ ಅಹಿತಕರ ಘಟನೆಗಳಿಗೂ ಅವಕಾಶ ನೀಡದಂತೆ ಯಾವುದೇ ಭಯವಿಲ್ಲದೆ ವಿಜೃಂಭಣೆಯಿಂದ ಗಣೇಶೋತ್ಸವದಲ್ಲಿ ಪಾಲ್ಗೊಳ್ಳಬಹುದು.ಈ ಗಣೇಶೋತ್ಸವದಲ್ಲಿ ಸಹಸ್ರಾರು ಮಂದಿ ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ ಸೂಕ್ತ ಪೊಲೀಸ್ ಭದ್ರತೆ ಮಾಡಲಾಗುತ್ತಿದೆ. ಇದರ ಒಂದು ಭಾಗವಾಗಿ ಪಟ್ಟಣದಲ್ಲಿ ರೂಟ್ ಮಾರ್ಚ್ ನಡೆಸಲಾಗಿದೆ ಎಂದರು.
ಮೆರವಣಿಗೆ ವೇಳೆ ಸೂಕ್ತ ಬಂದೋಬಸ್ತ್ ಗಾಗಿ ಜಿಲ್ಲೆಯಿಂದ 800ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಜೊತೆಗೆ 100 ಮಂದಿ ಗೃಹರಕ್ಷಕ ದಳದ ಸಿಬ್ಬಂದಿ, 5 ಕೆಎಸ್‌ಆರ್‌ಪಿ, 8 ಡಿಎಆರ್ ತುಕಡಿ ಸೇರಿದಂತೆ 1 ಸಾವಿರಕ್ಕೂ ಹೆಚ್ಚು ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಬಂದೋಬಸ್ತ್‌ಗಾಗಿ ನಿಯೋಜಿಸಲಾಗಿದೆ ಎಂದರು.ಗಣೇಶೋತ್ಸವದಲ್ಲಿ ಯಾವುದೇ ಸಣ್ಣ ಪುಟ್ಟ ಅಹಿತಕರ ಘಟನೆಗಳು ಸಂಭವಿದಂತೆ ಕಟ್ಟೆಚ್ಚರ ವಹಿಸಲಾಗಿದೆ. ಪಟ್ಟಣ ಸೇರಿದಂತೆ ಸುತ್ತಮುತ್ತಲಿನ 10 ಕಿ.ಮೀ. ವ್ಯಾಪ್ತಿಯ ಪ್ರದೇಶದಲ್ಲಿ ಎಲ್ಲಾ ಬಗೆಯ ಮದ್ಯದಂಗಡಿಗಳನ್ನು ಬಂದ್ ಮಾಡುವಂತೆ ಆದೇಶ ಹೊರಡಿಸಲಾಗಿದೆ. ಹೆದ್ದಾರಿ ವಾಹನ ಸಂಚಾರದ ಮಾರ್ಗ ಬದಲಾವಣೆಗೆ ಸಾಕಷ್ಟು ತಯಾರಿ ಮಾಡಿಕೊಳ್ಳಲಾಗಿದೆ ಎಂದರು.
ಪಟ್ಟಣದ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಸುಮಾರು 60ಕ್ಕೂ ಹೆಚ್ಚು ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಒಂದು ಡ್ರೋನ್ ಹಾಗೂ 15 ವಿಡಿಯೋ ಕ್ಯಾಮೆರಾಗಳನ್ನು ಬಳಸಿಕೊಳ್ಳಲಾಗುತ್ತಿದೆ. ಮೆರವಣಿಗೆ ಸಾಗುವ ರಸ್ತೆ ಮತ್ತು ಸೂಕ್ಷ್ಮ ಪ್ರದೇಶಗಳಲ್ಲಿ ಬೈಲೇನ್ ಪೆಟ್ರೋಲಿಂಗ್‌ಗಾಗಿ ಹೆಚ್ಚಿನ ಅಧಿಕಾರಿ, ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಒಟ್ಟಾರೆ ವಿಜೃಂಭಣೆಯಿಂದ ನಡೆಯಲಿರುವ ಗಣೇಶೋತ್ಸವದಲ್ಲಿ ಯಾವುದೇ ಸಣ್ಣ ಪುಟ್ಟ ಅಹಿತಕರ ಘಟನೆಗಳೂ ಕೂಡ ಸಂಭವಿಸಿದಂತೆ ಪೊಲೀಸ್ ಇಲಾಖೆ ಎಲ್ಲ ರೀತಿಯಲ್ಲಿಯೂ ಸಜ್ಜಾಗಿದೆ ಎಂದರು.ಈ ವೇಳೆ ಎಎಸ್‌ಪಿ ತಿಮ್ಮಯ್ಯ, ಡಿವೈಎಸ್ಪಿಗಳಾದ ಬಿ.ಚಲುವರಾಜು, ಲಕ್ಷ್ಮೀನಾರಾಯಣ ಪ್ರಸಾದ್, ಸಿಪಿಐ ನಿರಂಜನ್, ಪಟ್ಟಣ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಶಿವಕುಮಾರ್, ಪಿಎಸ್‌ಐಗಳಾದ ವೈ.ಎನ್.ರವಿಕುಮಾರ್, ರಾಜೇಂದ್ರ, ಮಾರುತಿ ಸೇರಿದಂತೆ ಕೆಎಸ್‌ಆರ್‌ಪಿ, ಜಿಲ್ಲಾ ಶಸಸ್ತ್ರ ಮೀಸಲು ಪಡೆ ಪಥಸಂಚಲನ ನಡೆಸಿದರು.