ಸಾರಾಂಶ
ರಾಯಚೂರು: ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸುತ್ತಿದ್ದು, ಇದರ ಜೊತೆಗೆ ಜಿಲ್ಲೆಯಲ್ಲಿ ಕಳೆದ ಎರಡ್ಮೂರು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ವರದಿಯಂತೆ ಇನ್ನೂ ಒಂದು ವಾರ ಮಳೆ ಮುಂದುವರೆಯುವ ಸಾಧ್ಯತೆ ಹಿನ್ನೆಲೆ ಅಗತ್ಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ನಿತೀಶ್ ಕೆ. ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಿಲ್ಲೆಯಲ್ಲಿ ಭಾರೀ ಮಳೆ ಅಥವಾ ಪ್ರವಾಹ ಕುರಿತು ಮುಂಜಾಗ್ರತೆ ತೆಗೆದುಕೊಳ್ಳುವುದು ಅವಶ್ಯಕತೆ ಇರುತ್ತದೆ. ಆದುದರಿಂದ ರಾಯಚೂರು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜಿಲ್ಲೆಯಲ್ಲಿ ಭಾರೀ ಮಳೆ, ಪ್ರವಾಹ ಕುರಿತು ಜಿಲ್ಲಾ, ತಾಲೂಕು, ಹೋಬಳಿ ಹಾಗೂ ಗ್ರಾಪಂ ಮಟ್ಟದ ಅಧಿಕಾರಿಗಳು ಈ ಕೆಳಗಿನಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ನಿರ್ದೇಶಿಸಲಾಗಿದೆ.ಜಿಲ್ಲಾ, ತಾಲೂಕು, ಹೋಬಳಿ ಅಥವಾ ಗ್ರಾಪಂ ಮಟ್ಟದ ಅಧಿಕಾರಿ ಅಥವಾ ಸಿಬ್ಬಂದಿ ಕೇಂದ್ರ ಸ್ಥಾನದಲ್ಲಿದ್ದು ಪ್ರವಾಹ ಅಥವಾ ಭಾರಿ ಮಳೆಯಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಪ್ರಕೃತಿ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದ್ದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯ್ತಿ ಅಥವಾ ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡಬೇಕು. ಜಿಲ್ಲೆಯ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿ ಅಥವಾ ಸಿಬ್ಬಂದಿಗೆ ಪ್ರವಾಹ/ಭಾರಿ ಮಳೆಯಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಮುನ್ನೆಚ್ಚರಿಕೆಯನ್ನು ತೆಗೆದುಕೊಳ್ಳಲು ಸೂಚಿಸಲಾಗಿದ್ದು, ಈ ವಿಷಯದಲ್ಲಿ ನಿರ್ಲಕ್ಷ್ಯವಹಿಸಿದ್ದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.