ಕಾವೇರಿ ನದಿಗೆ ಹೆಚ್ಚಿನ ನೀರು ಬಿಡುಗಡೆ: ಜಿಲ್ಲಾಧಿಕಾರಿ ಡಾ.ಕುಮಾರ

| Published : Jul 23 2024, 12:33 AM IST

ಸಾರಾಂಶ

ಪ್ರಸಿದ್ಧ ಪ್ರವಾಸಿ ತಾಣ ಮುತ್ತತ್ತಿಗೆ ಸೋಮವಾರ ಸಂಜೆ ಭೇಟಿ ನೀಡಿ ಕಂದಾಯ ಇಲಾಖೆ ಮತ್ತು ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿ, ಕಳೆದ ಹಲವು ದಿನಗಳಿಂದ ಕಾವೇರಿ ನದಿ ಪಾತ್ರದಲ್ಲಿ ಉತ್ತಮ ಮಳೆಯಾಗುತ್ತಿದೆ. ನದಿಗಳು ಯಾವುದೇ ಸಮಯದಲ್ಲಾದರೂ ತುಂಬಿ ಹರಿಯಬಹುದು.

ಕನ್ನಡಪ್ರಭ ವಾರ್ತೆ ಹಲಗೂರು

ಕೃಷ್ಣರಾಜ ಸಾಗರ ಜಲಾಶಯದಿಂದ ಹೆಚ್ಚುವರಿ ನೀರು ಕಾವೇರಿ ನದಿಗೆ ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಹಲಗೂರು ಭಾಗದ ಕಾವೇರಿ ಪಾತ್ರದಲ್ಲಿ ವಾಸಿಸುತ್ತಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ಪ್ರಸಿದ್ಧ ಪ್ರವಾಸಿ ತಾಣ ಮುತ್ತತ್ತಿಗೆ ಸೋಮವಾರ ಸಂಜೆ ಭೇಟಿ ನೀಡಿ ಕಂದಾಯ ಇಲಾಖೆ ಮತ್ತು ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿ, ಕಳೆದ ಹಲವು ದಿನಗಳಿಂದ ಕಾವೇರಿ ನದಿ ಪಾತ್ರದಲ್ಲಿ ಉತ್ತಮ ಮಳೆಯಾಗುತ್ತಿದೆ. ನದಿಗಳು ಯಾವುದೇ ಸಮಯದಲ್ಲಾದರೂ ತುಂಬಿ ಹರಿಯಬಹುದು. ಮುಂದಿನ ದಿನಗಳಲ್ಲಿ ಮಳೆ ಹೀಗೆ ಮುಂದುವರಿದರೆ ಮುತ್ತತ್ತಿಯಲ್ಲಿನ ನದಿ ಪಾತ್ರದಲ್ಲಿರುವ ಹಲವು ಮನೆಗಳಿಗೆ ತೊಂದರೆ ಸಂಭವಿಸಬಹುದು ಎಂದರು.

ಕಾವೇರಿ ನದಿಯಲ್ಲಿ ಹೆಚ್ಚಿನ ನೀರು ಹರಿದರೆ ತೊಂದರೆಗೆ ಸಿಲುಕುವ ಈ ಭಾಗದ ನಿವಾಸಿಗಳನ್ನು ಸ್ಥಳಾಂತರ ಮಾಡಲು ಸಿದ್ಧತೆ ಮಾಡಿಕೊಳ್ಳಬೇಕು. ಪ್ರವಾಸಿಗರು ಕಾವೇರಿ ನದಿಗೆ ಇಳಿಯುವುದು, ಫೋಟೋ ತೆಗೆಯುವುದು ಮುಂತಾದ ಪ್ರಕ್ರಿಯೆಗಳಿಗೆ ಕೈ ಹಾಕಿ ಜೀವಕ್ಕೆ ಅಪಾಯ ತಂದುಕೊಳ್ಳಬಾರದು ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.

ಮುತ್ತತ್ತಿ ಅಂಜನೇಯ ಸ್ವಾಮಿ ದೇವಾಲಯಕ್ಕೆ ದಿನನಿತ್ಯ ಭಕ್ತಾದಿಗಳು ಆಗಮಿಸುತ್ತಿದ್ದಾರೆ. ನದಿ ದಂಡೆಯಲ್ಲಿ ಪ್ರತಿ ದಿನವೂ ಹೋಮ್ ಗಾರ್ಡ್ ಸಿಬ್ಬಂದಿ ಸೇರಿದಂತೆ ‌ಪೊಲೀಸ್‌ ಸಿಬ್ಬಂದಿ ಕಾವಲು ಇದ್ದು, ಸಾರ್ವಜನಿಕರು ಮತ್ತು ಭಕ್ತಾದಿಗಳು ಕಾವೇರಿ ನದಿಗೆ ಇಳಿಯದಂತೆ ಎಚ್ಚರಿಕೆ ವಹಿಸಬೇಕು ಎಂದರು.

ಮುಂಜಾಗ್ರತಾ ಕ್ರಮವಾಗಿ ನದಿ ದಂಡೆಯಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಬೃಹತ್‌ ಸೂಚನಾ ಫಲಕ ಅಳವಡಿಸಲು ಕ್ರಮ ವಹಿಸಬೇಕು ಎಂದು ತಾಲೂಕು ಆಡಳಿತಕ್ಕೆ ಸೂಚನೆ ನೀಡಿದರು.

ಈ ವೇಳೆ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್, ತಹಸೀಲ್ದಾರ್ ಕೆ.ಎನ್.ಲೋಕೇಶ್, ಕಾವೇರಿ ನೀರಾವರಿ ನಿಗಮದ ಕಾರ್ಯ ನಿರ್ವಾಹಕ ಎಂಜಿನಿಯರ್ ವಾಸುದೇವ, ಪಿಡಿಒ ಮಲ್ಲಿಕಾರ್ಜುನ, ರಾಜಸ್ವ ನಿರೀಕ್ಷಕ ಮಧುಸೂದನ್ ಸೇರಿದಂತೆ ಹಲವರು ಇದ್ದರು.