ಕನ್ನಡ ಪರೀಕ್ಷೆ ಬರೆಯಲು ತಾಯಿಯ ತೋಳು ಆಧಾರ !

| Published : Mar 02 2025, 01:19 AM IST

ಸಾರಾಂಶ

ಇಂದಿನಿಂದ ಆರಂಭವಾದ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಬೇಕಿದ್ದ ವಿದ್ಯಾರ್ಥಿನಿಗೆ ಶಿಕ್ಷಣ ಇಲಾಖೆ ವೀಲ್‌ ಚೇರ್‌ ಸೌಲಭ್ಯ ನೀಡದೆ ಅಸಡ್ಡೆ ತೋರಿರುವ ಘಟನೆ ಪಟ್ಟಣದಲ್ಲಿ ನಡೆದಿದೆ

ಕನ್ನಡಪ್ರಭ ವಾರ್ತೆ ಕೊರಟಗೆರೆ

ಇಂದಿನಿಂದ ಆರಂಭವಾದ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಬೇಕಿದ್ದ ವಿದ್ಯಾರ್ಥಿನಿಗೆ ಶಿಕ್ಷಣ ಇಲಾಖೆ ವೀಲ್‌ ಚೇರ್‌ ಸೌಲಭ್ಯ ನೀಡದೆ ಅಸಡ್ಡೆ ತೋರಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಪದವಿಪೂರ್ವ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು ಪರೀಕ್ಷೆಗೆಂದು ಬಂದ ವಿದ್ಯಾರ್ಥಿನಿಯನ್ನು ಆಕೆಯ ತಾಯಿಯೇ ಎತ್ತಿಕೊಂಡು ಹೋಗಿ ಕೊಠಡಿಗೆ ಬಿಟ್ಟು ಬಂದಿದ್ದಾರೆ. ಇದರಿಂದಾಗಿ ಸ್ಥಳದಲ್ಲಿದ್ದ ಕೆಲವರು ಅಧಿಕಾರಿಗಳ ಈ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿದ್ದಾರೆ. ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸುವಲ್ಲಿ ಶಿಕ್ಷಣ ಇಲಾಖೆ ಸಂಪೂರ್ಣ ವಿಫಲವಾಗಿರುವುದಕ್ಕೆ ಈ ಘಟನೆ ಸಾಕ್ಷಿಯಾಗಿದ್ದು, ವೀಲ್ ಚೇರ್ ಅಥವಾ ಪ್ರಯೋಜನಕಾರಿ ಸೌಲಭ್ಯಗಳಿಲ್ಲದೆ ಪರದಾಡುವ ಪರಿಸ್ಥಿತಿ ಇರುವುದು ಪ್ರಜ್ಞಾವಂತರ ಆಕ್ರೋಶಕ್ಕೆ ಕಾರಣವಾಗಿದೆ. ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಸೂಕ್ತ ಸೌಲಭ್ಯ ಕಲ್ಪಿಸದೆ ಅವರ ಹಕ್ಕುಗಳನ್ನು ಕಸಿದುಕೊಳ್ಳುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಜೊತೆಗೆ ಈ ರೀತಿಯ ಅನ್ಯಾಯ ಮುಂದುವರಿದರೆ, ವಿಶೇಷ ಚೇತನ ವಿದ್ಯಾರ್ಥಿಗಳ ಹಕ್ಕಿಗಾಗಿ ರಾಜ್ಯದಾದ್ಯಂತ ಹೋರಾಟ ನಡೆಯುವ ಸಾಧ್ಯತೆ ಇದೆ ಎಂದು ಕೆಲ ಸಾಮಾಜಿಕ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ. ಶಿಕ್ಷಣ ಇಲಾಖೆಯ ಅಧಿಕಾರಿಗಳು ತಕ್ಷಣ ಸ್ಪಂದಿಸಿ, ಸೂಕ್ತ ಸೌಲಭ್ಯ ಕಲ್ಪಿಸುವುದು ಅವಶ್ಯಕತೆಯಿದ್ದು ಮುಂಬರುವ ಪರೀಕ್ಷೆಗಳಿಗೆ ಎಚ್ಚರಗೊಳ್ಳುವರೇ ಎಂದು ಕಾದು ನೋಡಬೇಕಿದೆ.