ಹೊಸಪೇಟೆ: ಸ್ತನ್ಯಪಾನ ಮಾಡುವುದು ತಾಯಿ ಹಾಗೂ ಮಗುವಿನ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಬಹುಮುಖ್ಯವಾಗಿದೆ. ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಲು ಮತ್ತು ಮೆದುಳಿನ ಬೆಳವಣಿಗೆಗೆ ತಾಯಿಯ ಎದೆಹಾಲು ಅತ್ಯಗತ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ.ಲಿಂಗರಾಜು ತಿಳಿಸಿದರು.

ನಗರದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಂಟಿ ಆಶ್ರಯದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ವಿಶ್ವ ಸ್ತನ್ಯಪಾನ ಸಪ್ತಾಹಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ತಾಯಿಯ ಎದೆಹಾಲಿನಲ್ಲಿರುವ ಪ್ರೋಟೀನ್ ಮಗುವಿನ ಬುದ್ಧಿಮಟ್ಟವನ್ನು ಚುರುಕುಗೊಳಿಸುವುದಲ್ಲದೆ, ಭವಿಷ್ಯದಲ್ಲಿ ಬರುವ ದೀರ್ಘಕಾಲದ ಕಾಯಿಲೆಗಳನ್ನು ತಡೆಗಟ್ಟುತ್ತದೆ. ಎಲ್ಲಕ್ಕಿಂತ ಹೆಚ್ಚಾಗಿ ಇದು ತಾಯಿ ಮತ್ತು ಮಗುವಿನ ನಡುವಿನ ಭಾವನಾತ್ಮಕ ಬಂಧವನ್ನು ವೃದ್ಧಿಸುತ್ತದೆ. ನಿಯಮಿತವಾಗಿ ಸ್ತನ್ಯಪಾನ ಮಾಡಿಸುವುದರಿಂದ ತಾಯಿಗೂ ಸಹ ಸ್ತನ ಕ್ಯಾನ್ಸರ್‌ನಿಂದ ರಕ್ಷಣೆ ಸಿಗುತ್ತದೆ ಎಂದು ತಿಳಿಸಿದರು.

ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ಜಂಬಯ್ಯ ಮಾತನಾಡಿ, ಸುಸ್ಥಿರ ಜೀವನದ ಭದ್ರ ಅಡಿಪಾಯಕ್ಕಾಗಿ ಸ್ತನ್ಯಪಾನ ಪರಿಣಾಮಕಾರಿ ವಿಧಾನಗಳನ್ನು ಸದೃಢಗೊಳಿಸೋಣ ಎಂಬುದು ಈ ವರ್ಷದ ಆಚರಣೆಯ ಮುಖ್ಯ ಘೋಷವಾಕ್ಯದೊಂದಿಗೆ ಈ ದಿನ ವಿಶ್ವ ಸ್ತನ್ಯಪಾನ ದಿನ ಆಚರಿಸಲಾಗುತ್ತಿದೆ. ಪ್ರತಿ ವರ್ಷ ಆಗಸ್ಟ್ 1 ರಿಂದ 7 ರವರೆಗೆ ಜಾಗತಿಕ ಮಟ್ಟದಲ್ಲಿ ಸ್ತನ್ಯಪಾನ ಸಪ್ತಾಹವನ್ನು ಆಚರಿಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ವಿವಿಧ ಆರೋಗ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಹೆರಿಗೆಯಾದ ತಕ್ಷಣ ತಾಯಿಯ ಸ್ತನದಿಂದ ಬರುವ ಮೊದಲ ಹಳದಿ ಬಣ್ಣದ ಹಾಲು (ಕೊಲೋಸ್ಟ್ರೋಮ್) ಮಗುವಿಗೆ ಸಂಜೀವಿನಿಯಅತೆ ಕೆಲಸ ಮಾಡುತ್ತದೆ. ಇದು ಮಗುವಿನ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದರು.

ಮಗು ಜನಿಸಿದ ಒಂದು ಗಂಟೆಯೊಳಗೆ ಕಡ್ಡಾಯವಾಗಿ ಎದೆಹಾಲನ್ನು ನೀಡಬೇಕು. ಮೊದಲ ಆರು ತಿಂಗಳವರೆಗೆ ಮಗುವಿಗೆ ಎದೆಹಾಲನ್ನು ಹೊರತುಪಡಿಸಿ ಬೇರೆ ಯಾವುದೇ ನೀರು ಅಥವಾ ಆಹಾರವನ್ನು ನೀಡಬಾರದು. ಆರು ತಿಂಗಳ ನಂತರ ಸೂಕ್ತವಾದ ಪೂರಕ ಪೌಷ್ಟಿಕ ಆಹಾರದೊಂದಿಗೆ ಎರಡು ವರ್ಷದವರೆಗೆ ಎದೆಹಾಲು ನೀಡುವುದನ್ನು ಮುಂದುವರಿಸಬೇಕು.


ಕಾರ್ಯಕ್ರಮದಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಭಾಸ್ಕರ್, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ರಾಧಿಕಾ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಸತೀಶ್ ಚಂದ್ರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಷಣ್ಮುಖ ನಾಯ್ಕ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ. ದೊಡಮನಿ, ಆರೋಗ್ಯ ನಿರೀಕ್ಷಣಾಧಿಕಾರಿ ಧರ್ಮನಗೌಡ, ತಾಲೂಕು ಆರೋಗ್ಯಾಧಿಕಾರಿ ಡಾ. ವಿನೋದ್ ಹಾಗೂ ತಾಯಂದಿರು ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.