ಸಾರಾಂಶ
ಹೆಣ್ಣು ಮಗುವಿಗೆ ಜನ್ಮ ನೀಡಿ ಬಾಣಂತಿಯೊಬ್ಬಳು ಮೃತಪಟ್ಟ ಘಟನೆ ನಗರದ ವಂಟಮೂರಿ ತಾಯಿ ಮತ್ತು ಮಕ್ಕಳ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.
ಕನ್ನಡಪ್ರಭ ವಾರ್ತೆ ಬೆಳಗಾವಿ
ಹೆಣ್ಣು ಮಗುವಿಗೆ ಜನ್ಮ ನೀಡಿ ಬಾಣಂತಿಯೊಬ್ಬಳು ಮೃತಪಟ್ಟ ಘಟನೆ ನಗರದ ವಂಟಮೂರಿ ತಾಯಿ ಮತ್ತು ಮಕ್ಕಳ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಬಾಣಂತಿ ಕುಟುಂಬಸ್ಥರು ಆರೋಪಿಸಿದ್ದಾರೆ.ಬೆಳಗಾವಿ ನಗರದ ವಂಟಮೂರಿ ಗ್ರಾಮದ ನಿಖಿತಾ ಮಾದರ (23) ಮೃತಪಟ್ಟ ಬಾಣಂತಿ. ಶುಕ್ರವಾರ ಸಂಜೆ ಏಕಾಏಕಿ ಹೆರಿಗೆ ನೋವು ಆರಂಭವಾಗಿದ್ದರಿಂದ ವಂಟಮೂರಿಯ ತಾಯಿ ಮತ್ತು ಮಕ್ಕಳ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಅದೇ ದಿನ ರಾತ್ರಿ 8 ಗಂಟೆಗೆ ಸಿಜೇರಿಯನ್ ಮೂಲಕ ಹೆಣ್ಣು ಮಗುವಿಗೆ ಜನ್ಮ ನೀಡಿದ ಬಳಿಕ ಬಾಣಂತಿಯ ಆರೋಗ್ಯದಲ್ಲಿ ಏರುಪೇರಾಗಿ ಮೃತಪಟ್ಟಿದ್ದಾಳೆ. ವೈದ್ಯರ ನಿರ್ಲಕ್ಷ್ಯದಿಂದಲೇ ಬಾಣಂತಿ ಮೃತಪಟ್ಟಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿ ಆಸ್ಪತ್ರೆಯ ಮುಂಭಾಗದಲ್ಲಿ ನ್ಯಾಯಕ್ಕಾಗಿ ಹಸುಗೂಸು ಸಮೇತ ಧರಣಿ ನಡೆಸಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ವಿಚಾರಣೆ ನಡೆಸಿದ್ದಾರೆ.