ಸಾರಾಂಶ
ಸಾರ್ವಜನಿಕ ಉದ್ಯಮಗಳ ಸಮಿತಿ, ಗೃಹ ಇಲಾಖೆ ಸಂಬಂಧಿತ ಸ್ಥಾಯಿ ಸಮಿತಿಗೆ ನೇಮಕವಾಗಿರುವ ಸಂಸದ ಬಿ.ವೈ.ರಾಘವೇಂದ್ರ ಅವರನ್ನು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಕೇಂದ್ರ ಸರ್ಕಾರದ ಸಂಸದೀಯ ಸಂಸ್ಥೆಗಳಾದ ಸಾರ್ವಜನಿಕ ಉದ್ಯಮಗಳ ಸಮಿತಿ, ಗೃಹ ಇಲಾಖೆ ಸಂಬಂಧಿತ ಸ್ಥಾಯಿ ಸಮಿತಿಗೆ ನೇಮಕವಾಗಿರುವ ಸಂಸದ ಬಿ.ವೈ.ರಾಘವೇಂದ್ರ ಅವರನ್ನು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಸೇರಿದಂತೆ ಪದಾಧಿಕಾರಿಗಳು ಅಭಿನಂದಿಸಿದರು.ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯ ಕುರಿತು ವಿವಿಧ ವಿಷಯಗಳು, ಅಭಿವೃದ್ಧಿ ಯೋಜನೆಗಳ ಬಗ್ಗೆ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರ ಶಿವಮೊಗ್ಗ ನಿವಾಸದಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ಸಮಾಲೋಚನೆ ನಡೆಸಿದರು.
ಬಿ.ವೈ.ರಾಘವೇಂದ್ರ ಮಾತನಾಡಿ, ಶಿವಮೊಗ್ಗ ಲೋಸಕಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕೆಲಸಗಳು ವೇಗಗತಿಯಲ್ಲಿ ಸಾಗುತ್ತಿದ್ದು, ಪ್ರಮುಖ ಯೋಜನೆಗಳನ್ನು ತರುವಲ್ಲಿ ಸಂಪೂರ್ಣ ಪ್ರಯತ್ನ ನಡೆಸಲಾಗುತ್ತಿದೆ. ಸಂಪರ್ಕ ಕ್ಷೇತ್ರದಲ್ಲಿ ದೊಡ್ಡ ಯೋಜನೆಗಳು ಅನುಷ್ಠಾನಗೊಂಡಿವೆ ಎಂದು ತಿಳಿಸಿದರು.ಪ್ರವಾಸೋದ್ಯಮ ಹಾಗೂ ಜಿಲ್ಲೆಯ ವಾಣಿಜ್ಯ ಮತ್ತು ಕೈಗಾರಿಕಾ ಉದ್ಯಮಿಗಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಆಯೋಜಿಸಲಿರುವ ಶಿವಮೊಗ್ಗ ಹಬ್ಬ ಯಶಸ್ವಿ ಯಾಗಲಿ ಎಂದು ಹಾರೈಸಿದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಮಾತನಾಡಿ, ರಾಘವೇಂದ್ರ ಅವರು ಲೋಕಸಭಾ ಸದಸ್ಯರಾದ ಮೇಲೆ ಶಿವಮೊಗ್ಗ ಜಿಲ್ಲೆಯಲ್ಲಿ ಮಹತ್ತರ ಬದಲಾವಣೆ ಆಗಿ ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿದೆ. 2025ರ ಹೊಸ ಕೈಗಾರಿಕಾ ನೀತಿಯಲ್ಲಿ ಕೈಗಾರಿಕೋದ್ಯಮಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ನಿಯಮಗಳನ್ನು ರೂಪಿಸಬೇಕು ಎಂದು ತಿಳಿಸಿದರು.ಶಿವಮೊಗ್ಗ ಹಬ್ಬ ಆಯೋಜಿಸಲು ಅಗತ್ಯ ಚರ್ಚೆ ನಡೆಸುತ್ತಿದ್ದು, ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದಿಂದ ಕಾರ್ಯಕ್ರಮ ರೂಪಿಸಲಾಗುವುದು ಎಂದರು. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಖಜಾಂಚಿ ಆರ್.ಮನೋಹರ್ ಉಪಸ್ಥಿತರಿದ್ದರು.