ಗದಗ-ಯಲವಿಗಿ ಯೋಜನೆ ಶೀಘ್ರ ಆರಂಭಿಸಲು ಸಂಸದ ಬೊಮ್ಮಾಯಿ ಮನವಿ

| Published : Aug 12 2025, 12:30 AM IST

ಗದಗ-ಯಲವಿಗಿ ಯೋಜನೆ ಶೀಘ್ರ ಆರಂಭಿಸಲು ಸಂಸದ ಬೊಮ್ಮಾಯಿ ಮನವಿ
Share this Article
  • FB
  • TW
  • Linkdin
  • Email

ಸಾರಾಂಶ

ಗದಗ ಯಲವಿಗಿ ರೈಲು ಯೋಜನೆಯನ್ನು ಆದಷ್ಟು ಬೇಗ ಪ್ರಾರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮಾಜಿ ಮುಖ್ಯಮಂತ್ರಿ, ಹಾವೇರಿ-ಗದಗ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು.

ಗದಗ: ಗದಗ ಯಲವಿಗಿ ರೈಲು ಯೋಜನೆಯನ್ನು ಆದಷ್ಟು ಬೇಗ ಪ್ರಾರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮಾಜಿ ಮುಖ್ಯಮಂತ್ರಿ, ಹಾವೇರಿ-ಗದಗ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು.

ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿರುವ ಅವರು, ಗದಗ-ಯಲವಿಗಿ ರೈಲ್ವೆ ಯೋಜನೆ ಹಾವೇರಿ ಗದಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿದ್ದು, 58 ಕಿ.ಮೀ. ಉದ್ದದ ಈ ಯೋಜನೆಗೆ 2017-18ರಲ್ಲಿ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಈ ಯೋಜನೆ ಗದಗ-ಹಾವೇರಿ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಅಷ್ಟೇ ಅಲ್ಲದೇ ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಸಂಪರ್ಕ ಕಲ್ಪಿಸುವುದರಿಂದ ಉತ್ತರ ಕರ್ನಾಟಕ ಭಾಗದಲ್ಲಿ ಪ್ರಯಾಣಿಕರ ಸಂಚಾರ ಹಾಗೂ ಸರಕು ಸಾಗಾಣಿಕೆಗೆ ಅನುಕೂಲವಾಗುವುದರಿಂದ ಕರ್ನಾಟಕದ ಆರ್ಥಿಕ ಚಟುವಟಿಕೆಗಳನ್ನು ಮೇಲ್ದರ್ಜೆಗೇರಿಸಲು ಸಹಾಯವಾಗುತ್ತದೆ.

ಈ ಯೋಜನೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು 50,50 ಅನುಪಾತದಲ್ಲಿ ಹಣಕಾಸು ಒದಗಿಸುತ್ತಿದ್ದು, ಯೋಜನೆಗೆ ಅಗತ್ಯವಿರುವ ಭೂಮಿಯನ್ನು ರಾಜ್ಯ ಸರ್ಕಾರ ಒದಗಿಸಲಿದೆ. ಕರ್ನಾಟಕ ಸರ್ಕಾರ ಈಗಾಗಲೇ ತನ್ನ ಆದೇಶ ನಂ ಐಡಿಡಿ/91/ಎನ್‌ಎಸ್‌ಡಬ್ಲ್ಯು/2022 ರಲ್ಲಿ ದಿನಾಂಕ 18-04-2022 ರಂದು (ನಾನು ಮುಖ್ಯಮಂತ್ರಿ ಇದ್ದಾಗ) ಯೋಜನೆಯ ಶೇ 50ರಷ್ಟು ಯೋಜನಾ ವೆಚ್ಚವನ್ನು ಹಾಗೂ ಉಚಿತ ಭೂಮಿ ಕೊಡುವುದಾಗಿ ತಿಳಿಸಲಾಗಿದೆ. 17-12-2022 ರಂದು ಪರಿಷ್ಕೃತ ಎಫ್‌ಎಸ್ಎಲ್ ಅಂದಾಜು 1.45 ಕೋಟಿ ವೆಚ್ಚದ ಟೆಂಡರ್ ಕರೆಯಲಾಗಿದ್ದು, ಸರ್ವೆ ಕಾರ್ಯ ಮುಕ್ತಾಯವಾಗಿದೆ. ಆಗಸ್ಟ್ 2025ರ ಅಂತ್ಯದೊಳಗೆ ಪರಿಷ್ಕೃತ ಡಿಪಿಆರ್ ಸಿದ್ಧವಾಗಲಿದೆ. ಆದ್ದರಿಂದ ಕರ್ನಾಟಕ ರಾಜ್ಯ ಸರ್ಕಾರದೊಂದಿಗೆ ತಕ್ಷಣವೇ ಸಮನ್ವಯ ಸಾಧಿಸಿ ಡಿಪಿಆರ್ ಪಡೆಯುವಂತೆ ನೈರುತ್ಯ ರೈಲ್ವೆ ವಲಯ ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು.

ಈ ಯೋಜನೆಯ ಮೊದಲ ಹಂತದ ಯೋಜನಾ ವೆಚ್ಚ 650 ಕೋಟಿಗಳನ್ನು ಬಿಡುಗಡೆ ಮಾಡಲು ಅಗತ್ಯ ಕ್ರಮ ಕೈಗೊಂಡು, ಅದೇ ಸಮಯದಲ್ಲಿ ಕರ್ನಾಟಕ ಸರ್ಕಾರದ ಅಧಿಕಾರಿಗಳು ಭೂಸ್ವಾಧೀನ ಪ್ರಕ್ರಿಯೆಯನ್ನೂ ಕೈಗೊಂಡು ಪ್ರಸ್ತುತ 2025-26 ನೇ ಆರ್ಥಿಕ ವರ್ಷದಲ್ಲಿ ಯೋಜನೆ ಕಾರ್ಯಾರಂಭವಾಗುವಂತೆ ನೋಡಿಕೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.