ಮಾಜಿ ಮುಖ್ಯಮಂತ್ರಿ ಹಾಗೂ ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಅವರು ಶನಿವಾರ ಗೋಕಾಕಕ್ಕೆ ಭೇಟಿ ನೀಡಿ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಅವರೊಂದಿಗೆ ಸಮಾಲೋಚನೆ ನಡೆಸಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಕನ್ನಡಪ್ರಭ ವಾರ್ತೆ ಗೋಕಾಕ

ಮಾಜಿ ಮುಖ್ಯಮಂತ್ರಿ ಹಾಗೂ ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಅವರು ಶನಿವಾರ ಗೋಕಾಕಕ್ಕೆ ಭೇಟಿ ನೀಡಿ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಅವರೊಂದಿಗೆ ಸಮಾಲೋಚನೆ ನಡೆಸಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಅವರ ನಿವಾಸಕ್ಕೆ ಭೇಟಿ ಕೊಟ್ಟ ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರು ಸುಮಾರು ಒಂದು ಗಂಟೆ ಕಾಲ ವಿವಿಧ ವಿಚಾರಗಳ ಕುರಿತು ಚರ್ಚೆ ನಡೆಸಿದರು. ಪ್ರಸಕ್ತ ರಾಜಕೀಯ ವಿದ್ಯಮಾನಗಳು, ಗೋಕಾಕ ವಿಧಾನಸಭಾ ಕ್ಷೇತ್ರದ ರಾಜಕೀಯ ಬೆಳವಣಿಗೆಗಳು ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದ ಹಲವು ವಿಷಯಗಳ ಕುರಿತು ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರೊಂದಿಗೆ ಜಗದೀಶ ಶೆಟ್ಟರ್ ಅವರ ಭೇಟಿ ಸಾಮಾನ್ಯವೆನಿಸಿದರೂ, ಪಕ್ಷೇತರ ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಅವರ ಸ್ವಗೃಹಕ್ಕೆ ಶೆಟ್ಟರ್ ಭೇಟಿ ನೀಡಿರುವುದು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಈ ಹಿಂದೆ ಲಖನ್ ಜಾರಕಿಹೊಳಿ ಅವರು ಕಾಂಗ್ರೆಸ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಒಲವು ವ್ಯಕ್ತಪಡಿಸಿದ್ದು, ಸಿದ್ದರಾಮಯ್ಯ ಅವರನ್ನು ತಮ್ಮ ರಾಜಕೀಯ ಗುರು ಎಂದು ಹಲವು ಬಾರಿ ಹೇಳಿದ್ದರು.

ಇದೀಗ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಬೆಂಬಲಿಸುತ್ತ ಬಂದಿರುವ ಲಖನ್ ಜಾರಕಿಹೊಳಿ ಅವರು ತಮ್ಮ ಸಹೋದರ ರಮೇಶ್ ಜಾರಕಿಹೊಳಿ ಅವರೊಂದಿಗೆ ಬಿಜೆಪಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ ಶೆಟ್ಟರ್ ಅವರೊಂದಿಗೆ ಚರ್ಚೆ ನಡೆಸಿರುವುದು ಹಲವು ರಾಜಕೀಯ ಲೆಕ್ಕಾಚಾರಗಳಿಗೆ ಕಾರಣವಾಗಿದೆ. ಶೆಟ್ಟರ್ ಭೇಟಿ ವೇಳೆ ಡಿಸಿಸಿ ಬ್ಯಾಂಕ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಉಪಸ್ಥಿತರಿದ್ದರು.