ಸಾಣೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾಣೂರು ಸೇತುವೆ ಸಮೀಪ ರಾಷ್ಟ್ರೀಯ ಹೆದ್ದಾರಿ 169ರ ಬದಿಯಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದ ಪರಿಣಾಮ ಕಳೆದ ಮೂರು ವರ್ಷಗಳಿಂದ ಮಳೆ ನೀರು ಮನೆಗಳಿಗೆ ನುಗ್ಗಿ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿತ್ತು.
ಕಾರ್ಕಳ: ಸಾಣೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾಣೂರು ಸೇತುವೆ ಸಮೀಪ ರಾಷ್ಟ್ರೀಯ ಹೆದ್ದಾರಿ 169ರ ಬದಿಯಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದ ಪರಿಣಾಮ ಕಳೆದ ಮೂರು ವರ್ಷಗಳಿಂದ ಮಳೆ ನೀರು ಮನೆಗಳಿಗೆ ನುಗ್ಗಿ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿತ್ತು.
ಸ್ಥಳೀಯ ನಿವಾಸಿ ಮೋಹನ್ ಶೆಟ್ಟಿ ಅವರ ಮನೆ ಅಂಗಳಕ್ಕೂ ನೀರು ನುಗ್ಗಿ ಹಾನಿ ಸಂಭವಿಸಿದ್ದ ಹಿನ್ನೆಲೆಯಲ್ಲಿ ಅವರು ವಿಡಿಯೋ ಮೂಲಕ ಸಮಸ್ಯೆಯನ್ನು ಸಂಸದರು, ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣದ ಗಮನಕ್ಕೆ ತಂದಿದ್ದರು.ಸಂಸದರ ಸೂಚನೆಯಂತೆ ಹೆದ್ದಾರಿ ಇಲಾಖೆ ಹಾಗೂ ಗುತ್ತಿಗೆದಾರರು ತುರ್ತು ಕ್ರಮ ಕೈಗೊಂಡು ಜೆಸಿಬಿ ಮೂಲಕ ಸುಮಾರು ಅರ್ಧ ಕಿಲೋಮೀಟರ್ ಉದ್ದದ ಚರಂಡಿ ನಿರ್ಮಿಸಿ ಮಳೆ ನೀರು ಶಾಂಭವಿ ನದಿ ಸೇತುವೆ ಕಡೆ ಹರಿದು ಹೋಗುವಂತೆ ವ್ಯವಸ್ಥೆ ಮಾಡಿದರು. ಜೊತೆಗೆ ಮನೆಗಳಿಗೆ ವಾಹನ ಸಂಚಾರಕ್ಕೆ ಅನುಕೂಲವಾಗುವಂತೆ ಕಾಂಕ್ರೀಟ್ ಸ್ಲ್ಯಾಬ್ ಅಳವಡಿಸುವ ಭರವಸೆ ನೀಡಿದ್ದಾರೆ.ಸಾರ್ವಜನಿಕ ಸಮಸ್ಯೆಗೆ ತ್ವರಿತ ಸ್ಪಂದನೆ ನೀಡಿದ ಸಂಸದರು, ಅಧಿಕಾರಿಗಳು, ಮಾಧ್ಯಮಗಳು ಹಾಗೂ ಕಾಮಗಾರಿ ನಡೆಸಿದ ಇಲಾಖೆ ಮತ್ತು ಗುತ್ತಿಗೆದಾರರಿಗೆ ಹೆದ್ದಾರಿ ಹೋರಾಟ ಸಮಿತಿ ಪ್ರಮುಖ ಸಾಣೂರು ನರಸಿಂಹ ಕಾಮತ್ ಕೃತಜ್ಞತೆ ಸಲ್ಲಿಸಿದ್ದಾರೆ.
