ಡಾ.ಅಂಬೇಡ್ಕರ್ ಅವರ ದೂರದೃಷ್ಟಿಯ ಫಲವಾಗಿ ದೇಶಕ್ಕೆ ಶ್ರೇಷ್ಠ ಸಂವಿಧಾನ ದೊರೆತಿದ್ದು, ಪ್ರತಿಯೊಬ್ಬರಿಗೂ ಸಮಾನ ಹಕ್ಕು ಹಾಗೂ ಅವಕಾಶಗಳು ಲಭಿಸಿವೆ ಎಂದರು. ಸಂವಿಧಾನವನ್ನು ಓದಿ ಅದರ ಆಶಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದೇ ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಸಲ್ಲಿಸುವ ನಿಜವಾದ ಗೌರವ. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಸಮಾಜಕ್ಕೆ ಆಸ್ತಿಯಾಗಬೇಕು ಜೊತೆಗೆ ವಿದ್ಯಾರ್ಥಿಗಳು ಸಂವಿಧಾನದ ಆಶಯಗಳನ್ನು ಅರಿತು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಕನ್ನಡಪ್ರಭ ವಾರ್ತೆ ಸಕಲೇಶಪುರ
ಶಿಕ್ಷಣದ ಮೂಲಕ ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದವರೂ ಸಾಧನೆ ಮಾಡಲು ಸಾಧ್ಯ ಎಂಬುದನ್ನು ಡಾ.ಬಿ.ಆರ್. ಅಂಬೇಡ್ಕರ್ ಅವರು ತೋರಿಸಿಕೊಟ್ಟಿದ್ದಾರೆ ಎಂದು ಹಾಸನ ಲೋಕಸಭಾ ಕ್ಷೇತ್ರದ ಸಂಸದ ಶ್ರೇಯಸ್ ಪಟೇಲ್ ಹೇಳಿದರು.ಪಟ್ಟಣದ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಶನಿವಾರ ಸಕಲೇಶಪುರ ತಾಲೂಕು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಯೋಜಿಸಿದ್ದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ರಾಜ್ಯ ಸರ್ಕಾರಿ ನೌಕರರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಶಿಕ್ಷಣದಿಂದ ವ್ಯಕ್ತಿಯ ಜೀವನದಲ್ಲಿ ಬದಲಾವಣೆ ಹಾಗೂ ಸಮಾಜದಲ್ಲಿ ಗೌರವ ದೊರೆಯುತ್ತದೆ. ಡಾ.ಅಂಬೇಡ್ಕರ್ ಅವರ ದೂರದೃಷ್ಟಿಯ ಫಲವಾಗಿ ದೇಶಕ್ಕೆ ಶ್ರೇಷ್ಠ ಸಂವಿಧಾನ ದೊರೆತಿದ್ದು, ಪ್ರತಿಯೊಬ್ಬರಿಗೂ ಸಮಾನ ಹಕ್ಕು ಹಾಗೂ ಅವಕಾಶಗಳು ಲಭಿಸಿವೆ ಎಂದರು. ಸಂವಿಧಾನವನ್ನು ಓದಿ ಅದರ ಆಶಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದೇ ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಸಲ್ಲಿಸುವ ನಿಜವಾದ ಗೌರವ. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಸಮಾಜಕ್ಕೆ ಆಸ್ತಿಯಾಗಬೇಕು ಜೊತೆಗೆ ವಿದ್ಯಾರ್ಥಿಗಳು ಸಂವಿಧಾನದ ಆಶಯಗಳನ್ನು ಅರಿತು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಶಾಸಕ ಸಿಮೆಂಟ್ ಮಂಜು ಮಾತನಾಡಿ, ಇಂದು ತಮ್ಮನ್ನು ಒಳಗೊಂಡಂತೆ ಅನೇಕ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಲು ಡಾ.ಬಿ. ಆರ್. ಅಂಬೇಡ್ಕರ್ ಅವರ ಕೊಡುಗೆ ಪ್ರಮುಖ ಕಾರಣವಾಗಿದೆ. ಶಿಕ್ಷಣ, ಉದ್ಯೋಗ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಅವಕಾಶ ಕಲ್ಪಿಸುವ ಮೂಲಕ ಸಮಾಜದ ಎಲ್ಲ ವರ್ಗಗಳಿಗೂ ಸಮಾನ ಹಕ್ಕು ದೊರಕಿಸಿಕೊಟ್ಟಿದ್ದಾರೆ ಎಂದರು. ಅಂಬೇಡ್ಕರ್ ಅವರು ಶಿಕ್ಷಣಕ್ಕೆ ನೀಡಿದ ಮಹತ್ವವನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ಸರ್ಕಾರದ ಹಾಸ್ಟೆಲ್, ವಿದ್ಯಾರ್ಥಿವೇತನ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಬಳಸಿಕೊಂಡು ಉತ್ತಮವಾಗಿ ವ್ಯಾಸಂಗ ಮಾಡಿ ಐಎಎಸ್, ಕೆಎಎಸ್ ಸೇರಿದಂತೆ ಉನ್ನತ ಹುದ್ದೆಗಳನ್ನು ಅಲಂಕರಿಸುವ ಗುರಿ ಹೊಂದಬೇಕು ಎಂದು ಸಲಹೆ ನೀಡಿದರು.ಮಾಜಿ ಸಚಿವ ಎಚ್.ಕೆ. ಕುಮಾರಸ್ವಾಮಿ ಮಾತನಾಡಿ, ಸಮುದಾಯದ ಸರ್ಕಾರಿ ನೌಕರರು ಒಗ್ಗೂಡಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ. ಸಂಘಟನೆಯ ಮೂಲಕ ಸಮಾಜದ ಯುವಜನರ ಸಾಧನೆಗೆ ಉತ್ತೇಜನ ನೀಡುವ ಇಂತಹ ಕಾರ್ಯಕ್ರಮಗಳು ಮಾದರಿಯಾಗಬೇಕು ಎಂದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಶಿವಶಂಕರ್ ಮಾತನಾಡಿ, ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಹೂವು ಹಾಕುವುದಕ್ಕೆ ಮಾತ್ರ ಸೀಮಿತವಾಗದೆ ಅವರ ವಿಚಾರಧಾರೆ ಹಾಗೂ ಕೃತಿಗಳನ್ನು ಓದಿ ಅರ್ಥೈಸಿಕೊಳ್ಳಬೇಕು. ಕೇವಲ ಅಕ್ಷರಸ್ಥರಾಗುವುದಕ್ಕಿಂತ ವಿಚಾರವಂತರಾಗಿ, ಪ್ರಶ್ನಿಸುವ ಹಾಗೂ ವಿಮರ್ಶಾತ್ಮಕವಾಗಿ ಚಿಂತಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮುರಳಿ ಮೋಹನ್ ಮಾತನಾಡಿ, ವಿದ್ಯಾರ್ಥಿಗಳು ಬಾಬಾಸಾಹೇಬ್ ಅಂಬೇಡ್ಕರ್ ಅವರ ಆದರ್ಶ ಹಾಗೂ ಸಂವಿಧಾನದ ಆಶಯಗಳನ್ನು ಅರಿತು ಸಮಾಜದ ಏಳಿಗೆಗೆ ತಮ್ಮದೇ ಆದ ಕೊಡುಗೆ ನೀಡಬೇಕು. ಶಿಕ್ಷಣದ ಜೊತೆಗೆ ಸಾಮಾಜಿಕ ಜವಾಬ್ದಾರಿಯನ್ನೂ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ 300ಕ್ಕೂ ಹೆಚ್ಚು ನಿವೃತ್ತ ಸರ್ಕಾರಿ ನೌಕರರು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.ವೇದಿಕೆಯಲ್ಲಿ ಮೈಸೂರು ಅಕ್ಕ ಅಕಾಡೆಮಿಯ ಶಿವಕುಮಾರ್, ಡಿಎಫ್‌ಒ ಕ್ರಾಂತಿ, ವಾಣಿಜ್ಯ ಇಲಾಖೆ ಅಧಿಕಾರಿ ಕರುಣಾಕರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ್, ಹೆತ್ತೂರು ಅಣ್ಣಯ್ಯ, ಶಿವಮ್ಮ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಾಂತರಾಜ್, ಎಸ್‌ಸಿ–ಎಸ್‌ಟಿ ಘಟಕದ ತಾಲೂಕು ಅಧ್ಯಕ್ಷ ಮಹೇಶ್, ನಿರ್ದೇಶಕ ಪೃಥ್ವಿ, ಪದಾಧಿಕಾರಿಗಳಾದ ಡಿ.ಪಿ. ರಮೇಶ್, ಕೆಂಚಯ್ಯ ಹಾಗೂ ನಿಂಗಯ್ಯ, ಕೀರ್ತಿ, ಉಪಸ್ಥಿತರಿದ್ದರು.
======ಫೋಟೋ:
ಕಾರ್ಯಕ್ರಮದಲ್ಲಿ 300ಕ್ಕೂ ಹೆಚ್ಚು ನಿವೃತ್ತ ಸರ್ಕಾರಿ ನೌಕರರು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.