ಸಾರಾಂಶ
ಬಾಗೂರು ಹೋಬಳಿಯ ದಡ್ಡಿಹಳ್ಳಿ ಕೆರೆ ಸಂಪೂರ್ಣ ತುಂಬಿ ಕೋಡಿ ಬಿದ್ದ ಹಿನ್ನೆಲೆಯಲ್ಲಿ ಸಂಸದ ಶ್ರೇಯಸ್ ಪಟೇಲ್ ಶುಕ್ರವಾರ ಗಂಗೆಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು.
ಕನ್ನಡಪ್ರಭ ವಾರ್ತೆ ಬಾಗೂರು
ಹೋಬಳಿಯ ದಡ್ಡಿಹಳ್ಳಿ ಕೆರೆ ಸಂಪೂರ್ಣ ತುಂಬಿ ಕೋಡಿ ಬಿದ್ದ ಹಿನ್ನೆಲೆಯಲ್ಲಿ ಸಂಸದ ಶ್ರೇಯಸ್ ಪಟೇಲ್ ಶುಕ್ರವಾರ ಗಂಗೆಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು.ಬಾಗೂರು ಏತ ನೀರಾವರಿ ಯೋಜನೆ ಮೂಲಕ ದಡ್ಡಿಹಳ್ಳಿ ಕೆರೆಗೆ ನೀರು ಹರಿಸಿ ತುಂಬಿಸಲಾಗಿತ್ತು. ಗ್ರಾಮಸ್ಥರೊಂದಿಗೆ ಗಂಗೆ ಪೂಜೆ ನಡೆಸಿ ಬಾಗಿನ ಅರ್ಪಿಸಿ ಮಾತನಾಡಿ, ಜಿಲ್ಲೆಯ ಅರಸೀಕೆರೆ, ಹೊಳೆನರಸೀಪುರ, ಚನ್ನರಾಯಪಟ್ಟಣ ತಾಲೂಕುಗಳಲ್ಲಿ ನಿರೀಕ್ಷೆಯಷ್ಟು ಮಳೆಯಾಗದೆ ರೈತರು ಆತಂಕಕ್ಕೆ ಒಳಗಾಗಿದ್ದರು. ಆದರೆ ಕಳೆದ ತಿಂಗಳಿನಿಂದ ಈ ತಾಲೂಕುಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಇದರಿಂದ ಅನೇಕ ಕೆರೆಗಳು ತುಂಬಿವೆ ಎಂದರು.
ಚನ್ನರಾಯಪಟ್ಟಣ ತಾಲೂಕಿನ ಕಲ್ಲೇ ಸೋಮನಹಳ್ಳಿ ತೋಟಿ ಏತ ನೀರಾವರಿ ಯೋಜನೆ ಸೇರಿದಂತೆ ವಿವಿಧ ನೀರಾವರಿ ಯೋಜನೆಗಳಿಗೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹೆಚ್ಚಿನ ಅನುದಾನ ನೀಡಲಾಗಿದೆ. ಮುಂಬರುವ ದಿನಗಳಲ್ಲೂ ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ತಮ್ಮ ಸಂಸದರ ನಿಧಿಯಿಂದಲೂ ಹೆಚ್ಚಿನ ಅನುದಾನ ನೀಡುವುದಾಗಿ ಭರವಸೆ ನೀಡಿದರು.ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಎ.ಗೋಪಾಲಸ್ವಾಮಿ ಮಾತನಾಡಿ, ದೇವರ ದಯೆಯಿಂದ ತಾಲೂಕಿನಲ್ಲಿ ಉತ್ತಮ ಮಳೆಯಾಗುತ್ತಿದೆ. ತಾವು ನೀರಾವರಿ ಇಲಾಖೆಯ ಸಂಸದೀಯ ಕಾರ್ಯದರ್ಶಿಯಾಗಿದ್ದ ಸಂದರ್ಭದಲ್ಲಿ ತಾಲೂಕಿನ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ತರುವಲ್ಲಿ ಶ್ರಮ ವಹಿಸಿರುವುದಾಗಿ ತಿಳಿಸಿದರು.
ಮಾಜಿ ಶಾಸಕ ಸಿ.ಎಸ್.ಪುಟ್ಟೇಗೌಡ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಎಂ.ಶಂಕರ್, ಯುವ ಕಾಂಗ್ರೆಸ್ ಮುಖಂಡ ಯುವರಾಜ್, ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ಸೌಮ್ಯ ಚಂದ್ರೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ ಹಾಜರಿದ್ದರು.