ಸಾರಾಂಶ
ಕನ್ನಡಪ್ರಭ ವಾರ್ತೆ ಹಾಸನ
ಜಿಲ್ಲೆಯಲ್ಲಿ ಡೆಂಘೀ ಜ್ವರ ನಿಯಂತ್ರಿಸಲು ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಆಶಾ ಕಾರ್ಯಕರ್ತೆಯರು ಜೊತೆಗೆ ಸಾರ್ವಜನಿಕರ ಸಹಕಾರದಲ್ಲಿ ಜಾಗೃತಿ ಮೂಡಿಸಬೇಕು. ಈ ನಿಟ್ಟಿನಲ್ಲಿ ಕೂಡಲೇ ಸಹಾಯವಾಣಿ ತೆರೆಯುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸಂಸದ ಶ್ರೇಯಸ್ ಎಂ. ಪಟೇಲ್ ಸೂಚಿಸಿದರು. ನಗರದ ಸಾಲಗಾಮೆ ರಸ್ತೆ ಬಳಿ ಇರುವ ಜಿಲ್ಲಾ ಆರೋಗ್ಯ ಇಲಾಖೆ ಸಭಾಂಗಣದಲ್ಲಿ ಡೆಂಘೀ ಪ್ರಕರಣದ ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳಲು ಗುರುವಾರ ಕರೆಯಲಾಗಿದ್ದ ತುರ್ತು ಸಭೆಯಲ್ಲಿ ಮೊದಲು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಡೆಂಘೀ ಬಗ್ಗೆ ಮಾಹಿತಿ ಪಡೆದುಕೊಂಡ ಸಂಸದರು ಪಾಲ್ಗೊಂಡು ಕೆಲ ಸಲಹೆಯನ್ನು ನೀಡಿದ ಅವರು, ನಂತರ ಮಾಧ್ಯಮದೊಂದಿಗೆ ಮಾತನಾಡಿ, ಡೆಂಘೀ ಜ್ವರ ನಿಯಂತ್ರಣಕ್ಕೆ ಜಿಲ್ಲಾಸ್ಪತ್ರೆಯಲ್ಲಿ ಇರುವ ಸೌಲಭ್ಯಗಳನ್ನು ಬಳಸಿಕೊಂಡು ಗುಣಮಟ್ಟದ ಚಿಕಿತ್ಸೆ ನೀಡಲು ಈಗಾಗಲೇ ಸೂಚನೆ ನೀಡಲಾಗಿದೆ. ಡೆಂಘೀ ಕಾಯಿಲೆಯಿಂದ ಯಾರು ಸಾವನಪ್ಪಬಾರದು ಎಂಬುದು ನಮ್ಮ ಉದ್ದೇಶವಾಗಿದೆ ಹಾಗೂ ಜಿಲ್ಲೆಯಲ್ಲಿ ಡೆಂಘೀ ನಿಯಂತ್ರಣಕ್ಕೆ ಅತೀ ಶೀಘ್ರವಾಗಿ ಸಹಾಯವಾಣಿ ತೆರೆದು, ಅಗತ್ಯ ಮುಂಜಾಗ್ರತಾ ಕ್ರಮ ವಹಿಸುವಂತೆ ಎಂದರು. ಜಿಲ್ಲೆಯ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲೂ ಡೆಂಘೀ ಪರೀಕ್ಷೆ ಹಾಗೂ ಚಿಕಿತ್ಸೆಗೆ ಅಗತ್ಯ ಇರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಸೂಚನೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆ ಅಗತ್ಯ ಬಿದ್ದರೆ ಶೀಘ್ರವಾಗಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲು ಸೂಚನೆ ನೀಡಲಾಗಿದೆ.ಜಿಲ್ಲೆಯಲ್ಲಿ ಡೆಂಘೀನಿಂದ ಇಬ್ಬರು ಸಾವನ್ನಪ್ಪಿರುವುದು ಬೇಸರದ ಸಂಗತಿ, ಮುಂದಿನ ದಿನಗಳಲ್ಲಿ ಡೆಂಘೀನಿಂದ ಸಾವು ಸಂಭವಿಸದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದು. ವೈದ್ಯರು ಹಾಗೂ ಸಿಬ್ಬಂದಿ ಕೊರತೆ ಇದ್ದಲ್ಲಿ ಇಲಾಖೆಯಿಂದ ಮಾಹಿತಿ ಪಡೆದು ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು. ಖಾಸಗಿ ಆಸ್ಪತ್ರೆಗಳಲ್ಲಿ ಡೆಂಘೀ ಪರೀಕ್ಷೆಗೆ ಈಗಾಗಲೇ ಸರಕಾರ ೩೦೦ ರುಪಾಯಿಗಳ ಸಹಾಯಧನ ನಿಗದಿ ಮಾಡಿದ್ದು, ಮನಬಂದಂತೆ ಹಣ ವಸೂಲಿ ಮಾಡುವ ಪ್ರಕರಣಗಳು ಕಂಡು ಬಂದರೆ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು. ಸರ್ಕಾರದ ನಿಯಮಾನುಸಾರ ಶುಲ್ಕ ಪಡೆಯಬೇಕು. ಜೊತೆಗೆ ವಿಮಾ ಯೋಜನೆಗಳನ್ನು ಅಳವಡಿಸಬಹುದಾದಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಅವುಗಳನ್ನು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಸಾರ್ವಜನಿಕರು ಕೂಡ ಡೆಂಘೀ ನಿಯಂತ್ರಣಕ್ಕೆ ಸಹಕಾರ ನೀಡಬೇಕು ತಮ್ಮ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ಮಕ್ಕಳ ಆರೋಗ್ಯದ ಬಗ್ಗೆ ನಿಗಾ ವಹಿಸಿ ಜ್ವರ, ಹಾಗೂ ಶೀತದಂತಹ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕು ಎಂದು ಹೇಳಿದರು.ಹಾಸನ ಜಿಲ್ಲೆಯಲ್ಲಿ ಡೆಂಘೀ ಸೋಂಕಿಗೆ ಒಂದೇ ವಾರದಲ್ಲಿ ಮೂವರು ಮಕ್ಕಳು ಬಲಿಯಾದ ಆಸ್ಪತ್ರೆ ಅಧಿಕಾರಿಗಳ ದಿಢೀರ್ ಸಭೆ ನಡೆಸಿ ಚುರುಕು ಮುಟ್ಟಿಸಿದರು. ಡೆಂಘೀ ಸೋಂಕಿನಿಂದ ಮಕ್ಕಳು ಸಾಯುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ತಕ್ಷಣವೇ ಎಲ್ಲ ಆಸ್ಪತ್ರೆಗಳಲ್ಲಿಯೂ ಡೆಂಘೀ ಪರೀಕ್ಷೆ ಹಾಗೂ ಸಕಾಲಿಕ ಚಿಕಿತ್ಸೆಗೆ ಬೇಕಾದ ವ್ಯವಸ್ಥೆ ಕಲ್ಪಿಸುವಂತೆ ಡಿಎಚ್‌ಒಗೆ ಸಲಹೆ ಕೊಟ್ಟರು. ಡೆಂಘೀ ಡೆತ್ ಆಡಿಟ್‌ಗೆ ಆಕ್ಷೇಪ ವ್ಯಕ್ತಪಡಿಸಿದ ಸಂಸದರು, ಹಿಮ್ಸ್ ಆಸ್ಪತ್ರೆ ಹಾಗೂ ಆರೋಗ್ಯ ಇಲಾಖೆ ದತ್ತಾಂಶಗಳಲ್ಲಿ ವ್ಯತ್ಯಾಸವಿದೆ. ಇಬ್ಬರೂ ಹೊಂದಾಣಿಕೆಯಿಂದ ಕೆಲಸ ಮಾಡಬೇಕು ಎಂದು ಸೂಚಿಸಿದರು. ಡೆಂಘೀ ಜ್ವಸರ ಕುರಿತು ಅರಿವು ಮೂಡಿಸುವಲ್ಲಿ ಎಲ್ಲರೂ ಕೆಲಸ ಮಾಡುತ್ತಿದ್ದು, ಔಷಧಿ ಎಲ್ಲವೂ ಇದ್ದು, ಯಾವ ಕೊರತೆ ಇರುವುದಿಲ್ಲ. ಸರ್ಕಾರಿ ಆಸ್ಪತ್ರೆಯಿಂದ ಹೊರಗೆ ಖಾಸಗಿ ಆಸ್ಪತ್ರೆಗೆ ಯಾರು ಕಳುಹಿಸಬೇಡಿ. ಯಾರು ಕೂಡ ದುಡ್ಡು ಇಟ್ಟುಕೊಂಡು ಬಂದಿರುವುದಿಲ್ಲ ಎಂದು ಕೆಲ ವೈದ್ಯರ ನಡೆ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಇದೆ ವೇಳೆ ಕೆಂಡಾಮಂಡಲವಾದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶಿವಸ್ವಾಮಿ, ಹಾಸನ ವೈದ್ಯಕೀಯ ಮಹಾವಿದ್ಯಾಲಯದ ನಿರ್ದೇಶಕ ಡಾ. ಎಸ್.ವಿ. ಸಂತೋಷ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಲೋಕೇಶ್, ಇತರರು ಉಪಸ್ಥಿತರಿದ್ದರು.