ನಗರದ ಎನ್. ಆರ್‌. ವೃತ್ತದಿಂದ ಹೊಸ ಬಸ್ ನಿಲ್ದಾಣದವರೆಗೆ ನಿರ್ಮಾಣವಾಗುತ್ತಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ಸಂಸದ ಶ್ರೇಯಸ್ ಪಟೇಲ್ ಅವರು ಶುಕ್ರವಾರ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಸಮಗ್ರವಾಗಿ ಪರಿಶೀಲಿಸಿದರು. ಎನ್. ಆರ್. ವೃತ್ತದ ಬಲಭಾಗದಲ್ಲಿ ನಿರ್ಮಾಣವಾಗಿರುವ ಸರ್ವಿಸ್ ರಸ್ತೆಯ ವಿನ್ಯಾಸ ಸಂಪೂರ್ಣವಾಗಿ ಅವೈಜ್ಞಾನಿಕವಾಗಿದ್ದು, ಇದರಿಂದ ವಾಹನ ಸವಾರರು ಮಾತ್ರವಲ್ಲದೆ ಪಾದಚಾರಿಗಳು ಕೂಡ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ನಗರದ ಎನ್. ಆರ್‌. ವೃತ್ತದಿಂದ ಹೊಸ ಬಸ್ ನಿಲ್ದಾಣದವರೆಗೆ ನಿರ್ಮಾಣವಾಗುತ್ತಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ಸಂಸದ ಶ್ರೇಯಸ್ ಪಟೇಲ್ ಅವರು ಶುಕ್ರವಾರ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಸಮಗ್ರವಾಗಿ ಪರಿಶೀಲಿಸಿದರು.

ಕಾಮಗಾರಿಯ ಪ್ರಗತಿ, ತಾಂತ್ರಿಕ ಅಂಶಗಳು ಹಾಗೂ ಸಾರ್ವಜನಿಕರಿಗೆ ಉಂಟಾಗುತ್ತಿರುವ ಸಂಚಾರ ದಟ್ಟಣೆ ಮತ್ತು ಅಸೌಕರ್ಯಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು. ಪರಿಶೀಲನೆ ವೇಳೆ ಮಾತನಾಡಿದ ಸಂಸದರು, ಎನ್. ಆರ್. ವೃತ್ತದ ಬಲಭಾಗದಲ್ಲಿ ನಿರ್ಮಾಣವಾಗಿರುವ ಸರ್ವಿಸ್ ರಸ್ತೆಯ ವಿನ್ಯಾಸ ಸಂಪೂರ್ಣವಾಗಿ ಅವೈಜ್ಞಾನಿಕವಾಗಿದ್ದು, ಇದರಿಂದ ವಾಹನ ಸವಾರರು ಮಾತ್ರವಲ್ಲದೆ ಪಾದಚಾರಿಗಳು ಕೂಡ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈ ಸಮಸ್ಯೆಯನ್ನು ನಿರ್ಲಕ್ಷ್ಯ ಮಾಡದೆ ತಕ್ಷಣವೇ ಜಂಟಿ ಸರ್ವೆ ನಡೆಸಿ, ಒಂದು ವಾರದೊಳಗೆ ವೈಜ್ಞಾನಿಕ ಹಾಗೂ ಶಾಶ್ವತ ಪರಿಹಾರ ಕ್ರಮಗಳೊಂದಿಗೆ ವರದಿ ಸಲ್ಲಿಸುವಂತೆ ರೈಲ್ವೆ ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಈ ಹಿಂದೆ ಅಧಿಕಾರಿಗಳು ಜೂನ್ 2026ರ ವೇಳೆಗೆ ಕಾಮಗಾರಿ ಪೂರ್ಣಗೊಳಿಸುವುದಾಗಿ ಭರವಸೆ ನೀಡಿದ್ದರೂ, ಪ್ರಸ್ತುತ ಕಾಮಗಾರಿಯ ವೇಗವನ್ನು ಗಮನಿಸಿದರೆ ನಿಗದಿತ ಅವಧಿಯಲ್ಲಿ ಮುಗಿಯುವ ಬಗ್ಗೆ ಸಂಶಯ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಯಾವುದೇ ಕಾರಣಕ್ಕೂ ಕಾಮಗಾರಿ ವಿಳಂಬವಾಗಬಾರದು ಎಂದು ಸೂಚಿಸಿದ ಸಂಸದರು, ಜೂನ್‌ನಲ್ಲಿ ಸಾಧ್ಯವಾಗದಿದ್ದರೂ ಆಗಸ್ಟ್ ಅಥವಾ ಸೆಪ್ಟೆಂಬರ್‌ ಒಳಗಾಗಿ ಮೇಲ್ಸೇತುವೆ ಕಾಮಗಾರಿ ಸಂಪೂರ್ಣಗೊಳಿಸಿ ಸಂಚಾರಕ್ಕೆ ಮುಕ್ತಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.ಯೋಜನೆಗೆ ಅನುದಾನದ ಕೊರತೆ ಇಲ್ಲವೆಂದು ಸ್ಪಷ್ಟಪಡಿಸಿದ ಶ್ರೇಯಸ್ ಪಟೇಲ್ ಅವರು, ರಾಜ್ಯ ಸರ್ಕಾರವು ತನ್ನ ಪಾಲಿನ 24 ಕೋಟಿ ರುಪಾಯಿ ಅನುದಾನವನ್ನು ಬಿಡುಗಡೆ ಮಾಡಿದ ಬಳಿಕ ಕಾಮಗಾರಿ ವೇಗ ಪಡೆದುಕೊಂಡಿದೆ ಎಂದು ಹೇಳಿದರು. ಕೇವಲ ಮೇಲ್ಸೇತುವೆ ನಿರ್ಮಾಣವೇ ನಮ್ಮ ಗುರಿಯಲ್ಲ, ಕಾಮಗಾರಿಯಿಂದ ಸುತ್ತಮುತ್ತಲಿನ ನಿವಾಸಿಗಳು, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡುವುದು ಕೂಡ ನಮ್ಮ ಆದ್ಯತೆಯಾಗಿದೆ ಎಂದು ಅವರು ಭರವಸೆ ನೀಡಿದರು.ಪರಿಶೀಲನಾ ವೇಳೆ ನಗರಸಭೆ, ರೈಲ್ವೆ ಹಾಗೂ ಗುತ್ತಿಗೆದಾರ ಸಂಸ್ಥೆಯ ಅಧಿಕಾರಿಗಳು ಉಪಸ್ಥಿತರಿದ್ದು, ಸಂಸದರು ನೀಡಿದ ಸೂಚನೆಗಳನ್ನು ಶೀಘ್ರವಾಗಿ ಜಾರಿಗೆ ತರುವುದಾಗಿ ಭರವಸೆ ನೀಡಿದರು.